ವಸತಿ ನಿಲಯದ ಅವ್ಯವಸ್ಥೆ ಸರಿಪಡಿಸುವಂತೆ ಆಗ್ರಹ

| Published : Jul 10 2024, 12:34 AM IST

ಸಾರಾಂಶ

ಸರಕಾರಿ ಮೆಟ್ರಿಕ್ ನಂತರ ಬಾಲಕರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ ಕೊರತೆ, ಊಟ-ಉಪಚಾರದ ಅವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಹಾಸ್ಟೆಲ್‌ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಶಹಾಪುರ

ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯಡಿಯಲ್ಲಿರುವ ಸರಕಾರಿ ಮೆಟ್ರಿಕ್ ನಂತರ ಬಾಲಕರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ ಕೊರತೆ, ಊಟ-ಉಪಚಾರದ ಅವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಹಾಸ್ಟೆಲ್‌ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ಯಾದಗಿರಿ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸರ್ ಎಂ. ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಪ್ರದೀಪ್ ಅಣಬಿ, ಬಡ ವಿದ್ಯಾರ್ಥಿಗಳ ಪಾಲಿಗೆ ಹೊರವಾಗಬೇಕಾದ ಹಾಸ್ಟೆಲ್ ಗಳು ಶಾಪವಾಗಿ ಪರಿಣಮಿಸಿದೆ. ನಿತ್ಯ ನೂರಾರು ಮಕ್ಕಳಿಗೆ ನರಕ ದರ್ಶನವಾಗುತ್ತಿದೆ. ಇದಕ್ಕೆ ತಾಜಾ ಉದಾಹರಣೆ ಎನ್ನುವಂತೆ ಸಮಾಜ ಕಲ್ಯಾಣ ಇಲಾಖೆಯಡಿಯಲ್ಲಿರುವ ನಗರದ ಮೆಟ್ರಿಕ್ ನಂತರ ಬಾಲಕರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಸತಿ ನಿಲಯದಲ್ಲಿ ಸ್ವಚ್ಛತೆ ಇಲ್ಲದೇ ವಿದ್ಯಾರ್ಥಿಗಳು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಕೋಣೆಯ ಕೆಲ ಕಿಟಕಿಗಳ ಗಾಜು ಪುಡಿ ಪುಡಿಯಾಗಿ ಮುರಿದು ಹೋಗಿದ್ದು, ಅದನ್ನು ಸರಿಪಡಿಸುವಂತೆ ಮನವಿ ಮಾಡಿಕೊಳ್ಳಲಾಗಿತ್ತು. ಸುಮಾರು ತಿಂಗಳು ಗತಿಸಿದರೂ ಇಲ್ಲಿನ ಸಂಬಂಧಪಟ್ಟ ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳಾದ ರಾವುತಪ್ಪ ಅವರು ನಮ್ಮ ಮನವಿಗೆ ಸ್ಪಂದಿಸಿಲ್ಲ ಎಂದು ದೂರಿದರು.

ವಿದ್ಯಾರ್ಥಿಗಳ ವಸತಿ ನಿಲಯದಲ್ಲಿ ಅವ್ಯವಸ್ಥೆ ಆಗರವಾಗಿದ್ದಲ್ಲದೆ, ಊಟ ಉಪಹಾರದಲ್ಲೂ ಗುಣಮಟ್ಟದ ಕೊರತೆ ಇದೆ. ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ರೀತಿಯಲ್ಲಿ ಪ್ರಯೋಜನವಾಗುತ್ತಿಲ್ಲ. ಹಾಸ್ಟೆಲ್ ಅವ್ಯವಸ್ಥೆಗೆ ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಕಾರಣ. ಇವರ ಮೇಲೆ ಈಗಾಗಲೇ ಸಾಕಷ್ಟು ಭ್ರಷ್ಟಾಚಾರ ಆರೋಪ ಕೇಳಿ ಬಂದಿದ್ದು, ಇವರನ್ನು ಕೂಡಲೇ ಬೇರೆಡೆ ವರ್ಗಾವಣೆ ಮಾಡಬೇಕು ಇಲ್ಲವೇ, ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳು, ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವುದಾಗಿ ನೀಡಿ, ಈ ಕುರಿತು ತನಿಖೆ ಮಾಡಿ ಅಧಿಕಾರಿಗಳ ಮೇಲೆ ಶಿಸ್ತು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರತಿಭಟನಾಕಾರರಿಗೆ ತಿಳಿಸಿದರು.

ಮಹೇಂದ್ರ ಪ್ರಸಾದ, ರಾಮು, ಆಕಾಶ, ಭೀಮರಾಯ, ರೋಹಿತ, ಸುನೀಲ್, ಆನಂದ, ಪರಶುರಾಮ, ಹುಲಗಪ್ಪ, ಮಂಜುನಾಥ, ದೇವರಾಜ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.