ಹೊಸಪೇಟೆ: ಜಿಲ್ಲೆಯಲ್ಲಿ ಡೆಂಘೀ ಮತ್ತು ಮಲೇರಿಯಾ, ಕಾಲರಾದಂತಹ ಮಾರಣಾಂತಿಕ ರೋಗಗಳಿಂದ ಶೇ.100ರಷ್ಟು ಮುಕ್ತ ಜಿಲ್ಲೆಯಾಗಿಸಲು ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮವಹಿಸಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚನೆ ನೀಡಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಂಬರುವ ದಿನಗಳಲ್ಲಿ ಮುಂಗಾರು ಮಳೆ ಆರಂಭವಾಗುತ್ತಿದ್ದು, ಕಲುಷಿತ ನೀರು, ಹವಾಮಾನ ವೈಪರೀತ್ಯದಿಂದಾಗಿ ಡೆಂಘೀ, ಮಲೇರಿಯಾ, ಕಾಲರಾದಂತಹ ಸಾಂಕ್ರಾಮಿಕ ರೋಗಗಳ ಉಲ್ಬಣಗೊಳ್ಳುವ ಸಾಧ್ಯತೆ ಹೆಚ್ಚಿದೆ. ಈ ಬಗ್ಗೆ ಸಾರ್ವಜನಿಕರಿಗೆ ಸ್ಥಳೀಯ ಆಡಳಿತ ಸಂಸ್ಥೆ ಸ್ವಚ್ಚ ಹಾಗೂ ಶುದ್ಧ ಕುಡಿಯುವ ನೀರು ಪೂರೈಸಬೇಕು. ಒಂದು ವೇಳೆ ಪೈಪ್‌ಲೈನ್ ದುರಸ್ತಿ ಇನ್ನಿತರೆ ಕಾರಣಗಳಿಂದ ಕಲುಷಿತ ನೀರು ಸರಬರಾಜಾಗಿ ಸಾರ್ವಜನಿಕರ ಆರೋಗ್ಯದಲ್ಲಿ ಏರುಪೇರು ಉಂಟಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿಸಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಶಾಲಾ ಕಾಲೇಜುಗಳಲ್ಲಿ ಮುಂಜಾನೆ ಪ್ರಾರ್ಥನೆ ನಂತರ ಪ್ರತಿದಿನ ಈ ಕಾಯಿಲೆಗಳಿಂದಾಗುವ ದುಷ್ಪರಿಣಾಮದ ಬಗ್ಗೆ ತಿಳಿ ಹೇಳಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕರು ತಮ್ಮ ಮನೆಗಳ ಸುತ್ತ ಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ಕುದಿಸಿ, ಆರಿಸಿದ ನೀರು ಕುಡಿಯಬೇಕು. ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯಬೇಕು ಎಂದರು.

ಕಳೆದ ವರ್ಷಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಕುಸಿದಿದೆ. 2023-​24ರಲ್ಲಿ 323 ರಷ್ಟಿದ್ದ ಪ್ರಕರಣಗಳು, ಪ್ರಸಕ್ತ ಸಾಲಿನಲ್ಲಿ ಕೇವಲ 14ಕ್ಕೆ ಇಳಿಕೆಯಾಗಿವೆ. ಆರೋಗ್ಯ ಇಲಾಖೆ ಕೈಗೊಂಡ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮ ಮತ್ತು ಸಾಧನೆಯಿಂದ ಇಡೀ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಶ್ಲಾಘಿಸಿದರು.


ವಿಶ್ವಾಸ ಮೂಡಿಸಲು ವಿನೂತನ ಪ್ರಯೋಗ:

ನಗರ ಸೇರಿದಂತೆ ಕೆಲವು ಗ್ರಾಮೀಣ ಭಾಗದಲ್ಲಿ ಲಸಿಕೆ ಪಡೆಯಲು ಕೆಲವು ಸಮುದಾಯದ ಪೋಷಕರು ಹಿಂಜರಿಯುತ್ತಿರುವ ಬಗ್ಗೆ ಮಾಹಿತಿ ಇದೆ. ಆದ್ದರಿಂದ ಅಂತಹ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಲು ವಿನೂತನ ಕ್ರಮ ಕೈಗೊಳ್ಳಲಾಗಿದೆ. ಲಸಿಕೆ ಪಡೆದ ಆಯಾ ಸಮುದಾಯದ ಮಕ್ಕಳ ಮೂಲಕವೇ ಅವರದ್ದೇ ಆದ ಸ್ಥಳೀಯ ಭಾಷೆಯಲ್ಲಿ ಕಿರು ವಿಡಿಯೋ ಸಂದೇಶಗಳನ್ನು ಸಿದ್ಧಪಡಿಸಿ ಪೋಷಕರಲ್ಲಿನ ಭೀತಿ ನಿವಾರಿಸಲಾಗುತ್ತಿದೆ. ಈ ಮೂಲಕ ಲಸಿಕಾ ಅಭಿಯಾನ ಶೇ.100 ಗುರಿ ತಲುಪಲು ಸಾಧ್ಯ ಎಂದು ಆರ್‌ಸಿಹೆಚ್ ಅಧಿಕಾರಿ ಜಂಬಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

ಸಭೆಯಲ್ಲಿ ಜಿಪಂ ಸಿಇಒ ನೋಂಗ್ಜಯ್ ಮಹ್ಮದ್ ಅಲಿ ಅಕ್ರಂ ಷಾ, ಡಿಎಚ್‌ಒ ಡಾ.ಎಲ್.ಆರ್. ಶಂಕರ್ ನಾಯ್ಕ್, ಆರ್‌ಸಿಎಚ್ ಅಧಿಕಾರಿ ಡಾ.ಜಂಬಯ್ಯ, ಪಶುಸಂಗೋಪನೆ ಇಲಾಖೆ ಅಧಿಕಾರಿ ರವಿ ಜಿಲ್ಲಾ ಅನುಷ್ಠಾನಾಧಿಕಾರಿ ಷಣ್ಮುಖ ನಾಯ್ಕ ಹಾಗೂ ವಿವಿಧ ತಾಲೂಕುಗಳ ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.