ರಾಜ್ಯದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತಿದ್ದು, ಸಂವಿಧಾನದ ಆಶಯದಂತೆ ಪ್ರಜಾಪ್ರಭುತ್ವದ ತಳಹದಿಯಲ್ಲಿ ಆಡಳಿತ ನಡೆಯುತ್ತಿದೆ.

ಕಾರವಾರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ ಅಡಿಪಾಯ ಹಾಕಿದ್ದರು. ಅವರ ಸಮಾನತೆ ಹಾಗೂ ಸಾಮಾಜಿಕ ನ್ಯಾಯದ ಚಿಂತನೆಗಳಿಂದ ಪ್ರೇರಣೆ ಪಡೆದ ಡಾ. ಬಿ.ಆರ್. ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯಿಂದಾಗಿ ದೇಶದಲ್ಲಿ ಎಲ್ಲರೂ ಸಮಾನತೆ ಮತ್ತು ಸಹಬಾಳ್ವೆಯಿಂದ ಬದುಕಲು ಸಾಧ್ಯವಾಗಿದೆ ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಹೇಳಿದರು.ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ- 2026ರ ಅಂಗವಾಗಿ ‘ಪ್ರಜಾಪ್ರಭುತ್ವದಲ್ಲಿ ಯುವ ಸಂಸತ್ತು’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಅನುಭವ ಮಂಟಪದಲ್ಲಿ ಎಲ್ಲ ವರ್ಗದ ಜನರಿಗೆ, ವಿಶೇಷವಾಗಿ ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸುವ ಮೂಲಕ ಬಸವಣ್ಣನವರು ಮಹತ್ವದ ಸಾಮಾಜಿಕ ಮತ್ತು ಪ್ರಜಾಪ್ರಭುತ್ವದ ಸಂದೇಶ ಸಾರಿದ್ದರು. ಅದೇ ಪ್ರೇರಣೆಯಿಂದ ಮಹಿಳೆಯರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಲು ಸಾಧ್ಯವಾಗಿದೆ ಎಂದರು. ರಾಜ್ಯದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತಿದ್ದು, ಸಂವಿಧಾನದ ಆಶಯದಂತೆ ಪ್ರಜಾಪ್ರಭುತ್ವದ ತಳಹದಿಯಲ್ಲಿ ಆಡಳಿತ ನಡೆಯುತ್ತಿದೆ. ದೇಶ ಕಟ್ಟುವ ಯುವಜನರಲ್ಲಿ ಪ್ರಜಾಪ್ರಭುತ್ವದ ಕುರಿತು ಅರಿವು ಮೂಡಿಸುವುದು ಅಗತ್ಯ. ಶಾಲಾ- ಕಾಲೇಜುಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಪರಿಚಯಿಸಬೇಕು. ಶಾಂತಿ ಮತ್ತು ಸಹಬಾಳ್ವೆಯ ಸಂದೇಶವನ್ನು ಸಾರಬೇಕು. ಪ್ರಜಾಪ್ರಭುತ್ವವನ್ನು ಮತ್ತಷ್ಟ್ಟು ಗಟ್ಟಿಗೊಳಿಸಿದಾಗ ಮಾತ್ರ ಸಮಾನತೆ ಮತ್ತು ಸಹಬಾಳ್ವೆ ಸಾಧ್ಯ ಎಂದರು.ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯುನಿಕೇಷನ್ ಆ್ಯಂಡ್ ಅಡ್ವರ್ಟೈಸಿಂಗ್ ಏಜೆನ್ಸಿ ಲಿಮಿಟೆಡ್ ಅಧ್ಯಕ್ಷ, ಶಾಸಕ ಸತೀಶ್ ಕೆ. ಸೈಲ್ ಮಾತನಾಡಿ, ಜನರಿಂದ, ಜನರಿಗಾಗಿ, ಜನರಿಗೋಸ್ಕರ ಇರುವ ವ್ಯವಸ್ಥೆಯೇ ಪ್ರಜಾಪ್ರಭುತ್ವ. ಸಂವಿಧಾನದ ಆಶಯಗಳನ್ನು ಅನುಸರಿಸಿ ಆಡಳಿತ ನಡೆಸಬೇಕು. ಯುವಜನರಿಗೆ ಅಗತ್ಯವಾದ ಅವಕಾಶಗಳನ್ನು ಕಲ್ಪಿಸಬೇಕು. ಕರಾವಳಿ ಭಾಗದ ಅಭಿವೃದ್ಧಿಗೆ ಅಗತ್ಯ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದರು.

ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಮಾತನಾಡಿ, ಪ್ರತಿಯೊಬ್ಬರೂ ಸಂವಿಧಾನದ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಂವಿಧಾನವು ಎಲ್ಲರಿಗೂ ಹಲವು ಹಕ್ಕುಗಳು ಮತ್ತು ಅವಕಾಶಗಳನ್ನು ನೀಡಿದೆ. ದೊರೆತ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದರು.

ಅಂಕೋಲಾದ ಗೋಖಲೆ ಸೆಂಟಿನರಿ ಕಾಲೇಜಿನ ಪ್ರಾಚಾರ್ಯ ಹಾಗೂ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಮತ್ತು ಅಕಾಡೆಮಿಕ್ ಕೌನ್ಸಿಲ್ ಸದಸ್ಯ ಡಾ. ಸಿದ್ದಲಿಂಗಸ್ವಾಮಿ ವಿ. ವಸ್ತ್ರದ ಅವರು ಯುವ ಸಂಪತ್ತು ಕುರಿತು ವಿಶೇಷ ಉಪನ್ಯಾಸ ನೀಡಿದರು.

ವಿಧಾನಪರಿಷತ್ ಸದಸ್ಯ ಗಣಪತಿ ಡಿ. ಉಳ್ವೇಕರ, ಜಿಲ್ಲಾ ಪಂಚಾಯಿತಿ ಸಿಇಒ ಡಾ. ದಿಲೀಷ್ ಶಶಿ, ಎಸ್ಪಿ ದೀಪನ್ ಎಂ.ಎನ್., ಕರ್ನಾಟಕ ಜಲಸಾರಿಗೆ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಾಲಚಂದ್ರ, ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಉಮೇಶ್ ವೈ.ಕೆ., ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆಗಳ ಅಧ್ಯಕ್ಷರು, ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು.