ಬೆಳೆಗಳ ರಕ್ಷಣೆಗಾಗಿ ಹೇಮಾವತಿ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಲು ಆಗ್ರಹ

| Published : Mar 01 2025, 01:00 AM IST

ಬೆಳೆಗಳ ರಕ್ಷಣೆಗಾಗಿ ಹೇಮಾವತಿ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಲು ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಬೆಳೆಗಳ ಸಂರಕ್ಷಣೆಗಾಗಿ ಹೇಮಾವತಿ ಜಲಾಶಯದಿಂದ ನಾಲೆಗಳ ಮೂಲಕ ನೀರು ಹರಿಸುವಂತೆ ಒತ್ತಾಯಿಸಿ, ರೈತಸಂಘದ ಕಾರ್ಯಕರ್ತರು ಪಟ್ಟಣದ ತಾಲೂಕು ಆಡಳಿತ ಸೌಧದ ಎದುರು ತಲೆ ಮೇಲೆ ಕಲ್ಲು ಚಪ್ಪಡಿ ಹೊತ್ತು ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಬೆಳೆಗಳ ಸಂರಕ್ಷಣೆಗಾಗಿ ಹೇಮಾವತಿ ಜಲಾಶಯದಿಂದ ನಾಲೆಗಳ ಮೂಲಕ ನೀರು ಹರಿಸುವಂತೆ ಒತ್ತಾಯಿಸಿ, ರೈತಸಂಘದ ಕಾರ್ಯಕರ್ತರು ಪಟ್ಟಣದ ತಾಲೂಕು ಆಡಳಿತ ಸೌಧದ ಎದುರು ತಲೆ ಮೇಲೆ ಕಲ್ಲು ಚಪ್ಪಡಿ ಹೊತ್ತು ಪ್ರತಿಭಟನೆ ನಡೆಸಿದರು.

ಪಟ್ಟಣದ ತಾಲೂಕು ಕಚೇರಿ ಎದುರು ಜಿಲ್ಲಾ ರೈತಸಂಘದ ಮಾಜಿ ಅಧ್ಯಕ್ಷ ಎಂ.ವಿ.ರಾಜೇಗೌಡ ಮತ್ತು ತಾಲೂಕು ಅಧ್ಯಕ್ಷ ಕಾರಿಗನಹಳ್ಳಿ ಪುಟ್ಟೇಗೌಡ ನೇತೃತ್ವದಲ್ಲಿ ಆಗಮಿಸಿದ ರೈತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ನೀರು ಹರಿಸಲು ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ. ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ಕೆ.ಆರ್.ಎಸ್ ಜಲಾಶಯದ ವ್ಯಾಪ್ತಿ ರೈತರಿಗೆ ಮಾತ್ರ ನೀರು ಹರಿಸಲಾಗುತ್ತಿದೆ. ಹೇಮಾವತಿ ಜಲಾಶಯದಿಂದ ತುಮಕೂರು ಜಿಲ್ಲೆಗೆ ನೀರು ಬಿಟ್ಟು ತಾಲೂಕಿನ ರೈತರಿಗೆ ಇದುವರೆಗೂ ನೀರು ಬಿಡದೆ ರೈತರ ತಲೆ ಮೇಲೆ ಕಲ್ಲು ಚಪ್ಪಡಿ ಎಳೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಮಾವತಿ ನೀರಿನ ವಿಚಾರದಲ್ಲಿ ಜಿಲ್ಲೆಯ ರೈತರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮಾತಾಡದೇ ಮೌನವಾಗಿದ್ದಾರೆ. ಹೇಮಾವತಿ ಬಯಲಿನ ರೈತರ ಹಿತ ಕಾಯುವಲ್ಲಿ ವಿಫಲರಾದ ಸಚಿವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಅಥವಾ ನೀರು ಹರಿಸಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ರೈತಸಂಘದ ಮಾಜಿ ಅಧ್ಯಕ್ಷ ಎಂ.ವಿ.ರಾಜೇಗೌಡ ಮಾತನಾಡಿ, ರಾಜ್ಯ ಸರ್ಕಾರ ಕಾವೇರಿಗೊಂದು ಹೇಮಾವತಿಗೊಂದು ಜಲನೀತಿ ಅನುಸರಿಸುತ್ತಿದೆ. ಹೇಮಾವತಿ ನದಿ ಒಡ್ಡು ಅಣೆಕಟ್ಟೆ ನಾಲೆಗಳಾದ ತಾಲೂಕಿನ ಮಂದಗೆರೆ ಮತ್ತು ಹೇಮಗಿರಿ ನಾಲೆಗಳಿಗೆ ನೀರಾವರಿ ಇಲಾಖೆ ಅಧಿಕಾರಿಗಳು ನೀರು ಹರಿಸದೆ ರೈತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ನೀರಿಗಾಗಿ ಪ್ರತಿವರ್ಷ ಧರಣಿ ನಡೆಸುವ ಪರಿಸ್ಥಿತಿ ಎದುರಾಗಿದೆ ಎಂದು ಖಂಡಿಸಿದರು.

