ಪ್ರಜಾಪ್ರಭುತ್ವವನ್ನು ಉಳಿಸಿ, ಮತದಾನದ ಹಕ್ಕನ್ನು ರಕ್ಷಿಸಬೇಕೆಂದು ಆಗ್ರಹಿಸಿ ಸಮಾನ ಮನಸ್ಕರ ವೇದಿಕೆ ಸಿದ್ದಾಪುರದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಸಿದ್ದಾಪುರ : ಪ್ರಜಾಪ್ರಭುತ್ವವನ್ನು ಉಳಿಸಿ, ಮತದಾನದ ಹಕ್ಕನ್ನು ರಕ್ಷಿಸಬೇಕೆಂದು ಆಗ್ರಹಿಸಿ ಸಮಾನ ಮನಸ್ಕರ ವೇದಿಕೆ ಸಿದ್ದಾಪುರದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.ಈ ಸಂದರ್ಭ ಮಾತನಾಡಿದ ವೆಂಕಟೇಶ್ ಎಂ.ಎಸ್., ಎಸ್‌ಐಆರ್‌ ಪ್ರಕ್ರಿಯೆಯು ಅವೈಜ್ಞಾನಿಕವಾಗಿದ್ದು, ಇದರ ವಿರುದ್ಧ ಸಾಕಷ್ಟು ಹೋರಾಟಗಳು ನಡೆಯುತ್ತಿವೆ. ಎಸ್‌ಐಆರ್‌ನಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸುವ ಮೂಲಕ ಬಡವರು ಹಾಗೂ ಕೂಲಿ ಕಾರ್ಮಿಕರ ಮತದಾನದ ಹಕ್ಕನ್ನು ಕಸಿದುಕೊಂಡು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲಾಗುತ್ತಿದೆ ಎಂದು ಆರೋಪಿಸಿದರು. ಮುಖ್ಯ ಚುನಾವಣಾ ಆಯುಕ್ತರು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.ಕಾರ್ಮಿಕ ಮುಖಂಡ ಕುಟ್ಟಪ್ಪ ಮಾತನಾಡಿ, ಹಿಂದೂ ರಾಷ್ಟ್ರ ನಿರ್ಮಾಣದ ಸಿದ್ಧತೆಯ ಭಾಗವಾಗಿ ಎಸ್‌ಐಆರ್‌ ಪ್ರಕ್ರಿಯೆಯ ಮೂಲಕ ಮುಸ್ಲಿಮರ ಮತಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ತೆಗೆದುಹಾಕಲಾಗುತ್ತಿದೆ ಎಂದು ಆರೋಪಿಸಿದರು. ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಸಮಾನ ಮನಸ್ಕರು ಒಗ್ಗಟ್ಟಿನಿಂದ ಹೋರಾಟ ನಡೆಸಬೇಕು ಎಂದು ಕರೆ ನೀಡಿದ ಅವರು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

ಸಮಾನ ಮನಸ್ಕರ ವೇದಿಕೆಯ ಪ್ರಮುಖರಾದ ಎಸ್.ಬಿ. ಪ್ರತೀಶ್, ಎಂ. ಬಿಜೋಯ್, ಮುಸ್ತಫ, ಬಶೀರ್ ವಿ.ಕೆ., ಅಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.