ರಾಜ್ಯದ ಪ್ರತಿ ಸರ್ಕಾರಿ ಶಾಲೆಗೂ ಮೂಲ ಸೌಕರ್ಯ ಕಲ್ಪಿಸಲು ಆಗ್ರಹ

| Published : Oct 09 2025, 02:01 AM IST

ಸಾರಾಂಶ

ರಾಜ್ಯದ ಪ್ರತಿಯೊಂದು ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಒದಗಿಸಬೇಕು. ಪೂರ್ಣ ಪ್ರಮಾಣದ ವಿಷಯವಾರು ಶಿಕ್ಷಕರನ್ನು ನೇಮಕ ಮಾಡಬೇಕು.

ಗದಗ: ಯುವ ಪರಿವರ್ತನೆ ಯಾತ್ರೆಯ ಹಕ್ಕೊತ್ತಾಯಗಳನ್ನು ಸರ್ಕಾರ ಈಡೇರಿಸುವಂತೆ ಆಗ್ರಹಿಸಿ ಜನಸಾಮಾನ್ಯರ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ವೇದಿಕೆಯ ರಾಜ್ಯ ಸಂಚಾಲಕ ಯಲ್ಲಪ್ಪ ಹೆಗಡೆ ಮಾತನಾಡಿ, ರಾಜ್ಯದ ಜ್ವಲಂತ ಸಮಸ್ಯೆಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯವನ್ನು ಸರ್ಕಾರದ ಗಮನಕ್ಕೆ ತರಲು ಪಕ್ಷಾತೀತವಾಗಿ, ಜಾತ್ಯತೀತವಾಗಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜಾಥಾ ಹಮ್ಮಿಕೊಂಡು, ರಾಜ್ಯದಲ್ಲಿ ಆರೋಗ್ಯ, ಶಿಕ್ಷಣ, ಕೃಷಿ, ಉದ್ಯೋಗ, ಸಬಲೀಕರಣ ಮುಂತಾದ ಕ್ಷೇತ್ರಗಳಲ್ಲಿ ಅಭಿವೃದ್ಧಿಯನ್ನು ಕೈಗೊಳ್ಳಲು ರಾಜ್ಯದ ಬೀದರಿಂದ ಪ್ರಾರಂಭಗೊಂಡು ಬೆಂಗಳೂರಿನ ವಿಧಾನಸೌಧದವರೆಗೂ 1200 ಕಿಮೀ ಯುವ ಪರಿವರ್ತನೆ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.

ರಾಜ್ಯದ ಪ್ರತಿಯೊಂದು ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಒದಗಿಸಬೇಕು. ಪೂರ್ಣ ಪ್ರಮಾಣದ ವಿಷಯವಾರು ಶಿಕ್ಷಕರನ್ನು ನೇಮಕ ಮಾಡಬೇಕು. ಕೆಪಿಎಸ್‌ಸಿ ಮತ್ತು ಇಲಾಖಾ ನೇಮಕಾತಿ ಪ್ರಾಧಿಕಾರಗಳು ಸಕಾಲಿಕ ನೇಮಕಾತಿ ಕ್ಯಾಲೆಂಡರ್‌ ಪ್ರಕಟಿಸಿ, ಪ್ರತಿ ಹಂತಗಳ ನಿಗದಿತ ವೇಳಾಪಟ್ಟಿಯನ್ನು ಮುಂದೂಡದೆ ಡಿಜಿಟಲ್ ಪಾರದರ್ಶಕತೆ ಅಳವಡಿಸಿಕೊಂಡು ಭ್ರಷ್ಟಾಚಾರ ಮುಕ್ತ ನೇಮಕಾತಿ ಕೈಗೊಳ್ಳಬೇಕು.

ಖಾಸಗಿ ಕೈಗಾರಿಕೆಗಳಲ್ಲಿ ಉದ್ಯೋಗ ಮೀಸಲಾತಿ ಮತ್ತು ಎಲ್ಲ ಹುದ್ದೆಗಳಲ್ಲಿ ಸ್ಥಳೀಯರಿಗೆ ಪ್ರಾಮುಖ್ಯ ಕಲ್ಪಿಸಬೇಕು. ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಇಲಾಖಾವಾರು ವಾರ್ಷಿಕ ನೇಮಕಾತಿ ಕ್ಯಾಲೆಂಡರ್ ಪ್ರಕಟಿಸಬೇಕು. ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮಲ್ಟಿ ಸ್ಪೆಶಾಲಿಟಿ ಸೌಲಭ್ಯವುಳ್ಳ ಆಸ್ಪತ್ರೆಗಳ ನಿರ್ಮಾಣ ಹಾಗೂ ತಾಲೂಕು ಕೇಂದ್ರಗಳಲ್ಲಿ ಸುಸಜ್ಜಿತ ಆಸ್ಪತ್ರೆಗಳ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ ಸೇರಿದಂತೆ ಮುಂತಾದವರು ಇದ್ದರು.