ಕನ್ನಡಪ್ರಭ ವಾರ್ತೆ ಅರಸೀಕೆರೆ

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹಾಗೂ ಕುರುಬ ಸಮುದಾಯದ ಮುಖಂಡ ಬಿಳಿ ಚೌಡಯ್ಯ ಮನವಿ ಮಾಡಿದ್ದಾರೆ. ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸಿರುವ ಶಿವಲಿಂಗೇಗೌಡರು ಗ್ರಾಮೀಣ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಜನಪ್ರತಿನಿಧಿಯಾಗಿ ಉತ್ತಮ ಸೇವೆ ಸಲ್ಲಿಸಿದ್ದು, ಅವರಿಗೆ ಸಚಿವ ಸ್ಥಾನ ನೀಡಿದರೆ ಪಕ್ಷ ಸಂಘಟನೆಗೆ ಹೊಸ ಚೈತನ್ಯ ದೊರೆಯಲಿದೆ ಎಂದು ಅಭಿಪ್ರಾಯಪಟ್ಟರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಶಿವಲಿಂಗೇಗೌಡರು ಗೃಹ ಮಂಡಳಿ ಅಧ್ಯಕ್ಷರಾಗಿಯೂ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿದ್ದು, ಸದನದಲ್ಲಿ ಜನಪರ ವಿಷಯಗಳನ್ನು ಪ್ರಸ್ತಾಪಿಸುವ ಮೂಲಕ ಗಮನ ಸೆಳೆದಿದ್ದಾರೆ. ಅವರ ಅನುಭವ ಮತ್ತು ಆಡಳಿತಾತ್ಮಕ ಸಾಮರ್ಥ್ಯವನ್ನು ಪರಿಗಣಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸಬೇಕು ಎಂದು ಒತ್ತಾಯಿಸಿದರು.ಈ ಸಂದರ್ಭದಲ್ಲಿ ಭಕ್ತ ಕನಕದಾಸ ಹಾಗೂ ಸಂಗೊಳ್ಳಿ ರಾಯಣ್ಣ ಜಯಂತ್ಯುತ್ಸವ ಆಚರಣೆ ಸಮಿತಿಯ ಅಧ್ಯಕ್ಷ ಶಿವಪ್ಪ, ಮೋಕ್ಷರಾಜ್, ಪರಮೇಶ್, ರವಿ ಸೇರಿದಂತೆ ಸಮುದಾಯದ ಹಲವು ಮುಖಂಡರು ಉಪಸ್ಥಿತರಿದ್ದರು.ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ದೊರೆಯಲಿ ಎಂಬ ಆಶಯದೊಂದಿಗೆ ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ನಗರದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಗಣಪತಿ ದೇವಾಲಯ, ಯಾದಪುರದ ಜೇನುಕಲ್ ಸಿದ್ದೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ಧಾರ್ಮಿಕ ಕ್ಷೇತ್ರಗಳಲ್ಲಿ ಪ್ರಾರ್ಥನೆಗಳು ನಡೆಯುತ್ತಿದ್ದು, ಹರಕೆ ರೂಪದಲ್ಲಿ ಗೀಳುಗಾಯಿ ಒಡೆದು ದೇವರ ಮೊರೆ ಹೋಗುತ್ತಿರುವುದು ಕಂಡುಬಂದಿದೆ.