ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಲಕ್ಷ್ಮೇಶ್ವರ, ಶಿರಹಟ್ಟಿ ಹಾಗೂ ಮುಂಡರಗಿ ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿ ಸಮಗ್ರ ರೈತ ಸಂಘಟನೆಗಳ ಒಕ್ಕೂಟ, ವಿವಿಧ ರೈತ ಸಂಘಟನೆಗಳು ಹಾಗೂ ಕರವೇ ಸಂಘಟನೆಗಳು ಮಂಗಳವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಲಕ್ಷ್ಮೇಶ್ವರ

ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಲಕ್ಷ್ಮೇಶ್ವರ, ಶಿರಹಟ್ಟಿ ಹಾಗೂ ಮುಂಡರಗಿ ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿ ಸಮಗ್ರ ರೈತ ಸಂಘಟನೆಗಳ ಒಕ್ಕೂಟ, ವಿವಿಧ ರೈತ ಸಂಘಟನೆಗಳು ಹಾಗೂ ಕರವೇ ಸಂಘಟನೆಗಳು ಮಂಗಳವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಮನವಿ ಸಲ್ಲಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಬರ ಪರಿಸ್ಥಿತಿ ಅಧ್ಯಯನ ಹಾಗೂ ಮುಕ್ತಿಮಂದಿರ ಧರ್ಮಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭ ಮನವಿ ಸಲ್ಲಿಸಲಾಯಿತು.

ಮುಂಗಾರು ಮಳೆಯ ಕೊರತೆಯಿಂದ ಮೂರು ತಾಲೂಕುಗಳಲ್ಲೂ ಬೆಳೆಗಳು ಒಣಗಿ, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೀಜ, ಗೊಬ್ಬರ, ಉಳುಮೆ ಹಾಗೂ ಕೂಲಿ ಸೇರಿದಂತೆ ಕೃಷಿಗೆ ಮಾಡಿದ ಖರ್ಚು ಕೂಡ ಮರಳದ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ಪರಿಸ್ಥಿತಿ ಪರಿಶೀಲಿಸಿ ಬರ ಘೋಷಣೆಯ ಭರವಸೆ ನೀಡಿದ್ದರೂ ತಾಲೂಕುಗಳನ್ನು ಪಟ್ಟಿಯಿಂದ ಕೈಬಿಟ್ಟಿರುವುದು ಅನ್ಯಾಯವಾಗಿದೆ. ಮೂರು ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಿ, ಜಂಟಿ ಬೆಳೆನಷ್ಟ ಸಮೀಕ್ಷೆ ನಡೆಸಿ ಪ್ರತಿ ಎಕರೆಗೆ ಕನಿಷ್ಠ ₹೫೦ ಸಾವಿರ ಪರಿಹಾರ ನೀಡಬೇಕು. ರೈತರ ₹೧ ಲಕ್ಷದವರೆಗಿನ ಕೃಷಿ ಸಾಲ ಮನ್ನಾ ಮಾಡಬೇಕು. ಬೆಳೆ ವಿಮೆ ಹಾಗೂ ಎಸ್‌ಡಿಆರ್‌ಎಫ್ ಪರಿಹಾರವನ್ನು ತ್ವರಿತವಾಗಿ ಬಿಡುಗಡೆ ಮಾಡಬೇಕು. ಜಾನುವಾರುಗಳಿಗೆ ಮೇವು ಬ್ಯಾಂಕ್ ಆರಂಭಿಸುವುದು, ಉದ್ಯೋಗ ಖಾತರಿ ಯೋಜನೆಯಡಿ ಕೆಲಸದ ದಿನಗಳನ್ನು ಹೆಚ್ಚಿಸಿ ಕೂಲಿ ಸಕಾಲದಲ್ಲಿ ಪಾವತಿಸುವ ಮೂಲಕ ಗ್ರಾಮೀಣ ಜನರ ಗುಳೆ ತಡೆಯಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ವೇಳೆ ಹೊನ್ನಪ್ಪ ವಡ್ಡರ, ಮಹೇಶ ಹೊಗೆಸೊಪ್ಪಿನ, ನಾಗರಾಜ ಚಿಂಚಲಿ, ಸೋಮಣ್ಣ ಡಾಣಗಲ್, ಚನ್ನಪ್ಪ ಷಣ್ಮುಕಿ, ಚಂದ್ರು ಮಾಗಡಿ, ಬಸವರಾಜ ಹಿರೇಮನಿ, ಮಂಜು ಮುಳಗುಂದ, ಸುರೇಶ ಹಟ್ಟಿ, ಭರಮಣ್ಣ ರೊಟ್ಟಿಗವಾಡ, ಎಚ್.ಎಚ್. ಪಾಟೀಲ, ಬಿ.ಎನ್. ಉಮಚಗಿ, ಶಿವಪ್ಪ ಹುಲಕೋಟಿ, ಬಸಣ್ಣ ಹಂಜಿ, ದ್ಯಾಮಪ್ಪ ಮತ್ತೂರ, ಬಸವರಾಜ ಪ್ಯಾಟಿ, ಶಿವಾನಂದ ಲಿಂಗಶೆಟ್ಟಿ ಸೇರಿದಂತೆ ವಿವಿಧ ರೈತ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ರೈತರು ಪಾಲ್ಗೊಂಡಿದ್ದರು.