ಸಾರಾಂಶ
ಶಿರಾ: ಕಂದಾಯ ಇಲಾಖೆಯಿಂದ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸದೆ ಮೊಬೈಲ್ ಆಪ್ ಗಳ ಮೂಲಕ ನಿರಂತರವಾಗಿ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು ಇದನ್ನು ತಕ್ಷಣ ನಿಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಶಿರಾ ತಾಲೂಕು ಘಟಕದ ಅಧ್ಯಕ್ಷರಾದ ಕಾಂತರಾಜು ಆಗ್ರಹಿಸಿದರು.
ಶಿರಾ: ಕಂದಾಯ ಇಲಾಖೆಯಿಂದ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸದೆ ಮೊಬೈಲ್ ಆಪ್ ಗಳ ಮೂಲಕ ನಿರಂತರವಾಗಿ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು ಇದನ್ನು ತಕ್ಷಣ ನಿಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಶಿರಾ ತಾಲೂಕು ಘಟಕದ ಅಧ್ಯಕ್ಷರಾದ ಕಾಂತರಾಜು ಆಗ್ರಹಿಸಿದರು. ಅವರು ಗುರುವಾರ ನಗರದ ಮಿನಿವಿದಾನಸೌಧ ಮುಂಭಾಗ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಶಿರಾ ತಾಲೂಕು ಘಟಕ ಹಾಗೂ ಕಂದಾಯ ಇಲಾಖೆಯ ನೌಕರರ ಸಂಘದ ವತಿಯಿಂದ ಕಪ್ಪುಪಟ್ಟಿ ಧರಿಸಿ ಕಂದಾಯ ನೌಕರರು ಹಮ್ಮಿಕೊಂಡಿದ್ದ ಶಾಂತಿಯುತ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.
ಕಂದಾಯ ಇಲಾಖೆಯಿಂದ ಅಭಿವೃದ್ಧಿ ಪಡಿಸಿರುವ ಸುಮಾರು 17ಕ್ಕೂ ಅಧಿಕ ಮೊಬೈಲ್, ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು, ಇದರಿಂದ ಮಾನಸಿಕ ಹಾಗೂ ದೈಹಿಕವಾಗಿ ಒತ್ತಡ ಹೆಚ್ಚಾಗುತ್ತಿದೆ. ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಚೇರಿ ಇಲ್ಲ. ಮೊಬೈಲ್ ತಂತ್ರಾಂಶಗಳ ಕೆಲಸದ ವಿಚಾರವಾಗಿ ಇದುವರೆಗೂ ಆಗಿರುವ ಎಲ್ಲಾ ಅಮಾನತ್ತುಗಳನ್ನು ತಕ್ಷಣವೇ ರದ್ದುಪಡಿಸಿ ಹಿಂಪಡೆಯಬೇಕು. ಅಂತರ್ ಜಿಲ್ಲಾ ವರ್ಗಾವಣೆಯ ಕೆ.ಸಿ.ಎಸ್.ಆರ್. ನಿಯಮ 16ಎ ರ ಉಪಖಂಡ (2)ನ್ನು ಮರು ಸ್ಥಾಪಿಸಬೇಕು. ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳು ಪದೋನ್ನತಿಯಾಗದೆ ಸುಮಾರು 30 ವರ್ಷಗಳಿಂದ ಪದೋನ್ನತಿಯಿಂದ ವಂಚಿತರಾಗಿದ್ದಾರೆ. ಅವರನ್ನು ಮೇಲ್ದರ್ಜೆಗೇರಿಸಿ ರಾಜಸ್ವ ನಿರೀಕ್ಷಕರು, ಪ್ರಥಮ ದರ್ಜೆ ಸಹಾಯಕರು, ಗ್ರೇಡ್-1 ಗ್ರಾಮ ಆಡಳಿತ ಅಧಿಕಾರಿ ಹುದ್ದೆಯನ್ನಾಗಿ ಪರಿಸ್ಕರಿ ಪದೋನ್ನತಿ ಮಾಡಬೇಕು. ಕೆಲಸದ ಅವಧಿಯ ಮುನ್ನ ಹಾಗೂ ಕೆಲಸದ ಮುಕ್ತಾಯದ ನಂತರ ನಡೆಸಲಾಗುವ ಎಲ್ಲಾ ಬಗೆಯ ವರ್ಚುವಲ್ ಸಭೆಗಳನ್ನು ಕಡ್ಡಾಯವಾಗಿ ನಿಷೇಧಿಸಬೇಕು. ಆಹಾರ ಇಲಾಖೆಯ ಕೆಲಸಗಳನ್ನು ಕಂದಾಯ ಇಲಾಖೆಗೆ ನಿರ್ವಹಿಸಲು ಆದೇಶಿಸುತ್ತಿರುವುದರಿಂದ ಆಹಾರ ಇಲಾಖೆಯ ನಿರೀಕ್ಷಕರ ಹುದ್ದೆಗೆ ಪದೋನ್ನತಿ ನೀಡಬೇಕು. ಕಂದಾಯ ನೌಕರರ ಮೇಲೆ ಹಲ್ಲೆ ನಡೆಯುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಶಿರಾ ತಾಲೂಕು ಘಟಕದ ಕಾರ್ಯದರ್ಶಿ ಹೊರಕೆರಪ್ಪ, ಉಪಾಧ್ಯಕ್ಷ ನಟರಾಜು, ರಮ್ಯ, ಖಜಾಂಚಿ ಗುರುಪ್ರಸಾದ್ ಸೇರಿದಂತೆ ಹಲವರು ಭಾಗವಹಿಸಿದ್ದರು.