ಪಟ್ಟಣದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಪಟ್ಟಣ ವ್ಯಾಪ್ತಿಯಿಂದ ಸುಮಾರು 3 ಕಿಮೀ ದೂರದಲ್ಲಿದ್ದು, ಈ ಮಾರ್ಗದಲ್ಲಿ ಬಸ್‌ ಸಂಚಾರ ಪ್ರಾರಂಭಿಸಬೇಕೆಂದು ಪಟ್ಟಣದ ಕೆಎಸ್ಆರ್‌ಟಿಸಿ ವ್ಯವಸ್ಥಾಪಕರಿಗೆ ಕನ್ನಡಪರ ಸಂಘಟನೆ ಮುಖಂಡ ಎಸ್.ಎಂ. ಮರಿಗೌಡ್ರ ಮನವಿ ಸಲ್ಲಿಸಿದರು.

ಕೆಎಸ್ಆರ್‌ಟಿಸಿ ವ್ಯವಸ್ಥಾಪಕರಿಗೆ ಕನ್ನಡಪರ ಸಂಘಟನೆ ಮುಖಂಡ ಎಸ್.ಎಂ. ಮರಿಗೌಡ್ರ ಮನವಿ

ಕನ್ನಡಪ್ರಭ ವಾರ್ತೆ ನರಗುಂದ

ಪಟ್ಟಣದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಪಟ್ಟಣ ವ್ಯಾಪ್ತಿಯಿಂದ ಸುಮಾರು 3 ಕಿಮೀ ದೂರದಲ್ಲಿದ್ದು, ಈ ಮಾರ್ಗದಲ್ಲಿ ಬಸ್‌ ಸಂಚಾರ ಪ್ರಾರಂಭಿಸಬೇಕೆಂದು ಪಟ್ಟಣದ ಕೆಎಸ್ಆರ್‌ಟಿಸಿ ವ್ಯವಸ್ಥಾಪಕರಿಗೆ ಕನ್ನಡಪರ ಸಂಘಟನೆ ಮುಖಂಡ ಎಸ್.ಎಂ. ಮರಿಗೌಡ್ರ ಮನವಿ ಸಲ್ಲಿಸಿದರು.

ನಂತರ ಮಾತನಾಡಿದ ಮರಿಗೌಡ್ರ, ಎಂಜಿನಿಯರಿಂಗ್ ಕಾಲೇಜಿನ ವಿವಿಧ ವಿಭಾಗಗಳಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅಲ್ಲದೆ, ಕಾಲೇಜಿನಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ಈ ಕಾಲೇಜಿಗೆ ಪಟ್ಟಣದಿಂದ ಯಾವುದೇ ನಿಯಮಿತ ಬಸ್ ಸಾರಿಗೆ ಸೌಲಭ್ಯ ಲಭ್ಯವಿರುವುದಿಲ್ಲ. ಕಾಲೇಜು ನಗರದಿಂದ ಸುಮಾರು 3 ಕಿಮೀ ದೂರದಲ್ಲಿರುವುದರಿಂದ ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಕಾಲೇಜಿಗೆ ಆಗಮಿಸುವ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸ್ವಂತ ವಾಹನಗಳು ಅಥವಾ ಸೀಮಿತ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಅವಲಂಬಿಸಬೇಕಾದ ಪರಿಸ್ಥಿತಿ ಇದೆ ಎಂದರು.

ವಿಶೇಷವಾಗಿ ವಸತಿ ನಿಲಯದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಗೂ ಮಹಿಳಾ ಸಿಬ್ಬಂದಿ ಸುರಕ್ಷತೆಯ ದೃಷ್ಟಿಯಿಂದಲೂ ಕಾಲೇಜಿಗೆ ನಿಯಮಿತ ಸಾರ್ವಜನಿಕ ಸಾರಿಗೆ ಸಂಪರ್ಕ ಕಲ್ಪಿಸುವುದು ಅತ್ಯಂತ ಅವಶ್ಯಕವಾಗಿದೆ. ಸಂಜೆ ವೇಳೆಯಲ್ಲಿ ಸಮರ್ಪಕ ಸಾರ್ವಜನಿಕ ಸಾರಿಗೆ ಸೌಲಭ್ಯವಿಲ್ಲದಿರುವುದು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸಂಚಾರಕ್ಕೆ ಅನಾನುಕೂಲವಾಗುವುದರ ಜೊತೆಗೆ, ಸುರಕ್ಷತೆಯ ದೃಷ್ಟಿಯಿಂದಲೂ ಸಮಸ್ಯೆ ಉಂಟುಮಾಡುವ ಸಾಧ್ಯತೆ ಇದೆ. ಆದ್ದರಿಂದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳ ದೈನಂದಿನ ಸಂಚಾರದ ಅಗತ್ಯವನ್ನು ಪರಿಗಣಿಸಿ, ಬಸ್ ನಿಲ್ದಾಣದಿಂದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿಗೆ ಬಸ್ ಸೇವೆ ಪ್ರಾರಂಭಿಸುವಂತೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.