ನಗರದ ಪ್ರಮುಖ ರಸ್ತೆಗಳು ತಗ್ಗು-ಗುಂಡಿಗಳಿಂದ ಕೂಡಿದ್ದು, ವಿಪರೀತ ಧೂಳಿನಿಂದ ಸಾರ್ವಜನಿಕರು, ವ್ಯಾಪಾರಿಗಳು ಹಾಗೂ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ.

ಹುಬ್ಬಳ್ಳಿ: ಧೂಳು ಮುಕ್ತ ಹಾಗೂ ಗುಂಡಿ ಮುಕ್ತ ಹುಬ್ಬಳ್ಳಿ ನಗರ ನಿರ್ಮಾಣಕ್ಕೆ ಒತ್ತಾಯಿಸಿ ನಮ್ಮ ಕರ್ನಾಟಕ ಸೇನೆ ನೇತೃತ್ವದಲ್ಲಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಾರ್ವಜನಿಕರಿಗೆ ಮಾಸ್ಕ್ ವಿತರಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.

ನಗರದ ಪ್ರಮುಖ ರಸ್ತೆಗಳು ತಗ್ಗು-ಗುಂಡಿಗಳಿಂದ ಕೂಡಿದ್ದು, ವಿಪರೀತ ಧೂಳಿನಿಂದ ಸಾರ್ವಜನಿಕರು, ವ್ಯಾಪಾರಿಗಳು ಹಾಗೂ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿಭಟನಾಕಾರರು ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿದರು. ಬಳಿಕ ಪ್ರತಿಭಟನಾಕಾರರು ಮೆರವಣಿಗೆ ಮೂಲಕ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಮಹೇಶ ಪತ್ತಾರ ಮಾತನಾಡಿ, ನಗರದ ರಸ್ತೆಗಳಲ್ಲಿ ಸಂಗ್ರಹವಾಗಿರುವ ಮಣ್ಣು, ಕೆಸರು ಹಾಗೂ ಧೂಳನ್ನು ಸಮರ್ಪಕವಾಗಿ ತೆರವುಗೊಳಿಸಬೇಕು. ತಗ್ಗು- ಗುಂಡಿಗಳಿಂದ ಕೂಡಿದ ರಸ್ತೆಗಳ ದುರಸ್ತಿ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮಳೆ ಬಂದಾಗ ಬಿಆರ್‌ಟಿಎಸ್ ಕಾರಿಡಾರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಜಲಾವೃತವಾಗುತ್ತಿದ್ದು, ರಸ್ತೆ ಮೇಲಿನ ಮಣ್ಣು ಕೆಸರಾಗಿ, ಬಿಸಿಲಿನಲ್ಲಿ ಒಣಗಿದ ಬಳಿಕ ಧೂಳಾಗಿ ಪರಿವರ್ತನೆಯಾಗುತ್ತಿದೆ. ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಅವರು ಹೇಳಿದರು. ವಿವಿಧ ಇಲಾಖೆಗಳ ಕಾಮಗಾರಿಗಳ ನಡುವೆ ಸಮನ್ವಯತೆ ಸಾಧಿಸಿ ಅಪೂರ್ಣ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.

ಹುಬ್ಬಳ್ಳಿ ನಗರದಲ್ಲಿ ನಡೆಯುತ್ತಿರುವ ಪ್ಲೈಓವರ್ ಕಾಮಗಾರಿಯನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಬಸವರಾಜ ದೇವರಮನಿ, ಬಸವರಾಜ ಸಾಲಿ, ಶೀತಲ್ ಮಲಗಾವಿ, ಅನ್ವರ ಬಫೇಖಾನ್, ಮಂಜು ಪವಾರ, ಮನೋಹರ ಸಫಾರೆ, ಪವನ ಲದವಾ, ವಿಶ್ವನಾಥ ಕೌಜಲಗಿ, ಸಿದ್ದು ಸಫಾರೆ, ಮಾರುತಿ ಗಾಯಕವಾಡ, ಈರಪ್ಪ ಮಿಲಾನಿ, ಸಂತೋಷ ಗಾಲೇರ ಮುಂತಾದವರು ಉಪಸ್ಥಿತರಿದ್ದರು.