ಸಾರಾಂಶ
ಕನ್ನಡಪ್ರಭ ವಾರ್ತೆ ಮದ್ದೂರು
ವಿಧಾನಸಭಾ ಕ್ಷೇತ್ರದಲ್ಲಿ ಶಿಥಿಲಗೊಂಡ ಸರ್ಕಾರಿ ಶಾಲೆಗಳನ್ನು ನೆಲಸಮಗೊಳಿಸುವ ಮೂಲಕ ಹೊಸ ಕಟ್ಟಡ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಶುಕ್ರವಾರ ಹೇಳಿದರು.ತಾಲೂಕಿನ ನಿಡಘಟ್ಟ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ 72.50 ಲಕ್ಷ ರು. ವೆಚ್ಚದಲ್ಲಿ ಸರ್ಕಾರಿ ಹಿರಿಯ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ನಿಡಘಟ್ಟ ಶಾಲೆ 125 ವರ್ಷಗಳ ಇತಿಹಾಸ ಹೊಂದಿದೆ. ನೂತನ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಲು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಮಾಡಲಾಗಿತ್ತು. ಮನವಿಗೆ ಸ್ಪಂದಿಸಿರುವ ಸಚಿವರು ಅನುದಾನ ಬಿಡುಗಡೆ ಮಾಡಿದ್ದು, ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.ಕ್ಷೇತ್ರ ವ್ಯಾಪ್ತಿಯ ನವಿಲೇ, ಅರುವನಹಳ್ಳಿ, ಸುಣ್ಣದದೊಡ್ಡಿ ಹಾಗೂ ಬಿದರ ಹೊಸಹಳ್ಳಿಯಲ್ಲಿ ಹೊಸದಾಗಿ ಸರ್ಕಾರಿ ಶಾಲೆ ಕಟ್ಟಡಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿವೆ. ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ ಕಲ್ಪಿಸಲು ಕ್ಷೇತ್ರಕ್ಕೆ ಮತ್ತೆರಡು ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಕೆಲ ದಿನಗಳಲ್ಲೇ ಮಂಜೂರಾತಿ ಸಿಗಲಿದೆ ಎಂದು ಭರವಸೆ ನೀಡಿದರು.
ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ದೇವಾನಂದ, ಸಹಾಯಕ ಇಂಜಿನಿಯರ್ ಹನುಮಂತು, ಕ್ಷೇತ್ರ ಶಿಕ್ಷಣಾಧಿಕಾರಿ ಧನಂಜಯ, ಶಿಕ್ಷಣ ಸಂಯೋಜಕ ಲೋಕೇಶ್, ಗ್ರಾಪಂ ಅಧ್ಯಕ್ಷೆ ಉಮಾ ಚಿಕ್ಕ ಪುಟ್ಟೇಗೌಡ, ಸದಸ್ಯರಾದ ಮಹೇಶ್.ರಾಜಣ್ಣ, ಅಭಿಷೇಕ್, ಖುದ್ದುಸ್, ದೀಪು, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಬಸವರಾಜು. ಪಿಡಿಒ ಶೀಲಾ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.-----------
16ಕೆಎಂಎನ್ ಡಿ11ಮದ್ದೂರು ತಾಲೂಕು ನಿಡಘಟ್ಟ ಗ್ರಾಮದಲ್ಲಿ ಸರ್ಕಾರಿ ಹಿರಿಯ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಚಾಲನೆ ನೀಡಿದರು.
ಬಿಜೆಪಿ ನಾಯಕರಿಗೆ ಸಾಮಾನ್ಯ ಜ್ಞಾನವೂ ಇಲ್ಲ:ಮದ್ದೂರು: ಬೆಂಗಳೂರು ಅಭಿವೃದ್ಧಿ ದೃಷ್ಟಿಯಿಂದ ಗ್ರೇಟರ್ ಬೆಂಗಳೂರು ಆಡಳಿತ ಆರಂಭವಾಗಿದೆ. ಇದನ್ನು ವಿರೋಧಿಸುವ ಬಿಜೆಪಿ ನಾಯಕರಿಗೆ ಸಾಮಾನ್ಯ ಜ್ಞಾನ ಮತ್ತು ಬುದ್ಧಿಯೂ ಇಲ್ಲ ಎಂದು ಶಾಸಕ ಕೆ.ಎಂ.ಉದಯ್ ವ್ಯಂಗ್ಯವಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಮಂಡಲದ ಅಧಿವೇಶನದಲ್ಲಿ ಗ್ರೇಟರ್ ಬೆಂಗಳೂರು ಮಸೂಧೆ ಸಂಬಂಧ ಅಂಗೀಕಾರಕ್ಕೆ ಸಲಹೆ ನೀಡಿರುವ ವಿರೋಧ ಪಕ್ಷದ ನಾಯಕ ಕ್ವಾಟರ್ ಹೊಡೆದುಕೊಂಡು ಸದನದಲ್ಲಿ ಕುಳಿತಿದ್ದರಾ ಎಂದು ಪ್ರಶ್ನಿಸಿದರು.ಮದ್ದೂರು ಪಟ್ಟಣ ವ್ಯಾಪ್ತಿಯ ಸಾರ್ವಜನಿಕರ ಒತ್ತಾಯದಂತೆ ಬಿಎಂಐಸಿ ಯೋಜನೆಯಿಂದ ಕೈ ಬಿಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದೆ. ಹೀಗಾಗಿ ಸದನದಲ್ಲಿ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಸಾಕಷ್ಟು ಚರ್ಚೆಗಳಾಗಿವೆ. ಸುಪ್ರೀಂಕೋರ್ಟ್ ನಲ್ಲಿಯೂ ವಿಚಾರಣೆ ಹಂತದಲ್ಲಿದ್ದು, ನ್ಯಾಯಾಲಯದ ತೀರ್ಪು ಹೊರಬಿದ್ದ ಬಳಿಕ ಬಿಎಂಐಸಿ ಯೋಜನೆ ಬಗ್ಗೆ ಸರ್ಕಾರ ಮುಂದಿನ ತೀರ್ಮಾನ ಕೈಗೊಳ್ಳಲಿದೆ. ಈ ಸಮಸ್ಯೆಗೆ ಆದಷ್ಟು ಬೇಗ ಮುಕ್ತಿ ಸಿಗಲಿದೆ ಎಂದು ಶಾಸಕರು ತಿಳಿಸಿದರು.