ಕನ್ನಡಪ್ರಭ ವಾರ್ತೆ ಅರಸೀಕೆರೆ
ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆಗಳು ಜೋರಾಗಿರುವ ನಡುವೆಯೇ ಕ್ಷೇತ್ರದ ಶಾಸಕ ಕೆ.ಎಂ. ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ನೀಡಬೇಕೆಂಬ ಒತ್ತಾಯ ಮತ್ತಷ್ಟು ಬಲಗೊಂಡಿದೆ. ಜನಪರ ಆಡಳಿತ, ಅಭಿವೃದ್ಧಿ ಕಾರ್ಯಗಳು ಹಾಗೂ ಪಕ್ಷ ಸಂಘಟನೆಯಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಮೈಸೂರು-ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಪಡಿಸಬೇಕೆಂದು ತಾಲೂಕು ಗಂಗಾಮತ ಸಮಾಜದ ಅಧ್ಯಕ್ಷ ಲಕ್ಷ್ಮಣ್ ಆಗ್ರಹಿಸಿದರು.ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸತತ ನಾಲ್ಕು ಬಾರಿ ದಾಖಲೆಯ ಬಹುಮತದೊಂದಿಗೆ ಶಾಸಕರಾಗಿ ಆಯ್ಕೆಯಾಗಿರುವ ಶಿವಲಿಂಗೇಗೌಡರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿ ಅರಸೀಕೆರೆಯನ್ನು ರಾಜ್ಯದ ಮಾದರಿ ಕ್ಷೇತ್ರವನ್ನಾಗಿ ರೂಪಿಸಿದ್ದಾರೆ ಎಂದು ಹೇಳಿದರು. ರೈತರು, ಕೂಲಿ ಕಾರ್ಮಿಕರು ಹಾಗೂ ಶೋಷಿತ ವರ್ಗಗಳ ಸಮಸ್ಯೆಗಳನ್ನು ಹತ್ತಿರದಿಂದ ಅರಿತಿರುವ ಶಿವಲಿಂಗೇಗೌಡರು ಜನಸಾಮಾನ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸರ್ಕಾರದ ಯಾವುದೇ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವ ಸಾಮರ್ಥ್ಯ ಹೊಂದಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡಿದರೆ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಕ್ಷೇತ್ರದಿಂದ ಆಯ್ಕೆಯಾದ ಶಾಸಕರಿಗೆ ಇದುವರೆಗೆ ಸಚಿವ ಸ್ಥಾನ ದೊರೆಯದಿರುವುದು ಕ್ಷೇತ್ರದ ಜನರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಕಳೆದ ವಿಧಾನಸಭೆ ಚುನಾವಣೆಯ ವೇಳೆ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯನ್ನು ಈಡೇರಿಸಿ ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ನೀಡಬೇಕು ಎಂದುಒತ್ತಾಯಿಸಿದರು.
ಗಂಗಾಮತ ಸಮಾಜದ ಮುಖಂಡ ಜಾಜೂರು ಸಿದ್ದೇಶ್ ಮಾತನಾಡಿ, ಎರಡು ಬಾರಿ ರಾಜ್ಯ ಗೃಹ ಮಂಡಳಿ ಅಧ್ಯಕ್ಷರಾಗಿ ಹಾಗೂ ನಾಲ್ಕು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿರುವ ಶಿವಲಿಂಗೇಗೌಡರು ತಮ್ಮ ಎಲ್ಲ ಹುದ್ದೆಗಳನ್ನು ಜನಸೇವೆಗೆ ಸಮರ್ಪಿಸಿಕೊಂಡಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡುವುದರಿಂದ ರಾಜ್ಯದ ಜನತೆಗೆ ನ್ಯಾಯ ದೊರೆಯುವುದರ ಜೊತೆಗೆ ಪಕ್ಷ ಸಂಘಟನೆಗೂ ಹೊಸ ಚೈತನ್ಯ ಸಿಗಲಿದೆ ಎಂದು ಅಭಿಪ್ರಾಯಪಟ್ಟರು.ಸುದ್ದಿಗೋಷ್ಠಿಯಲ್ಲಿ ಸಮಾಜದ ಉಪಾಧ್ಯಕ್ಷ ರವಿಶಂಕರ್, ಕಾರ್ಯದರ್ಶಿ ಪುಟ್ಟಣ್ಣ, ಪುಟ್ಟಸ್ವಾಮಿ, ವಿಜಯಕುಮಾರ್, ಜಗದೀಶ್, ಪಾಂಡುರಂಗಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.