ಯಲಬುರ್ಗಾ:ತಾಲೂಕನ್ನು ಬರಪೀಡಿತ ಪ್ರದೇಶವನ್ನಾಗಿ ಘೋಷಿಸಿ, ಮಳೆ ಕೊರತೆಯಿಂದ ಹಾಳಾದ ಬೆಳೆಗೆ ಸೂಕ್ತ ಪರಿಹಾರ ನೀಡುವುದು ಹಾಗೂ ಆಲಮಟ್ಟಿ ಜಲಾಶಯದಿಂದ ತಾಲೂಕಿನ ಕೆರೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಬಿಜೆಪಿ ಮಂಡಲದಿಂದ ಶುಕ್ರವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಬಿಜೆಪಿ ಕಚೇರಿಯಿಂದ ಪ್ರಮುಖ ರಸ್ತೆಗಳ ಮೂಲಕ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಬಳಿಕ ಚನ್ನಮ್ಮ ವೃತ್ತದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ಗ್ರೇಡ್-೨ ತಹಸೀಲ್ದಾರ್ ಮಹಾಂತಗೌಡ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಮಾಜಿ ಸಚಿವ ಹಾಲಪ್ಪ ಆಚಾರ್ ಮಾತನಾಡಿ, ರಾಜ್ಯದಲ್ಲಿ ಮಳೆ ಅಭಾವದಿಂದ ಮುಂಗಾರು ಹಂಗಾಮಿನಲ್ಲಿ ಬಿತ್ತನೆಗೊಂಡ ನಾನಾ ಬೆಳೆ ಸಂಪೂರ್ಣ ಹಾಳಾಗಿವೆ. ಇದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ರೈತರ ನೆರವಿಗೆ ಧಾವಿಸಬೇಕು. ಪ್ರತಿ ಎಕರೆಗೆ ₹೫೦ ಸಾವಿರ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

ಕ್ಷೇತ್ರದಲ್ಲಿ ಬೆಳೆ ಹಾನಿ ಬಗ್ಗೆ ಅಧಿಕಾರಿಗಳು ಗಮನಹರಿಸುತ್ತಿಲ್ಲ. ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆಯೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಸಿಎಂ ಡಿ.ಕೆ.ಶಿವಕುಮಾರ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುವಲ್ಲಿ ವಿಫಲವಾಗಿದೆ ಎಂದರು.

ಸದ್ಯ ಬರ ಪರಿಸ್ಥಿತಿ ಎದುರಾಗಿದ್ದು, ಬರಪೀಡಿತ ತಾಲೂಕು ಎಂದು ಘೋಷಿಸಬೇಕು. ಎಲ್ಲ ಕೆರೆಗಳಿಗೆ ಕೃಷ್ಣಾ ನದಿಯಿಂದ ನೀರು ಹರಿಸಬೇಕು. ರೈತರ ಜಾನುವಾರುಗಳಿಗೆ ಅಗತ್ಯ ಮೇವು ಒದಗಿಸಲು ಮೇವು ಬ್ಯಾಂಕ್ ಸ್ಥಾಪಿಸಬೇಕು. ಕ್ಷೇತ್ರದ ರೈತರ ಸಂಕಷ್ಟ ಆಲಿಸದ ಸ್ಥಳೀಯ ಶಾಸಕ ಬಸವರಾಜ ರಾಯರಡ್ಡಿ ವಿಫಲರಾಗಿದ್ದಾರೆ ಎಂದರು.


ರಾಜ್ಯದ ಹಲವು ಜಲಾಶಯಗಳಲ್ಲಿ ನೀರಿನ ಕೊರತೆ ಎದುರಾಗಿರುವುದರಿಂದ ಜನ ಸಮಸ್ಯೆ ಎದುರಿಸುತ್ತಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರ ನೆರವಿಗೆ ಸರ್ಕಾರ ಧಾವಿಸಲಿ: ನವೀನಕುಮಾರ

ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಬಿಜೆಪಿಯಿಂದ ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗುವುದು. ಜಿಲ್ಲೆಯ ಎಲ್ಲ ತಾಲೂಕುಗಳ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನವೀನಕುಮಾರ ಗುಳಗಣ್ಣನವರ ಆಗ್ರಹಿಸಿದರು.

ಜಿಲ್ಲೆಯಲ್ಲಿ ಕಡಿಮೆ ಪ್ರಮಾಣದ ಮಳೆಯಾಗಿರುವುದರಿಂದ ಬಿತ್ತನೆ ಮಾಡಿದ್ದ ಬೆಳೆಗಳು ಸಂಪೂರ್ಣ ನಾಶವಾಗಿದ್ದು, ರೈತ ಸಮೂಹ ತೀವ್ರ ಸಂಕಷ್ಟ ಅನುಭವಿಸುತ್ತಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ರೈತರ ನೆರವಿಗೆ ಬಾರದೆ ಅನ್ಯಾಯ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಜನರು ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಬಿಜೆಪಿ ಮಂಡಲ ಅಧ್ಯಕ್ಷ ಮಾರುತಿ ಗಾವರಾಳ, ಬಸಲಿಂಗಪ್ಪ ಭೂತೆ, ರತನ್ ದೇಸಾಯಿ, ಸಿ.ಎಚ್. ಪಾಟೀಲ್, ಶಿವಶಂಕರ ದೇಸಾಯಿ, ಮಲ್ಲನಗೌಡ ಕೋನನಗೌಡ್ರ ಮಾತನಾಡಿದರು.

ಈ ಸಂದರ್ಭ ಆರ್‌ಕೆಡಿಸಿಸಿ ಮುಖಂಡ ಗೌರಾ ಬಸವರಾಜ ರಾಜೂರು, ಶರಣಪ್ಪ ಈಳಗೇರ, ಬಸವರಾಜ ಗುಳಗುಳಿ, ವಿಶ್ವನಾಥ ಮರಿಬಸಪ್ಪನವರ್, ರಾಚಪ್ಪ ಹುರಳಿ, ಕಲ್ಲೇಶಪ್ಪ ಕರಮುಡಿ, ಹನುಮಂತ ರಾಠೋಡ್, ಸಂತೋಷಿಮಾ ಜೋಶಿ, ಲಕ್ಷ್ಮಣ ಕಾಳೆ ಸೇರಿದಂತೆ ಮತ್ತಿತರರು ಇದ್ದರು.