ಮುಂಬರುವ ವಿಶ್ವ ಕನ್ನಡ ಸಮ್ಮೇಳನ ದಾವಣಗೆರೆಯಲ್ಲೇ ಆಯೋಜಿಸಬೇಕೆಂದು ಮುಖ್ಯಮಂತ್ರಿ ಮೇಲೆ ಒತ್ತಡ ತರುವುದಾಗಿ ಮುಜರಾಯಿ ಸಚಿವ ಕೆ.ಎಸ್.ಬಸವಂತಪ್ಪ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ದಾವಣಗೆರೆ
ಮುಂಬರುವ ವಿಶ್ವ ಕನ್ನಡ ಸಮ್ಮೇಳನ ದಾವಣಗೆರೆಯಲ್ಲೇ ಆಯೋಜಿಸಬೇಕೆಂದು ಮುಖ್ಯಮಂತ್ರಿ ಮೇಲೆ ಒತ್ತಡ ತರುವುದಾಗಿ ಮುಜರಾಯಿ ಸಚಿವ ಕೆ.ಎಸ್.ಬಸವಂತಪ್ಪ ಹೇಳಿದರು.ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಸಂಜೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ದಾವಣಗೆರೆ ಜಿಲ್ಲೆಯಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಅಚ್ಚ ಕನ್ನಡ ಮಾತನಾಡುವ ಜಿಲ್ಲೆಗಳಲ್ಲಿ ದಾವಣಗೆರೆಯೂ ಪ್ರಮುಖವಾಗಿದೆ. ಇಲ್ಲಿನ ಜನರಿಗೆ ಕನ್ನಡವೇ ಮುಖ್ಯ ಭಾಷೆಯಾಗಿದೆ. ಇಂತಹ ಕನ್ನಡದ ನೆಲದಲ್ಲಿ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸಬೇಕೆಂಬ ಕಳಕಳಿ ಇದೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರೊಂದಿಗೆ ಸೇರಿ ಮುಖ್ಯಮಂತ್ರಿ ಬಳಿ ಚರ್ಚಿಸಿ, ಸಮ್ಮೇಳನವನ್ನು ದಾವಣಗೆರೆಯಲ್ಲಿ ನಡೆಸಲು ಪ್ರಯತ್ನಿಸಲಾಗುವುದು ಎಂದರು.ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಯಲ್ಲಿ ಸರ್ಕಾರಿ ನೌಕರರ ಪಾತ್ರ ಮಹತ್ವದ್ದಾಗಿದೆ. ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾದ ಹಳೆಯ ಪಿಂಚಣಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಈಗಾಗಲೇ ಚರ್ಚೆ ನಡೆಸಿದ್ದಾರೆ. ಈ ಕುರಿತು ಶೀಘ್ರ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ. ನೌಕರರ ಬೇಡಿಕೆ ಈಡೇರಿಸಲು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
ಶಾಸಕ ಸಮರ್ಥ್ ಶಾಮನೂರು ಮಾತನಾಡಿ, ವಿವಿಧ ಇಲಾಖೆಗಳಲ್ಲಿ ಶೇ.70ರಷ್ಟು ಹುದ್ದೆಗಳು ಖಾಲಿ ಇರುವುದರಿಂದ ನೌಕರರ ಮೇಲೆ ಕೆಲಸದ ಒತ್ತಡ ಹೆಚ್ಚಾಗಿದೆ. 72 ಸಾವಿರ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಮುಖ್ಯಮಂತ್ರಿ ಘೋಷಿಸಿರುವುದು ಸ್ವಾಗತಾರ್ಹ. ಜಿಎಸ್ಟಿ ತೆರಿಗೆ ಸಂಗ್ರಹ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಕರ್ನಾಟಕದ ಸರ್ಕಾರಿ ನೌಕರರು ದೇಶದಲ್ಲೇ ಮುಂಚೂಣಿಯಲ್ಲಿದ್ದಾರೆ. ರಾಜ್ಯದ 5 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರ ನಿಸ್ವಾರ್ಥ ಸೇವೆ ಮತ್ತು ರಾಜ್ಯಭಕ್ತಿಯಿಂದ ರಾಜಕಾರಣಿಗಳು ಕಲಿಯಬೇಕಾದದ್ದು ಸಾಕಷ್ಟಿದೆ ಎಂದು ಅಭಿಪ್ರಾಯಪಟ್ಟರು.ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿ, ರಾಜ್ಯದ ಮಧ್ಯಭಾಗದಲ್ಲಿರುವ ಹಾಗೂ ಸ್ಪಷ್ಟವಾದ ಕನ್ನಡ ಮಾತನಾಡುವ ದಾವಣಗೆರೆಯಲ್ಲಿ ಮುಂದಿನ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸಬೇಕು. 14 ವರ್ಷಗಳ ಹಿಂದೆ ಬೆಳಗಾವಿಯಲ್ಲಿ ವಿಶ್ವ ಕನ್ನಡ ಸಮ್ಮೇಳನ ನಡೆದಿತ್ತು. ಮುಂದಿನ ಸಮ್ಮೇಳನವನ್ನು ಶಿವಮೊಗ್ಗದ ಬದಲು ದಾವಣಗೆರೆಗೆ ನೀಡಬೇಕು. ಸಮ್ಮೇಳನ ಯಶಸ್ವಿಗೊಳಿಸಲು ಸರ್ಕಾರಿ ನೌಕರರು, ಜಿಲ್ಲಾಡಳಿತ ಹಾಗೂ ಸ್ಥಳೀಯ ಸಂಸ್ಥೆಗಳು ಸರ್ಕಾರದೊಂದಿಗೆ ಕೈಜೋಡಿಸಲು ಸಿದ್ಧವಿವೆ ಎಂದರು.
