ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರೈತ ಮುಖಂಡರು ಶುಕ್ರವಾರ ಅಪರ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಮನವಿ ಸಲ್ಲಿಸಿದರು.

ಹಾವೇರಿ: ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಬೆಳೆಗಳು ಸಂಪೂರ್ಣವಾಗಿ ಹಾನಿಗೀಡಾಗಿದ್ದು, ಭೀಕರ ಬರಗಾಲದಿಂದ ತತ್ತರಿಸಿರುವ ರೈತರಿಗೆ ತಕ್ಷಣ 30 ಸಾವಿರ ರು. ಮಧ್ಯಂತರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರೈತ ಮುಖಂಡರು ಶುಕ್ರವಾರ ಅಪರ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಮನವಿ ಸಲ್ಲಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಅಪರ ಜಿಲ್ಲಾಧಿಕಾರಿ ಡಾ.ಎಲ್. ನಾಗರಾಜ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹಕ್ಕೊತ್ತಾಯದ ಮನವಿ ಸಲ್ಲಿಸಿ ಮಾತನಾಡಿದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ, ಕಳೆದ ಮೂರ್ನಾಲ್ಕು ವರ್ಷಗಳಿಂದ ನಿರಂತರವಾಗಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಎದುರಿಸುತ್ತಿರುವ ರೈತ ಸಮುದಾಯ ಸಂಕಷ್ಟದಲ್ಲಿದೆ. ಹಾವೇರಿ ಜಿಲ್ಲೆ ಹಾಗೂ ಹಲವು ತಾಲೂಕುಗಳನ್ನು ರಾಜ್ಯ ಸರ್ಕಾರ ಬರಪೀಡಿತ ಎಂದು ಘೋಷಿಸಿದೆ. ಆದರೆ, ಬರ ಘೋಷಣೆಯ ನಂತರ ರೈತರಿಗೆ ಯಾವ ರೀತಿಯ ನೆರವು ದೊರೆಯಲಿದೆ ಎಂಬ ಪ್ರಶ್ನೆ ಎದುರಾಗಿದೆ. ಸರ್ಕಾರಗಳು ವಿಳಂಬ ಮಾಡದೆ ರೈತರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಉಪಾಧ್ಯಕ್ಷ ಎಚ್.ಎಚ್. ಮುಲ್ಲಾ ಮಾತನಾಡಿ, ರೈತರ ಸಮಸ್ಯೆಗಳಿಗೆ ತಾತ್ಕಾಲಿಕ ಪರಿಹಾರ ನೀಡುವುದರ ಜತೆಗೆ ನೀರಾವರಿ, ಬೆಳೆ ವಿಮೆ, ಕೃಷಿ ಸಾಲ ಮತ್ತು ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಯಂತಹ ದೀರ್ಘಕಾಲೀನ ಸಮಸ್ಯೆಗಳಿಗೂ ಸರ್ಕಾರಗಳು ಪರಿಹಾರ ಕಂಡುಕೊಳ್ಳಬೇಕು. ಜಿಲ್ಲೆಯ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸುವ ಮೂಲಕ ಕೃಷಿ ಸಂಕಷ್ಟಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ರೈತರ ಈ ಎಲ್ಲ ಬೇಡಿಕೆಗಳನ್ನು ಶೀಘ್ರ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ, ಜೈಲ್ ಭರೋ ಚಳವಳಿ ಸೇರಿದಂತೆ ವಿವಿಧ ವಿನೂತನ ಹೋರಾಟಗಳನ್ನು ಸಾಮೂಹಿಕ ನಾಯಕತ್ವದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ರೈತ ಸಂಘದ ಮುಖಂಡರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡಿದರು.

ಈ ವೇಳೆ ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶಿವಬಸಪ್ಪ ಗೋವಿ, ತಾಲೂಕಾಧ್ಯಕ್ಷರಾದ ದಿಳ್ಳೆಪ್ಪ ಮಣ್ಣೂರ, ಮರಿಗೌಡ ಪಾಟೀಲ, ರುದ್ರಗೌಡ ಕಾಡನಗೌಡ್ರ, ರೈತ ಮುಖಂಡರಾದ ಸುರೇಶ ಹೊನ್ನಪ್ಪಳವರ, ರಾಜು ತರ್ಲಗಟ್ಟ, ಚನ್ನಪ್ಪ ಮರಡೂರ, ಸುರೇಶ ಚಲವಾದಿ, ಶಿವಯೋಗಿ ಹೊಸಗೌಡ್ರ, ಗುಡ್ಡನಗೌಡ ಪ್ಯಾಟಿಗೌಡ್ರ, ರಮೇಶ ದಡ್ಡೂರ, ರುದ್ರಪ್ಪ ಅಣ್ಣಿ, ಅಬ್ದುಲ್ ಖಾದರ್ ಬುಡಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.