ಹೆಸರು ಖರೀದಿ ಕೇಂದ್ರ ಪ್ರಾರಂಭಿಸಲು ನರಗುಂದ ರೈತರ ಒತ್ತಾಯ

| Published : Sep 02 2025, 01:00 AM IST

ಹೆಸರು ಖರೀದಿ ಕೇಂದ್ರ ಪ್ರಾರಂಭಿಸಲು ನರಗುಂದ ರೈತರ ಒತ್ತಾಯ
Share this Article
  • FB
  • TW
  • Linkdin
  • Email

ಸಾರಾಂಶ

ವಿಪರೀತ ಮಳೆಯಿಂದ ಹೆಸರು ಬೆಳೆ ಅಪಾರ ಪ್ರಮಾಣದಲ್ಲಿ ಹಾಳಾಗಿದ್ದು, ಸರ್ಕಾರ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಬೇಕು ಎಂದು ತಹಸೀಲ್ದಾರ್‌ಗೆ ರೈತರು ಮನವಿ ಮಾಡಿದ್ದಾರೆ.

ನರಗುಂದ: ವಿಪರೀತ ಮಳೆಯಿಂದ ಹೆಸರು ಬೆಳೆ ಅಪಾರ ಪ್ರಮಾಣದಲ್ಲಿ ಹಾಳಾಗಿದ್ದು, ಸರ್ಕಾರ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಬೇಕು ಎಂದು ತಹಸೀಲ್ದಾರ್‌ಗೆ ರೈತರು ಮನವಿ ಮಾಡಿದ್ದಾರೆ.

ಪಟ್ಟಣದ ಕೃಷಿ ಇಲಾಖೆ ಕಚೇರಿಯಲ್ಲಿ ಕರ್ನಾಟಕ ರೈತ ಸೇನೆ, ರೈತ ಸಂಘ ಹಾಗೂ ಹಸಿರು ಸೇನೆ, ತಾಲೂಕು ರೈಲ್ವೆ ಹೋರಾಟ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ತಹಸೀಲ್ದಾರ್‌ ಮುಖಾಂತರ ಸರ್ಕಾರಕ್ಕೆ ಸೋಮವಾರ ಮನವಿ ನೀಡಿ ಆನಂತರ ರೈತ ಮುಖಂಡರು ಮಾತನಾಡಿದರು. ಜುಲೈ, ಆಗಸ್ಟ್‌ ತಿಂಗಳಲ್ಲಿ ಸುರಿದ ಮಳೆಯಿಂದ ಹೊಲದಲ್ಲಿ ತೇವಾಂಶ ಹೆಚ್ಚಾಗಿದೆ. ಹೆಸರು ಬೆಳೆ ಕಟಾವಿಗೆ ಬಂದ ಸಂದರ್ಭದಲ್ಲಿ ಅತಿಯಾದ ಮಳೆಯಾಗಿ ಹಾನಿಯಾಗಿದೆ. ಅಳಿದುಳಿದ ಬೆಳೆಯನ್ನು ರೈತರು ಕಟಾವು ಮಾಡಿ ಮಾರುಕಟ್ಟೆಗೆ ತಂದರೆ ವ್ಯಾಪಾರಸ್ಥರು ಖರೀದಿಸುತ್ತಿಲ್ಲ. ಹೀಗಾಗಿ ಸರ್ಕಾರ ಕೂಡಲೇ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಆಗ್ರಹಿಸಿದರು.

ಈಗಾಗಲೇ ಕೃಷಿ, ಕಂದಾಯ, ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಬೆಳೆ ಹಾನಿ ಸಮೀಕ್ಷೆ ಮಾಡಿ ಸರ್ಕಾರಕ್ಕೆ ವರದಿ ಕಳುಹಿಸಿಕೊಡಲಾಗಿದೆ. ರೈತರಿಗೆ ಪ್ರತಿ 1 ಎಕರೆಗೆ ₹30 ಸಾವಿರ ಪರಿಹಾರ ಬಿಡುಗಡೆ ಮಾಡಬೇಕು. ಬೆಳೆವಿಮೆ ಕಂಪನಿಯವರು ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.

ಉಪ-ತಹಸೀಲ್ದಾರ್‌ ಪರಶುರಾಮ ಕಲಾಲ ರೈತರ ಮನವಿ ಸ್ವೀಕರಿಸಿದರು. ರೈತ ಮುಖಂಡರಾದ ವೀರಣ್ಣ ಸೊಪ್ಪಿನ, ಬಸವರಾಜ ಸಾಬಳೆ, ವಿಠ್ಠಲ ಜಾಧವ, ರವಿ ಓಡೇಯರ, ಎಂ.ಎಂ. ಮುಲ್ಲಾ, ಮನೋಹರ ಹುಯಿಲಗೋಳ, ಮೇಟಿ, ಕೃಷಿ ಅಧಿಕಾರಿ ಎಂ.ಎಸ್. ಕುಲಕರ್ಣಿ ಇದ್ದರು.