ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ಮಂಗಳವಾರ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಮಡಿಕೇರಿ: ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ಮಂಗಳವಾರ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ವಿರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ.ಕೆ.ಸಿ.ದಯಾನಂದ ಅವರು ಪ್ರಜಾಪ್ರಭುತ್ವ ಒಂದು ಕೇವಲ ಆಡಳಿತ ವ್ಯವಸ್ಥೆಯಲ್ಲ. ಅದು ಜೀವನದ ಮೌಲ್ಯ ಆಗಿದೆ ಎಂದರು.

ನಗರಸಭೆ ಅಧ್ಯಕ್ಷ ಪಿ.ಕಲಾವತಿ ಅವರು ಮಾತನಾಡಿ ಪ್ರಜಾಪ್ರಭುತ್ವದ ತತ್ವಗಳು, ಮೌಲ್ಯಗಳನ್ನು ಸಂರಕ್ಷಿಸುವುದು ಮತ್ತು ಜನರಲ್ಲಿ ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ದೇಶದಿಂದ ವಿಶ್ವಸಂಸ್ಥೆಯ ಸಾಮಾನ್ಯ ಸಭೆ 2007 ರಲ್ಲಿ 15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸಲು ನಿರ್ಧರಿಸಿದೆ ಎಂದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಘಟಕದ ಅಧ್ಯಕ್ಷರಾದ ಮಂದ್ರೀರ ಮೋಹನ್ ದಾಸ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಗಣಪತಿ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಹೇಶ್, ಪ್ರಮುಖರಾದ ಎಚ್.ಎಲ್.ದಿವಾಕರ, ಗಾಯತ್ರಿ, ಎಚ್.ಎಲ್.ಕುಮಾರ, ಪ್ರೇಮ, ವಕೀಲರ ಸಂಘದ ಅಧ್ಯಕ್ಷರಾದ ಸಿ.ಟಿ.ಜೋಸೆಫ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಇತರರು ಇದ್ದರು. ಸಂವಿಧಾನ ಹಾಡು: ಕೊಡಗು ಜಿಲ್ಲಾ ವಿದ್ಯಾಸಾಗರ ಕಲಾವೇದಿಕೆಯ ಈ.ರಾಜು ಮತ್ತು ತಂಡದವರು ಸಂವಿಧಾನ ಕುರಿತು ಹಾಡು ಹಾಡಿದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಅವರು ಸಂವಿಧಾನ ಪೀಠಿಕೆ ಓದಿದರು. ಲಹರಿ ತಂಡದವರು ವಂದೇ ಮಾತರಂ, ನಾಡಗೀತೆ, ರೈತಗೀತೆ ಹಾಡಿದರು. ಪವನ್ ಕುಮಾರ್ ನಿರೂಪಿಸಿ, ವಂದಿಸಿದರು.