ಸಾರಾಂಶ
ಮುಂಡಗೋಡ: ಕಟ್ಟಡ ನಿರ್ಮಾಣ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ತಾಲೂಕು ಸಮಿತಿಯವರು ಬುಧವಾರ ಇಲ್ಲಿಯ ಕಾರ್ಮಿಕ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಕಾನೂನುಬದ್ಧವಾಗಿ ಸಿಗುತ್ತಿದ್ದ ಸೌಲಭ್ಯಗಳು ಸಿಗುತ್ತಿಲ್ಲ. ಈ ಬಗ್ಗೆ ಇಲಾಖೆಯ ಅಧಿಕಾರಿಗಳ ಜತೆಗೂ ಹಲವು ಸುತ್ತಿನ ಮಾತುಕತೆಗಳು ನಡೆದಿವೆ. ೧೨ ತಿಂಗಳಿಂದ ಹೋರಾಟಗಳು ಮಾಡಲಾಗುತ್ತಿದೆ. ಶೈಕ್ಷಣಿಕ ಸಹಾಯಧನ, ವಿವಾಹ ಸಹಾಯಧನ, ವೈದ್ಯಕೀಯ ಪರಿಹಾರಕ್ಕೆ ಸಲ್ಲಿಕೆಯಾದ ಸಾವಿರಾರು ಅರ್ಜಿಗಳು ಕಳೆದ ಒಂದು ವರ್ಷದಿಂದ ಕೊಳೆಯುತ್ತಿವೆ. ಪಿಂಚಣಿ ನಿಂತು ಹೋಗಿದೆ. ಹೀಗಾಗಿ ಅವರ ಜೀವನ ಕಷ್ಟಕ್ಕೆ ಸಿಲುಕಿದೆ. ಶೈಕ್ಷಣಿಕ ಸಹಾಯಧನ ಬಿಡುಗಡೆಗಾಗಿ ಹೈಕೋರ್ಟ್ ಮೆಟ್ಟಿಲೇರಬೇಕಾಯಿತು. ಮತ್ತೊಂದೆಡೆ ಕಾರ್ಮಿಕರು ಕೇಳದಿದ್ದರೂ ಲ್ಯಾಪ್‌ಟಾಪ್, ವೈದ್ಯಕೀಯ ತಪಾಸಣೆ, ಪೌಷ್ಟಿಕಾಂಶ(ಆಯುರ್ವೇದ) ಕಿಟ್‌ಗಳನ್ನು ಖರೀದಿಸಲಾಗಿದೆ. ಇದಕ್ಕಾಗಿ ಮಂಡಳಿಯ ನೂರಾರು ಕೋಟಿ ರುಪಾಯಿ ಖರ್ಚು ಮಾಡಲಾಗಿದೆ. ಇದರಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಡಿಬಿಟಿ ಮೂಲಕ ಕಾರ್ಮಿಕರಿಗೆ ನೇರವಾಗಿ ಸಂದಾಯವಾಗುವ ಸೌಲಭ್ಯಗಳನ್ನು ಕೊಡಲು ನಿರಾಸಕ್ತಿ ಕಾಣುತ್ತಿದೆ. ನೋಂದಣಿ ಮತ್ತು ಮರು ನೋಂದಣಿಗಾಗಿ ಸಲ್ಲಿಸಿಲಾದ ಅರ್ಜಿಗಳನ್ನು ಸಕಾರಣವಿಲ್ಲದೇ ರದ್ದುಗೊಳಿಸಲಾಗುತ್ತಿದೆ. ಇದು ಕಲ್ಯಾಣ ಮಂಡಳಿಗೆ ಕಾರ್ಮಿಕರ ಹಿತಾಸಕ್ತಿ ಮುಖ್ಯವಾಗಿಲ್ಲ. ಸಾಮಾಜಿಕ ಸುರಕ್ಷೆ ನೀಡುವ ಉದ್ದೇಶದಿಂದ ಸ್ಥಾಪಿಸಲಾದ ಕಲ್ಯಾಣ ಮಂಡಳಿಯ ಸದುದ್ದೇಶವೇ ಮಣ್ಣುಪಾಲಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಜಿಲ್ಲಾಧ್ಯಕ್ಷ ಶಾಂತಾರಾಮ ನಾಯ್ಕ. ಬೀಮಣ್ಣ ಭೊವಿ ಮುಂತಾದವರು ಉಪಸ್ಥಿತರಿದ್ದರು.