ಸಾರಾಂಶ
ಅಪಘಾತಕ್ಕೊಳಗಾದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವೈದ್ಯಕೀಯ ಚಿಕಿತ್ಸೆ ಜೊತೆಗೆ ಒಂದು ಲಕ್ಷ ರು. ಪರಿಹಾರ ಒದಗಿಸಲು ಹಾಗೂ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲು ಎಸ್‌ಎಫ್‌ಐ ಜಿಲ್ಲಾ ಸಮಿತಿ ನೇತೃತ್ವದಲ್ಲಿ ದೇವಗಿರಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಸೋಮವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.
ಹಾವೇರಿ: ಅಪಘಾತಕ್ಕೊಳಗಾದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವೈದ್ಯಕೀಯ ಚಿಕಿತ್ಸೆ ಜೊತೆಗೆ ಒಂದು ಲಕ್ಷ ರು. ಪರಿಹಾರ ಒದಗಿಸಲು ಹಾಗೂ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲು ಎಸ್‌ಎಫ್‌ಐ ಜಿಲ್ಲಾ ಸಮಿತಿ ನೇತೃತ್ವದಲ್ಲಿ ದೇವಗಿರಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಸೋಮವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.
ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಗಾಯಗೊಂಡ ಪರಿಣಾಮ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ದೇವಗಿರಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಜಿಲ್ಲಾಡಳಿತ ಭವನಕ್ಕೆ ಆಗಮಿಸಿತು. ನಂತರ ಪ್ರತಿಭಟನಾ ವಿದ್ಯಾರ್ಥಿಗಳು ಘೋಷಣೆ ಕೂಗಿ ಗಾಯಗೊಂಡ ವಿದ್ಯಾರ್ಥಿಗಳಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದರು. ದಿನನಿತ್ಯವು ಕೆಎಸ್‌ಆರ್‌ಟಿಸಿ ಸಾರಿಗೆ ಸಂಸ್ಥೆಯು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕ ಸೇವೆ ಒದಗಿಸುವಲ್ಲಿ ನಿರ್ಲಕ್ಷ್ಯತನ ತೋರಿತ್ತಿರುವುದು ಹಾಗೂ ಶಕ್ತಿ ಯೋಜನೆ ನೆಪದಿಂದಾಗಿ ತಮ್ಮ ಕರ್ತವ್ಯ ಜವಾಬ್ದಾರಿ ಮರೆಮಾಚುತ್ತಿರುವುದನ್ನು ಎಸ್‌ಎಫ್‌ಐ ತೀವ್ರವಾಗಿ ಖಂಡಿಸುತ್ತದೆ. ಎಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿಗಳು ಸೋಮವಾರ ತರಗತಿಗಳಿಗೆ ಹೋಗುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಬಸ್ ಹತ್ತುವ ಮುಂಚೆ ಬಸ್ ಬಿಟ್ಟಿದ್ದು ಬಸ್ ಮುಂದೆ ಇರುವ ಆಟೋಕ್ಕೆ ಡಿಕ್ಕಿ ಹೊಡೆದು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡ ವಿದ್ಯಾರ್ಥಿಗಳಾದ ರೇವಣಸಿದ್ದೇಶ್ ವಿ., ಆರ್. ಕಿರಣ, ಮೋಹನ್ ಎಚ್., ಪ್ರವೀಣ್ ರಾಠೋಡ್ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ ಚಾಲಕ ಹಾಗೂ ನಿರ್ವಾಹಕರ ನಿರ್ಲಕ್ಷ್ಯತನದಿಂದಾಗಿ ಈ ಘಟನೆ ಸಂಭವಿಸಿದೆ ಎಂದು ದೂರಿದರು. ಎಸ್‌ಎಫ್‌ಐ ರಾಜ್ಯಾಧ್ಯಕ್ಷರಾದ ಅಮರೇಶ್ ಕಡಗದ ಮಾತನಾಡಿ, ಸರ್ಕಾರ ಹಾಗೂ ಜಿಲ್ಲಾಡಳಿತ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕ ಸೇವೆಗೆ ಸಮರ್ಪಕವಾಗಿ ಬಸ್‌ಗಳನ್ನು ಬಿಡಬೇಕು ಹಾಗೂ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಬಸ್ ಸೌಲಭ್ಯ ಒದಗಿಸಬೇಕು. ಅನ್ಯಾಯಕ್ಕೆ ಒಳಗಾದ ವಿದ್ಯಾರ್ಥಿಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು. ಎಸ್‌ಎಫ್‌ಐ ಜಿಲ್ಲಾ ಸಹ ಕಾರ್ಯದರ್ಶಿ ಬಸವರಾಜ ಎಸ್. ಮಾತನಾಡಿ, ಸರ್ಕಾರಿ ಎಂಜಿನಿಯರಿಂಗ್ ಮಹಾವಿದ್ಯಾಲಯಕ್ಕೆ ಪ್ರತಿ ನಿತ್ಯವು ಕನಿಷ್ಠ ೨೦ ಬಸ್‌ಗಳನ್ನು ಬಿಡಬೇಕು. ಸಾರಿಗೆ ಸಂಸ್ಥೆ ಸಿಬ್ಬಂದಿಗಳಿಗೆ ಶಿಸ್ತು ಕ್ರಮ ಜರುಗಿಸಬೇಕು. ಗಾಯಗಳು ವಿದ್ಯಾರ್ಥಿಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಜೊತೆಗೆ ೧ ಲಕ್ಷ ಪರಿಹಾರ ಕೊಡಬೇಕು. ಜಿಲ್ಲಾಧಿಕಾರಿ ನೇತೃತ್ವದಲ್ಲಿ ವಿದ್ಯಾರ್ಥಿಗಳ ಸಭೆ ಕರೆದು ಇಡೀ ಜಿಲ್ಲೆಯ ಬಸ್ಸಿನ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ, ಜಿಪಂ ಸಿಇಒ ಅಕ್ಷಯ ಶ್ರೀಧರ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಎಸ್‌ಎಫ್‌ಐ ಮುಖಂಡರಾದ ಮಹೇಶ್ ಮರೋಳ, ಕಿರಣ ಬಿ, ಅಭಿಷೇಕ ಹಲಗೇರಿ, ನವೀನ್, ಪ್ರಥಮೇಶ್, ಕುಮುದಾ ಯಶೋದಾ, ಅಕ್ಷತಾ ಕೆ ಆರ್, ಕೀರ್ತನಾ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.