ಜನವರಿ ತಿಂಗಳಲ್ಲಿ ನೀರಿಗಾಗಿ ರೈತಸಂಘ ಹೋರಾಟದ ಎಚ್ಚರಿಕೆ ನೀಡಿದ್ದರೂ ರೈತರೊಂದಿಗೆ ಸಮಸ್ಯೆಗಳ ಬಗ್ಗೆ ಚರ್ಚಿಸದ ತಹಸೀಲ್ದಾರ್ ಡಾ.ಎಸ್.ಯು.ಅಶೋಕ್ ಅವರ ಕಾರ್ಯವೈಖರಿ ಬಗ್ಗೆ ತರಾಟೆಗೆ ತೆಗೆದುಕೊಂಡರು.

ತಾಲೂಕಿನ ಪುರ ಗ್ರಾಮದ ವ್ಯಾಪ್ತಿಯ ಖಾಸಗಿ ವ್ಯಕ್ತಿ ರೈತರ ಕೆರೆ ಸೇರಿದಂತೆ ಸುಮಾರು 60 ಎಕರೆ ಸರ್ಕಾರಿ ಗೋಮಾಳವನ್ನು ಒತ್ತುವರಿ ಮಾಡಿಕೊಂಡಿದ್ದರೂ ತಾಲೂಕು ಆಡಳಿತ ಇದುವರೆಗೂ ಒತ್ತುವರಿ ತೆರವಿಗೆ ಮುಂದಾಗಿಲ್ಲ. ರೈತರ ಹಿತ ಅಧಿಕಾರಿಗಳಿಗೆ ಬೇಕಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೇಮಾವತಿ ಜಲಾಶಯದಿಂದ ನೀರು ಹರಿಸುವ ಸಂಬಂಧ ಮಾರ್ಚ್ 5 ರಂದು ಹೇಮಾವತಿ ಜಲಾಶಯದ ಮುಖ್ಯ ಇಂಜಿನಿಯರ್ ನೇತೃತ್ವದಲ್ಲಿ ರೈತರ ಸಭೆ ನಡೆಸುವ ಭರವಸೆ ನೀಡಿದ್ದಾರೆ. ಕೆರೆ ಒತ್ತುವರಿ ತೆರವು ಮತ್ತು ಪಾಲಿಟೆಕ್ನಿಕ್ ರಸ್ತೆ ತೆರವು ಸಂಬಂಧ ಶೀಘ್ರ ಕ್ರಮ ವಹಿಸುವುವಾಗಿ ತಹಸೀಲ್ದಾರ್ ಅಶೋಕ್ ಭರವಸೆ ನೀಡಿದರು.

ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ವಿಶ್ವನಾಥ್, ಈಗಾಗಲೇ ಮಂದಗೆರೆ ನದಿ ಅಣೆಕಟ್ಟೆ ನಾಲೆಗೆ ನೀರು ಹರಿಸಲಾಗಿದೆ. ಹೇಮಗಿರಿ ನಾಲೆ, ಮುಖ್ಯ ನಾಲೆಗೆ ನೀರು ಹರಿಸಿ ಕೆರೆ ಕಟ್ಟೆಗಳನ್ನು ತುಂಬಿಸುವುದರ ಬಗ್ಗೆ ಮೇಲಾಧಿಕಾರಿಗಳೊಂದಿಗೆ ಮಾತನಾಡುವುದಾಗಿ ತಿಳಿಸಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಕೆ.ಆರ್.ಜಯರಾಂ, ಎಲ್.ಬಿ.ಜಗದೀಶ್, ಕರೋಟಿ ತಮ್ಮಯ್ಯ, ಮುದ್ದುಕುಮಾರ್, ನಾಗೇಗೌಡ, ಚೌಡೇನಹಳ್ಳಿ ಕೃಷ್ಣೇಗೌಡ, ಕರೋಟಿ ಕೃಷ್ಣೇಗೌಡ, ಬೂಕನಕೆರೆ ನಾಗರಾಜು, ಮಡುವಿನಕೋಡಿ ಪ್ರಕಾಶ್, ಲಕ್ಷ್ಮೀಪುರ ನಾಗರಾಜು ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.