ಸಾರಾಂಶ
ಮಂಗಳೂರಿನಲ್ಲಿ ಹಿಂದೂ ಧರ್ಮ ಅವಹೇಳನ ಮಾಡಿದ ಶಿಕ್ಷಕಿ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶಾಸಕರ ಮೇಲೆ ಕೂಡಲೇ ಎಫ್‌ಐಆರ್ ದಾಖಲಿಸಿರುವ ಸರ್ಕಾರ ಹಿಂದೂ ವಿರೋಧಿಯಾಗಿ ವರ್ತಿಸುತ್ತಿದೆ ಎಂದು ಆರೋಪಿಸಿದರು.
ಕನ್ನಡಪ್ರಭ ವಾರ್ತೆ ಮಂಗಳೂರು
ಬೆಂಗಳೂರಿನ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಬುಧವಾರ ಮಂಗಳೂರಿನ ಮಿನಿ ವಿಧಾನಸೌಧ ಬಳಿ ಪ್ರತಿಭಟನೆ ನಡೆಯಿತು.ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ವಕೀಲ ಸಂದೀಪ್ ವಳಲಂಬೆ, ರಾಜ್ಯ ಸರ್ಕಾರ ಒಂದು ವರ್ಗವನ್ನು ಓಲೈಸುತ್ತಿದೆ. ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ, ಬಾಂಬ್ ಸ್ಫೋಟ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದೆ. ಮಂಗಳೂರಿನಲ್ಲಿ ಹಿಂದೂ ಧರ್ಮ ಅವಹೇಳನ ಮಾಡಿದ ಶಿಕ್ಷಕಿ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶಾಸಕರ ಮೇಲೆ ಕೂಡಲೇ ಎಫ್‌ಐಆರ್ ದಾಖಲಿಸಿರುವ ಸರ್ಕಾರ ಹಿಂದೂ ವಿರೋಧಿಯಾಗಿ ವರ್ತಿಸುತ್ತಿದೆ ಎಂದು ಆರೋಪಿಸಿದರು.
ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಪ್ರತಾಪಸಿಂಹ ನಾಯಕ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮೇಯರ್ ಸುಧೀರ್ ಶೆಟ್ಟಿ, ಮುಖಂಡರಾದ ಜಗದೀಶ್ ಶೇಣವ, ಮೋನಪ್ಪ ಭಂಡಾರಿ, ನಿತಿನ್ ಕುಮಾರ್ ಮತ್ತಿತರರಿದ್ದರು. ರಾಜ್ಯದಲ್ಲಿ ಭಯೋತ್ಪಾದಕ ಕೃತ್ಯಗಳ ವಿರುದ್ಧ ಪ್ರತಿಭಟನೆಉಡುಪಿ: ಬೆಂಗಳೂರಿನಲ್ಲಿ ಪಾಕ್ ಪರ ಘೋಷಣೆ ಮತ್ತು ಬಾಂಬ್ ಸ್ಫೋಟ ಪ್ರಕರಣಗಳ ಹಿನ್ನೆಲೆಯಲ್ಲಿ ದೇಶದ್ರೋಹಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಭಯೋತ್ಪಾದನಾ ವಿರೋಧಿ ವೇದಿಕೆ ಮಂಗಳವಾರ ನಗರದ ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಮುಂಭಾಗ ಪ್ರತಿಭಟನೆ ಆಯೋಜಿಸಿತ್ತು.ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸುಧಾಕರ್ ಶೆಟ್ಟಿ ಮಾತನಾಡಿ, ರಾಷ್ಟ್ರದ್ರೋಹ ಮಾಡಿದವರನ್ನು ಎಂದಿಗೂ ಕ್ಷಮಿಸಬಾರದು. ದೇಶಕ್ಕಿಂತ ದೊಡ್ಡದು ಯಾವುದು ಇಲ್ಲ. ವಿಧಾನಸೌಧದಲ್ಲಿ ಪಾಕ್‌ಪರ ಘೋಷಣೆ ಕೂಗಿದವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಲು ಎಲ್ಲ ಜನಪ್ರತಿನಿಧಿಗಳು ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದರು.ಸಮಾಜ ಸೇವ ಕಾರ್ಯಕರ್ತೆ ಸ್ವರ್ಣಾ, ಕಾನೂನು ವಿದ್ಯಾರ್ಥಿ ರವಿಚಂದ್ರ ಮಾತನಾಡಿದರು. ಉಡುಪಿ ಶಾಸಕ ಯಶಪಾಲ್ ಸುವರ್ಣ ಸೇರಿದಂತೆ ಬಿಜೆಪಿ ನಾಯಕರು, ಬ್ರಹ್ಮಾವರ, ಕಾರ್ಕಳ, ಕುಂದಾಪುರ, ಬೈಂದೂರು, ಹೆಬ್ರಿ, ಕಾಪು ಸಹಿತ ನಾನ ಭಾಗದಿಂದ ನೂರಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.ಪ್ರತಿಭಟನೆಯ ಕೊನೆಯಲ್ಲಿ ಹಿಂದೂ ಕಾರ್ಯಕರ್ತರು ಕಾಂಗ್ರೆಸ್ ನಾಯಕರ ಭಾವಚಿತ್ರಕ್ಕೆ ಉಗಿದು ವಿನೂತನ ರೀತಿಯಲ್ಲಿ ಪ್ರತಿಭಟಿಸಿದರು. ಉಡುಪಿ ಶಾಸಕ ಯಶಪಾಲ್ ಸುವರ್ಣ ಸೇರಿದಂತೆ ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರು ಎಲೆಅಡಿಕೆ ತಿಂದು ಕಾಂಗ್ರೆಸ್ ನಾಯಕರ ಭಾವಚಿತ್ರಕ್ಕೆ ಉಗುಳಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.