ಕನ್ನಡಪ್ರಭ ವಾರ್ತೆ ಬೆಳಗಾವಿ ಕುರುಬ ಸಮುದಾಯವನ್ನು ಎಸ್ಟಿ ಪಟ್ಟಿಗೆ ಸೇರಿಸುವ ಮೂಲಕ ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಕುರುಬರ ಸಂಘದಿಂದ ನಗರದ ಡಿಸಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಕುರುಬ ಸಮುದಾಯವನ್ನು ಎಸ್ಟಿ ಪಟ್ಟಿಗೆ ಸೇರಿಸುವ ಮೂಲಕ ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಕುರುಬರ ಸಂಘದಿಂದ ನಗರದ ಡಿಸಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೇರಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಕರ್ನಾಟಕ ಯುವ ಘಟಕದ ರಾಜ್ಯಾಧ್ಯಕ್ಷ ಶಂಕರ ಹೆಗಡೆ ಮಾತನಾಡಿ, ಕುರುಬ ಸಮುದಾಯ ಸಾಮಾಜಿಕ, ರಾಜಕೀಯ ಹಾಗೂ ಶೈಕ್ಷಣಿಕವಾಗಿ ಬಹಳಷ್ಟು ಹಿಂದೆ ಉಳಿದಿದೆ. ಹೀಗಾಗಿ ನಾವು ನಮ್ಮ ಹಕ್ಕು ಕೇಳುತ್ತಿದ್ದೇವೆ. ಯಾರ ಹಕ್ಕನ್ನು ಕಸಿದುಕೊಳ್ಳುತ್ತಿಲ್ಲ. ಸರ್ಕಾರ ಶೀಘ್ರ ನಮ್ಮ ಸಮುದಾಯವನ್ನು ಎಸ್ಟಿ ಪಟ್ಟಿಗೆ ಸೇರಿಸುವ ಮೂಲಕ ಸಮಾಜದ ಅಭಿವೃದ್ಧಿಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.ಈ ಬಗ್ಗೆ ಹಲವು ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಆದರೆ,ಇದುವರೆಗೆ ನಮ್ಮ ಬೇಡಿಕೆ ಈಡೇರಿಲ್ಲ. ಈ ಚಳಿಗಾಲದ ಅಧಿವೇಶನದಲ್ಲಾದರೂ ಈ ಬಗ್ಗೆ ಚರ್ಚಿಸಿ, ಸರಕಾರ ನಮ್ಮ ಬೇಡಿಕೆ ಪೂರೈಸಲು ಕ್ರಮ ವಹಿಸಬೇಕು. ಇಲ್ಲವಾದಲ್ಲಿ ಡಿ.15ರಂದು ಇಲ್ಲಿನ ಸುವರ್ಣವಿಧಾನಸೌಧದ ಎದುರು ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಮಹದೇವ ಪೂಜಾರಿ, ಸುರೇಂದ್ರ ಕರಿಗಾರ, ಸಿದ್ದಲಿಂಗ ಪಾಟೀಲ, ಪ್ರಭು ಬೆಟಗೇರಿ, ಮಲ್ಲಿಕಾರ್ಜುನ್ ಕುರುಬರ, ಸಂತೋಷ ಪೂಜಾರಿ, ಶಂಕರ ಪೂಜಾರಿ, ರಮೇಶ ಪಾಟೀಲ, ನಿಂಗಜ ದಡ್ಡಿಮನಿ, ಮಾರುತಿ ಲೋಕೂರ ಸೇರಿದಂತೆ ಇತರರು ಪಾಲ್ಗೊಂಡಿದ್ದರು.