ಸಾರಾಂಶ
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಜಿಲ್ಲೆಯಲ್ಲಿ 92 ಡೆಂಘೀ ಪ್ರಕರಣಗಳು ಈ ವರ್ಷದ ಜನವರಿ ತಿಂಗಳಿನಿಂದ ಈವರೆಗೆ ದಾಖಲಾಗಿವೆ. ಈ ಡೆಂಘೀ ಪ್ರಕರಣಗಳು ಮತ್ತಷ್ಟು ಹೆಚ್ಚಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಸಮುದಾಯದೊಂದಿಗೆ ಸೇರಿ ನಿಯಂತ್ರಿಸಲು ಜಿಲ್ಲಾಡಳಿತ ಕಾರ್ಯೋನ್ಮುಖವಾಗಿದ್ದು, ಸಾರ್ವಜನಿಕರು ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಮನವಿ ಮಾಡಿದರು.ನಗರದ ಹೊರವಲಯದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಡೆಂಘೀ ನಿಯಂತ್ರಣಕ್ಕಾಗಿ ಗ್ರಾಮ ಹಾಗೂ ವಾರ್ಡ್ ಮಟ್ಟದಿಂದ ಕ್ರಮವಹಿಸುತ್ತಿದ್ದು, ಪ್ರತಿ ವಾರಕ್ಕೊಮ್ಮೆ ಶುಕ್ರವಾರ ಈಡಿಸ್ ಸೊಳ್ಳೆ ನಾಶಕ ದಿನಗಳನ್ನು ಆಚರಿಸುವ ಮೂಲಕ ಮನೆಗಳ ಸುತ್ತಮುತ್ತ ನೀರು ಸಂಗ್ರಹವಾಗುವ ತಾಣಗಳನ್ನು, ಬಳಕೆ ಮಾಡಿ ಎಸೆದಿರುವ ಅನುಪಯುಕ್ತ ವಸ್ತುಗಳಲ್ಲಿ ನೀರು ಶೇಖರಣೆಯಾಗಿರುವುದನ್ನು ತೆರವುಗೊಳಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಈ ಕಾರ್ಯಕ್ಕಾಗಿ ಆರೋಗ್ಯ ಇಲಾಖೆಯೊಂದಿಗೆ ಕಂದಾಯ, ಪಂಚಾಯತ್ ರಾಜ್, ಶಾಲಾ ಶಿಕ್ಷಣ, ಸಾರಿಗೆ ಹಾಗೂ ಇನ್ನಿತರ ಇಲಾಖೆಗಳ ಸಮನ್ವಯತೆಯೊಂದಿಗೆ ಕಾರ್ಯೋನ್ಮುಖವಾಗಿ ಜುಲೈ ತಿಂಗಳನ್ನು ಡೆಂಘೀ ವಿರೋಧಿ ಮಾಸಾಚರಣೆಯನ್ನಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಚಿಕ್ಕಬಳ್ಳಾಪುರ ಮತ್ತು ಶಿಡ್ಲಘಟ್ಟ ತಾಲೂಕುಗಳಲ್ಲಿ ಹೆಚ್ಚಿನ ಡೆಂಘೀ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆ ರಕ್ತ ತಪಾಸಣಾ ಕಾರ್ಯಗಳನ್ನು ಜಿಲ್ಲೆಯಲ್ಲಿ ಹೆಚ್ಚಿಸಲಾಗಿದೆ. ಈವರೆಗೆ 820 ರಕ್ತ ತಪಾಸಣೆ ಮಾಡಲಾಗಿದ್ದು, ಬಾಗೇಪಲ್ಲಿ ತಾಲೂಕಿನಲ್ಲಿ 15, ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 26, ಚಿಂತಾಮಣಿ ತಾಲೂಕಿನಲ್ಲಿ 14, ಗುಡಿಬಂಡೆ ತಾಲೂಕಿನಲ್ಲಿ 3, ಗೌರಿಬಿದನೂರು ತಾಲೂಕಿನಲ್ಲಿ 11 ಹಾಗೂ ಶಿಡ್ಲಘಟ್ಟ ತಾಲೂಕಿನಲ್ಲಿ 23 ಡೆಂಘೀ ಪ್ರಕರಣಗಳು ಜನವರಿಯಿಂದ ಈವರೆಗೆ ದಾಖಲಾಗಿವೆ. ಡೆಂಘೀ ಪ್ರಕರಣ ಕಂಡುಬರುವ ಗ್ರಾಮ ಮತ್ತು ವಾರ್ಡ್ ಗಳಲ್ಲಿ ಸೊಳ್ಳೆಗಳನ್ನು ನಿಯಂತ್ರಿಸಲು ಮಾರ್ಗಸೂಚಿಯನುಸಾರ ಫಾಗಿಂಗ್ ಮಾಡಲು ಸ್ಥಳೀಯಾಡಳಿತ ಸಂಸ್ಥೆಗಳಿಗೆ ಸೂಚಿಸಲಾಗಿದೆ. ಡೆಂಘೀ ತಪಾಸಣೆಗೆ 300 ರು.ಗಳನ್ನು ನಿಗದಿಗೊಳಿಸಿರುವ ಸರ್ಕಾರದ ಸೂಚನೆಯನ್ನು ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳೂ ಪಾಲಿಸಬೇಕು. ಇಲ್ಲವಾದಲ್ಲಿ ಕೆಪಿಎಂಇ ಅನ್ವಯ ಕಾನೂನು ಕ್ರಮಕ್ಕೆ ಗುರಿಪಡಿಸಲಾಗುತ್ತದೆ ಎಂದು ತಿಳಿಸಿದರು.ಶಾಲಾ ಮುಖ್ಯಸ್ಥರಲ್ಲಿ ಮನವಿ:
