ಅನುದಾನಿತ ಶಾಲಾ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ಖಾಲಿ ಹುದ್ದೆಗಳ ಭರ್ತಿಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಲಾಯಿತು.

ಮುಂಡಗೋಡ: ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಮತ್ತು ನೌಕರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ, ಖಾಸಗಿ ಶಿಕ್ಷಣ ಆಡಳಿತ ಮಂಡಳಿಗಳ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ತಾಲೂಕು ಘಟಕದ ವತಿಯಿಂದ ತಹಸೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರ ಮಾರ್ಗದರ್ಶನದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಹಾಗೂ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆರಂಭಿಸಲಾಗಿರುವ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಅನುದಾನಿತ ಶಾಲಾ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ಖಾಲಿ ಹುದ್ದೆಗಳ ಭರ್ತಿಗೆ ಅನುಮತಿ ನೀಡಬೇಕು. ಅನುದಾನಿತ ಶಾಲೆಗಳಿಗೂ ದ್ವಿಭಾಷಾ ಪದ್ಧತಿ ವಿಸ್ತರಿಸಬೇಕು. ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಬೇಕು. ಅನುದಾನರಹಿತ ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ಒದಗಿಸಬೇಕು. ನೌಕರರಿಗೆ ಸೇವಾ ಭದ್ರತೆ ಹಾಗೂ ಆರೋಗ್ಯ ಸೌಲಭ್ಯ ಕಲ್ಪಿಸುವುದು ಸೇರಿದಂತೆ ಒಟ್ಟು ೧೭ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಯಿತು.

ಈ ಕುರಿತು ಸರ್ಕಾರದ ಗಮನಕ್ಕೆ ಹಲವು ಬಾರಿ ತಂದಿದ್ದರೂ ಸೂಕ್ತ ನಿರ್ಧಾರ ಕೈಗೊಳ್ಳದ ಹಿನ್ನೆಲೆ ಅನಿವಾರ್ಯವಾಗಿ ಹೋರಾಟದ ಹಾದಿ ಹಿಡಿಯಬೇಕಾಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಉಳಿವು, ನೌಕರರ ಹಕ್ಕುಗಳ ರಕ್ಷಣೆ ಹಾಗೂ ಶಿಕ್ಷಣಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಸರ್ಕಾರ ಕೂಡಲೇ ಬೇಡಿಕೆಗಳನ್ನು ಪರಿಗಣಿಸಿ ನ್ಯಾಯ ಒದಗಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಖಾಸಗಿ ಶಿಕ್ಷಣ ಆಡಳಿತ ಮಂಡಳಿಗಳ ಒಕ್ಕೂಟದ ತಾಲೂಕು ಅಧ್ಯಕ್ಷ ಎಸ್. ಫಕ್ಕೀರಪ್ಪ, ಜಿಲ್ಲಾ ಸಮಿತಿ ಸದಸ್ಯ ಡಾ. ಪಿ.ಪಿ. ಛಬ್ಬಿ, ಧರ್ಮರಾಜ ನಡಗೇರಿ, ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್.ಡಿ. ಮಡೆಣ್ಣವರ, ಕಾರ್ಯದರ್ಶಿ ಜಿ.ಎನ್. ಕುಲಕರ್ಣಿ, ಖಜಾಂಚಿ ಇಕ್ಬಾಲ್ ಅಹ್ಮದ್, ಉಪಾಧ್ಯಕ್ಷ ಎಸ್.ಎನ್. ಸವದತ್ತಿ ಹಾಗೂ ವಿ.ವಿ. ಮಲ್ಲನಗೌಡ್ರ, ಸಂಘಟನಾ ಕಾರ್ಯದರ್ಶಿ ವಿಜಯಕುಮಾರ, ಸದಸ್ಯ ಶರಣಪ್ಪ ಜಡೆದಲಿ, ಕಿರಣ ರಾವ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.