ಸರ್ಕಾರಿ ನೌಕರರ ಹಬ್ಬದ ಮುಂಗಡ ಹಣವನ್ನು ₹25 ಸಾವಿರದಿಂದ ₹50 ಸಾವಿರಕ್ಕೆ ಹೆಚ್ಚಿಸಲು ಸಿಎಂ ಒಪ್ಪಿಗೆ ಸೂಚಿಸಿದ್ದಾರೆ. 25 ಲಕ್ಷ ಸರ್ಕಾರಿ ನೌಕರರ ಕುಟುಂಬಗಳಿಗೆ ಉಚಿತ ಚಿಕಿತ್ಸೆ ಒದಗಿಸುವ ಆರೋಗ್ಯ ಯೋಜನೆ ಬಲಪಡಿಸಲಾಗುತ್ತಿದೆ. ದಾವಣಗೆರೆ ಸೇರಿದಂತೆ 13 ಜಿಲ್ಲೆಗಳನ್ನು ಟಯರ್-3ರಿಂದ ಟಯರ್-2 ನಗರಗಳ ವ್ಯಾಪ್ತಿಗೆ ತರಲು ಅನುಮೋದನೆ ದೊರೆತಿದ್ದು, ಇದರಿಂದ ನೌಕರರಿಗೆ ಹೆಚ್ಚಿನ ವೈದ್ಯಕೀಯ ಸೌಲಭ್ಯಗಳು ಲಭಿಸಲಿವೆ ಎಂದರು.ಹಳೆಯ ಪಿಂಚಣಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಡಿಸೆಂಬರ್ನಲ್ಲಿ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಮತ್ತೊಮ್ಮೆ ಹಕ್ಕೊತ್ತಾಯ ಮಂಡಿಸಲಾಗುವುದು. 2023, 2024 ಹಾಗೂ 2025ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಗಳನ್ನು ಡಿಸೆಂಬರ್ನಲ್ಲಿ ವಿತರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಜಿಪಂ ಸಿಇಒ ಸಾಹಿತ್ಯ ಎಂ.ಆಲದಕಟ್ಟೆ ಮಾತನಾಡಿದರು. ವಿವಿಧ ಇಲಾಖೆಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ವೀರೇಶ್ ಎಸ್.ಒಡೇನಪುರ, ಸಿ.ಪರಶುರಾಮಪ್ಪ, ತಿಪ್ಪೇಸ್ವಾಮಿ, ಓಬಳಪ್ಪ ಜಿ., ಶ್ರೀನಿವಾಸ ರಾಯರೆಡ್ಡಿ, ಬಿ.ಶಿವಣ್ಣ, ಗೋವಿಂದಪ್ಪ ಎಚ್.ಆರ್., ಲೋಕೇಶ್ ಇ., ಮಂಜುನಾಥ ಎಚ್.ಎಸ್. ಸೇರಿದಂತೆ ಒಟ್ಟು 10 ಸಾಧಕರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಯಿತು.ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ನೌಕರರು ಉಪಸ್ಥಿತರಿದ್ದರು.
- - --18ಕೆಡಿವಿಜಿ45, 43.: ಸಮಾರಂಭವನ್ನು ಸಚಿವ ಕೆ.ಎಸ್.ಬಸವಂತಪ್ಪ ಉದ್ಘಾಟಿಸಿದರು. ಸಮರ್ಥ ಶಾಮನೂರು, ಷಡಾಕ್ಷರಿ ಇತರ ಗಣ್ಯರು ಇದ್ದರು.