ನಕಲು ಮುಕ್ತ ಪರೀಕ್ಷೆಗೆ ಇಲಾಖೆ ಸನ್ನದ್ಧ: ಪ್ರಭಾವತಿ ಪಾಟೀಲ

| Published : Mar 24 2024, 01:32 AM IST

ಸಾರಾಂಶ

ಹುಕ್ಕೇರಿ ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಂಡಿದ್ದು, ಪಾರದರ್ಶಕ, ವ್ಯವಸ್ಥಿತ ಹಾಗೂ ನಕಲುಮುಕ್ತ ಪರೀಕ್ಷೆಗೆ ಸನ್ನದ್ಧಗೊಳಿಸಲಾಗಿದೆ. ತಾಲೂಕಿನಲ್ಲಿ ಒಟ್ಟು 6880 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಭಾವತಿ ಪಾಟೀಲ ಹೇಳಿದರು.

ಕನ್ನಡಪ್ರಭ ವಾರ್ತೆ ಹುಕ್ಕೇರಿ

ಹುಕ್ಕೇರಿ ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಂಡಿದ್ದು, ಪಾರದರ್ಶಕ, ವ್ಯವಸ್ಥಿತ ಹಾಗೂ ನಕಲುಮುಕ್ತ ಪರೀಕ್ಷೆಗೆ ಸನ್ನದ್ಧಗೊಳಿಸಲಾಗಿದೆ. ತಾಲೂಕಿನಲ್ಲಿ ಒಟ್ಟು 6880 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಭಾವತಿ ಪಾಟೀಲ ಹೇಳಿದರು.

ಪಟ್ಟಣದ ಬಿಇಒ ಕಚೇರಿಯಲ್ಲಿ ಶುಕ್ರವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಇದೇ ತಿಂಗಳು 25 ರಿಂದ ಏಪ್ರಿಲ್ 6ರವರೆಗೆ ನಡೆಯಲಿದ್ದು, ತಾಲೂಕಿನಾದ್ಯಂತ ವಿದ್ಯಾರ್ಥಿಗಳು ಒತ್ತಡ ರಹಿತ ಹಾಗೂ ನಿರ್ಭೀತಿಯಿಂದ ಪರೀಕ್ಷೆ ಎದುರಿಸಲಿದ್ದಾರೆ ಎಂದು ತಿಳಿಸಿದರು.

ಒಟ್ಟು 19 ಪರೀಕ್ಷಾ ಕೇಂದ್ರಗಳಿದ್ದು, 3649 ಗಂಡು, 3231 ಹೆಣ್ಣು ಸೇರಿ ಒಟ್ಟು 6880 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷಾ ಕಾರ್ಯಕ್ಕೆ ಒಟ್ಟು 450 ಸಿಬ್ಬಂದಿ ನಿಯೋಜಿಸಲಾಗಿದೆ. 19 ಮುಖ್ಯ ಅಧೀಕ್ಷಕರು, 11 ಉಪಮುಖ್ಯ ಅಧೀಕ್ಷಕರು, 19 ಜನ ಪ್ರಶ್ನೆ ಪತ್ರಿಕೆ ಕಸ್ಟೋಡಿಯನ್ಸ್, 19 ಜನ ಮೊಬೈಲ್ ಸ್ವಾಧೀನಾಧಿಕಾರಿಗಳು, 19 ಜನ ಪೊಲೀಸ್ ಸಿಬ್ಬಂದಿ, ಜಾಗೃತ ದಳ, ಸ್ಥಾನಿಕ ಜಾಗೃತ ದಳ ನಿಯೋಜಿಸಲಾಗಿದೆ. 19 ಆರೋಗ್ಯ ಕೌಂಟರ್‌ ಸಹ ತೆರೆಯಲಾಗಿದೆ ಎಂದು ಪ್ರಭಾವತಿ ಮಾಹಿತಿ ನೀಡಿದರು.

ಉತ್ತಮ ಫಲಿತಾಂಶ ಸುಧಾರಣೆಗೆ ಅಣಕು ಪರೀಕ್ಷೆ, ಮೇಸ್ಟ್ರು ಬಂದರು ಮಂಗಳವಾರ, ಸರಣಿ ಪರೀಕ್ಷೆ ಸೇರಿದಂತೆ ಹಲವು ವಿನೂತನ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದ್ದು, ನೇರಪ್ರಸಾರ (ವೆಬ್‌ಕಾಸ್ಟಿಂಗ್)ಕ್ಕೆ ಕ್ರಮವಹಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀ. ನಿಷೇಧಾಜ್ಞೆ ಹೇರಲಾಗಿದೆ ಎಂದು ತಿಳಿಸಿದರು.

ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಮೂಲ ಸೌಲಭ್ಯಗಳಾದ ಕುಡಿಯುವ ನೀರು, ವಿದ್ಯುತ್, ಆರೋಗ್ಯ, ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ಲೋಪದೋಷವಾಗದಂತೆ ಮುನ್ನಚ್ಚರಿಕೆ ವಹಿಸಲಾಗಿದೆ. ಒಟ್ಟಿನಲ್ಲಿ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ವಿವಿಧ ಇಲಾಖೆ ಬದ್ಧತೆಯಿಂದ ಕಾರ್ಯನಿರ್ವಹಿಸುವ ಮೂಲಕ ಪರೀಕ್ಷೆ ಯಶಸ್ವಿಗೊಳಿಸಲಿದ್ದಾರೆ ಎಂದು ಹೇಳಿದರು.ಶಿಕ್ಷಣ ಸಂಯೋಜಕರಾದ ಪ್ರೀತಮ್ ನಿಡಸೋಸಿ, ರಾಜೇಶ ಗಸ್ತಿ ಮತ್ತಿತರರು ಉಪಸ್ಥಿತರಿದ್ದರು.