ಸಂವಿಧಾನದಿಂದ ಪ್ರಜಾಪ್ರಭುತ್ವ ಬಲಿಷ್ಠ: ಕೆ.ಕೆ.ಕೃಷ್ಣಮೂರ್ತಿ

| Published : Jan 27 2025, 12:46 AM IST

ಸಂವಿಧಾನದಿಂದ ಪ್ರಜಾಪ್ರಭುತ್ವ ಬಲಿಷ್ಠ: ಕೆ.ಕೆ.ಕೃಷ್ಣಮೂರ್ತಿ
Share this Article
  • FB
  • TW
  • Linkdin
  • Email

ಸಾರಾಂಶ

ಸಂವಿಧಾನದಿಂದ ಭಾರತದ ಪ್ರಜಾಪ್ರಭುತ್ವ ಗಟ್ಟಿಯಾಗಿದೆ. ಸಂವಿಧಾನ, ಪ್ರಜಾಪ್ರಭುತ್ವ, ಮತದಾನ ಇವುಗಳ ಮೌಲ್ಯವನ್ನು ಭಾರತದ ಪ್ರತಿಯೊಬ್ಬ ಪ್ರಜೆಯೂ ತಿಳಿದುಕೊಳ್ಳಬೇಕು ಎಂದು ತಹಸೀಲ್ದಾರ್‌ ಹೇಳಿದರು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ಭಾರತದ ಪ್ರಜಾಪ್ರಭುತ್ವ ಗಟ್ಟಿಯಾಗಿದೆ. ಸಂವಿಧಾನ, ಪ್ರಜಾಪ್ರಭುತ್ವ, ಮತದಾನ ಇವುಗಳ ಮೌಲ್ಯವನ್ನು ಭಾರತದ ಪ್ರತಿಯೊಬ್ಬ ಪ್ರಜೆಯೂ ತಿಳಿದುಕೊಳ್ಳಬೇಕೆಂದು ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಹೇಳಿದರು.

ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ೭೬ನೇ ಗಣರಾಜ್ಯೋತ್ಸವದ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಪ್ರಜಾಪ್ರಭುತ್ವದಲ್ಲಿ ಸಂವಿಧಾನ ಮೌಲ್ಯ ಹಾಗೂ ಆಶಯಗಳನ್ನು ಗೌರವಿಸಿ, ಉಳಿಸಿ, ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಬೇಕೆಂದರು.

ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ಎಂ.ಬೆಳ್ಯಪ್ಪ ಮಾತನಾಡಿ, ಪ್ರತಿಯೊಬ್ಬರಿಗೂ ಸಂವಿಧಾನದ ಅರಿವು ಮತ್ತು ಜಾಗೃತಿ ಅವಶ್ಯ. ನಮ್ಮ ಸಂವಿಧಾನದ ಆಶಯಗಳು ವಿಶ್ವದಲ್ಲಿಯೇ ಶ್ರೇಷ್ಠವಾಗಿದ್ದು, ಸಮಾಜವಾದ, ಜಾತ್ಯಾತೀತ, ಪ್ರಜಾಸತ್ತಾತ್ಮಕ ಗಣರಾಜ್ಯವಾಗಿದೆ. ಯಾವುದೇ ಆಮಿಷಗಳಿಗೆ ಒಳಗಾಗದೆ ನಿರ್ಭೀತಿಯಿಂದ ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು. ಅದರಲ್ಲೂ ಯುವ ಮತದಾರರು ಮತದಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕಾಗಿದೆ ಎಂದರು.

ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿ.ಎಸ್.ಗೀತಾ ಅಧ್ಯಕ್ಷತೆ ವಹಿಸಿದ್ದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಜಯಂತಿ ಶಿವಕುಮಾರ್, ಉಪಾಧ್ಯಕ್ಷೆ ಮೋಹಿನಿ, ಸದಸ್ಯರಾದ ಮಹೇಶ್, ಪಿ.ಕೆ.ಚಂದ್ರು, ಚೌಡ್ಲು ಗ್ರಾಮ ಪಂಚಾಯಿತಿ ಸದಸ್ಯರಾದ ಸಿ.ಬಿ.ಸುರೇಶ್ ಶೆಟ್ಟಿ, ನತೀಶ್ ಮಂದಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸತೀಶ್, ಸೋಮವಾರಪೇಟೆ ನಗರಾಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ಕೆ.ಎ.ಆದಂ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತಿತರರು ಇದ್ದರು.

ಇತ್ತೀಚೆಗೆ ಅಪಘಾತದಲ್ಲಿ ಮೃತರಾದ ಯೋಧ ಲ್ಯಾನ್ಸ್ ಹವಾಲ್ದಾರ್ ದಿವಿನ್ ಅವರ ತಾಯಿ ಜಲಜಾಕ್ಷಿ ಅವರನ್ನು ಗೌರವಿಸಲಾಯಿತು. ವಿವಿಧ ಇಲಾಖೆಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ನೌಕರರಾದ ಜಾಧವ್, ಲಕ್ಷ್ಮೀ ಕುಮಾರ್ ಹಾಗೂ ಪಾತುನ ಅವರನ್ನು ಸನ್ಮಾನಿಸಲಾಯಿತು.

ಸಭಾ ಕಾರ್ಯಕ್ರಮಕ್ಕೆ ಮೊದಲು ಪೊಲೀಸ್, ಜೈ ಜವಾನ್ ಮಾಜಿ ಸೈನಿಕರ ಸಂಘ, ಗೃಹರಕ್ಷಕ ದಳ, ಸ್ಕೌಟ್ಸ್ ಹಾಗೂ ಶಾಲಾ ವಿದ್ಯಾರ್ಥಿಗಳ ತಂಡದಿಂದ ಆಕರ್ಷಕ ಪಥ ಸಂಚಲನ ನಡೆಯಿತು.