ಸಾರಾಂಶ
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಂಭವ ಇದ್ದು, ಡೆಂಘೀ ಜ್ವರ ಉಲ್ಬಣಗೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಈಗಿನಿಂದಲೆ ಡೆಂಘೀ ನಿಯಂತ್ರಣಕ್ಕೆ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳುವಂತೆ ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ.ಸುಧಾಕರ್ ತಿಳಿಸಿದರು.ಇಲ್ಲಿನ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ 2023-24ನೇ ಸಾಲಿನ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು. ಡೆಂಘೀ ಉಲ್ಬಣ ಸಾಧ್ಯತೆ
ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಡೆಂಘೀ ಮತ್ತಷ್ಟು ಉಲ್ಬಣ ಆಗಲಿರುವ ಸಾಧ್ಯತೆ ಇರುವುದರಿಂದ ಜಿಲ್ಲೆಯಲ್ಲಿ ಡೆಂಘೀ ನಿಯಂತ್ರಣ ಕಾರ್ಯಕ್ರಮವನ್ನು ವಾರ್ಡ್ ಮತ್ತು ಗ್ರಾಮ ಮಟ್ಟದಲ್ಲಿ ಆಂದೋಲನದ ರೀತಿ ಕೈಗೊಳ್ಳಲು ಅಧಿಕಾರಿಗಳ ತಂಡ ನಿಯೋಜಿಸಬೇಕು. ಸಮುದಾಯದೊಂದಿಗೆ ಸೇರಿ ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಾಶಪಡಿಸುವುದು ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು.ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ
ಡೆಂಘೀ ದೃಢ ಆಗಿರುವ ಪ್ರಕರಣಗಳಲ್ಲಿ ಸಾವು ಸಂಭವಿಸದಂತೆ ನಿಗಾವಹಿಸಿ ಸೂಕ್ತ ಚಿಕಿತ್ಸಾ ಕಾರ್ಯಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಜೂನ್ ಮಾಹೆಯಲ್ಲಿ 31 ಡೆಂಘೀ ಪ್ರಕರಣಗಳು ದಾಖಲಾಗಿದ್ದವು. ಜುಲೈ 9ಕ್ಕೆ 101 ಪ್ರಕರಣಗಳು ದಾಖಲಾಗಿವೆ. ಮುಂದಿನ ದಿನಗಳಲ್ಲಿ ಈ ಪ್ರಕರಣಗಳು ಹೆಚ್ಚಾಗದಂತೆ ಸ್ವಚ್ಛತೆಯ ಮುನ್ನೆಚ್ಚರಿಕೆ ಕ್ರಮಗಳು ಕೈಗೊಳ್ಳಬೇಕು ಎಂದರು.ಪ್ರಸ್ತುತ ಡೆಂಘೀ ಪ್ರಕರಣಗಳು ಚಿಕ್ಕಬಳ್ಳಾಪುರ 28, ಶಿಡ್ಲಘಟ್ಟ 24, ಚಿಂತಾಮಣಿ 17, ಬಾಗೇಪಲ್ಲಿ 16, ಗೌರಿಬಿದನೂರು 12, ಗುಡಿಬಂಡೆ 4 ಪ್ರಕರಣಗಳು ದಾಖಲಾಗಿವೆ. ಬೆಳೆ ವಿಮೆ ಕೊಡಿಸಲು ಸೂಚನೆ
ಈ ವರ್ಷ ವಾಡಿಕೆಗಿಂತ ಶೇ28.2 ಅಧಿಕ ಮಳೆಯಾಗಿದೆ. ಆದ್ದರಿಂದ ಈ ವರೆಗೆ ಶೇ 40 ರಷ್ಟು ಬಿತ್ತನೆ ಕಾರ್ಯ ಈಗಾಗಲೇ ಆಗಿದೆ. ಬಿತ್ತನೆ ಬೀಜ ಮತ್ತು ರಸಗೊಬ್ಬರಗಳಿಗೆ ಜಿಲ್ಲೆಯಲ್ಲಿ ಕೊರತೆ ಇಲ್ಲ. ಈ ಹಿಂದಿನ ಸಾಲಿನಲ್ಲಿ 23 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಬೆಳೆ ವಿಮೆ ಮಾಡಿಸಿದ ರೈತರಿಗೆ ಬೆಳೆ ವಿಮೆ ಈವರೆಗೆ ಬಂದಿಲ್ಲ. ಇದನ್ನು ಪರಿಶೀಲಿಸಿ ಬೆಳೆ ವಿಮೆ ಕೊಡಿಸುವ ಕಾರ್ಯ ಆಗಬೇಕು ಎಂದು ಕೃಷಿ ಅಧಿಕಾರಿಗಳಿಗೆ ತಿಳಿಸಿದರು. ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯ 1640 ಗ್ರಾಮಗಳಿಗೆ ಕಾರ್ಯಾತ್ಮಕ ನಳ ನೀರು ಸಂಪರ್ಕ ಕಲ್ಪಿಸುವ ಕಾಮಗಾರಿಗಳಿಗೆ ಟೆಂಡರ್ ಕರೆದು 1599 ಕಾರ್ಯಾದೇಶ ನೀಡಲಾಗಿದೆ. 1222 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಸಚಿವರು, 546 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅವುಗಳ ಸ್ಥಿತಿಗತಿಗಳ ಕುರಿತು ಮಾಹಿತಿಯನ್ನು ನೀಡುವಂತೆ ಗ್ರಾಮೀಣ ಕುಡಿಯುವ ನೀರು ಇಲಾಖೆಯವರಿಗೆ ಸೂಚಿಸಿದರು.ಡೆಂಘೀ ಕುರಿತ ಭಿತ್ತಿಚಿತ್ರ ಬಿಡುಗಡೆಇದೇ ವೇಳೆ ಡೆಂಘೀ ಜ್ವರದ ಮುನ್ನೆಚ್ಚರಿಕಾ ಬಿತ್ತಿ ಚಿತ್ರಗಳನ್ನು ಸಚಿವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಶಾಸಕರಾದ ಎಸ್.ಎನ್.ಸುಬ್ಬಾರೆಡ್ಡಿ, ಪ್ರದೀಪ್ ಈಶ್ವರ್, ರವಿಕುಮಾರ್, ವಿಧಾನ ಪರಿಷತ್ತಿನ ಸದಸ್ಯರಾದ ಅನಿಲ್ ಕುಮಾರ್, ಡಿ.ಟಿ. ಶ್ರೀನಿವಾಸ್, ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಅರಣ್ಯ ಸಂರಕ್ಷಣಾಧಿಕಾರಿ ರಮೇಶ್, ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಎಚ್. ಅಶ್ವಿನ್, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ, ತಹಸೀಲ್ದಾರ್ ಅನಿಲ್ ಇದ್ದರು.
ಸಿಕೆಬಿ-5 ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸಚಿವ ಡಾ.ಎಂ.ಸಿ.ಸುಧಾಕರ್ ಡೆಂಘೀ ಜ್ವರದ ಮುನ್ನೆಚ್ಚರಿಕಾ ಬಿತ್ತಿ ಪತ್ರಗಳನ್ನು ಬಿಡುಗಡೆ ಮಾಡಿದರು.