ಡೆಂಘೀ ಪ್ರಕರಣಗಳು ಮಕ್ಕಳಲ್ಲಿ ಕಂಡು ಬರುತ್ತಿದ್ದು, ಶಾಲೆಯ ಸುತ್ತಮುತ್ತಲೂ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಂಡು ವಿದ್ಯಾರ್ಥಿಗಳ ಆರೋಗ್ಯ ಕಾಪಾಡುವುದು ಶಾಲಾ ಮುಖ್ಯಸ್ಥರ ಜವಾಬ್ದಾರಿಯಾಗಿರುತ್ತದೆ. ಶಾಲಾ ಕೊಠಡಿಗಳ ಕಿಟಕಿಗಳಿಗೆ ಜಾಲರಿ ಅಳವಡಿಸಿ ಸೊಳ್ಳೆಗಳು ಕೊಠಡಿಗೆ ಬಾರದಂತೆ ತಡೆಯಬೇಕು. ಮಕ್ಕಳಲ್ಲಿ ಜ್ವರ ಕಾಣಿಸಿಕೊಂಡ ಕೂಡಲೇ ಅವರ ಪೋಷಕರಿಗೆ ಅಥವಾ ನೇರವಾಗಿ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಕೊಡಿಸುವ ಜವಾಬ್ದಾರಿಯನ್ನು ಶಾಲೆಗಳನ್ನು ನಿರ್ವಹಿಸುವ ಮುಖ್ಯಸ್ಥರು, ಶಿಕ್ಷಕರು ಮಾಡುವಂತೆ ಮನವಿ ಮಾಡಿದರು.ಎಲ್ಲಾ ನೀರಿನ ತೊಟ್ಟಿಗಳು, ಡ್ರಮ್, ಬ್ಯಾರಲ್ ಗಳು, ಏರ್ ಕೂಲರ್ ಇತ್ಯಾದಿಗಳನ್ನು ವಾರಕ್ಕೊಮ್ಮೆ ತಪ್ಪದೇ ಖಾಲಿ ಮಾಡಿ, ಒಣಗಿಸಿ ಪುನಃ ನೀರು ಭರ್ತಿ ಮಾಡಬೇಕು. ನೀರು ಖಾಲಿ ಮಾಡಲು ಸಾಧ್ಯವಿಲ್ಲದಿದ್ದಲ್ಲಿ ತೊಟ್ಟಿ ಮುಂತಾದವುಗಳಲ್ಲಿ ಕೀಟಗಳು ನುಸುಳದಂತೆ ಸರಿಯಾದ ಮುಚ್ಚಳದಿಂದ ಮುಚ್ಚಬೇಕು. ಬಯಲಿನಲ್ಲಿರುವ ಘನತ್ಯಾಜ್ಯ ವಸ್ತುಗಳಾದ ಟೈರು, ಎಳನೀರಿನ ಚಿಪ್ಪು, ಒಡೆದ ಬಾಟಲಿ ಮುಂತಾದವುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರವಹಿಸುವುದು ಅಥವಾ ಸೂಕ್ತ ವಿಲೇವಾರಿ ಮಾಡುವುದು. ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆ ನಿರೋಧಕಗಳನ್ನು ಹಾಗೂ ಸೊಳ್ಳೆ ಪರದೆಗಳನ್ನು ಬಳಸುವುದು. ಸೊಳ್ಳೆ ಕಚ್ಚದಂತೆ ಎಚ್ಚರವಹಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಜಿಲ್ಲಾ ಪಂಚಾಯತ್ ಸಿಇಒ ಪ್ರಕಾಶ್ ಜಿ.ಟಿ.ನಿಟ್ಟಾಲಿ ಮಾತನಾಡಿ, ಗ್ರಾಮಾಂತರ ಪ್ರದೇಶಗಳಲ್ಲಿ ನೀರಿನ ಟ್ಯಾಂಕ್ ಗಳನ್ನು, ತೊಟ್ಟಿಗಳನ್ನು ನಿಯಮಿತವಾಗಿ ಶುಚಿಕೊಳ್ಳಿಸಲಾಗುತ್ತಿದೆ. ಈ ಕಾರ್ಯವನ್ನು ಮುಂದುವರೆಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಲಾಗಿದೆ. ಕುಡಿಯುವ ನೀರು ಪೂರೈಸುವ ಪೈಪ್ ಗಳು ದುರಸ್ತಿಯಾಗದಿದ್ದಲ್ಲಿ, ನೀರು ಸೋರಿಕೆಯಾಗುತ್ತಿದ್ದಲ್ಲಿ ಕೂಡಲೇ ಸೂಕ್ತ ಕ್ರಮ ತೆಗೆದುಕೊಳ್ಳಲು ಮತ್ತು ಚರಂಡಿಗಳಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಲು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ ಎಂದು ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಡೆಂಘೀ ಜ್ವರ ನಿಯಂತ್ರಣ ಕುರಿತು ಜಾಗೃತಿ ಮೂಡಿಸುವ ಕರಪತ್ರಗಳು ಮತ್ತು ಬಿತ್ತಿಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್. ಮಹೇಶ್ ಕುಮಾರ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಪ್ರಕಾಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಜುಂಜಣ್ಣ ಇದ್ದರು.