ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಮತ್ತೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು/ಬೆಳ್ತಂಗಡಿಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಮತ್ತೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ರಾಯಚೂರು ಜಿಲ್ಲೆ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಗೆ ಅವರು ಗಡಿಪಾರಾಗಿದ್ದಾರೆ. ಈ ಮಧ್ಯೆ, ಬೆಳ್ತಂಗಡಿ ಪೊಲೀಸರು ಗುರುವಾರ ನೋಟಿಸ್‌ ನೀಡಲು ಉಜಿರೆಯ ಅವರ ಮನೆಗೆ ತೆರಳಿದಾಗ ಅವರು ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.

ಸೆ.18ರಂದು ಪುತ್ತೂರು ಎಸಿ ಸ್ಟೆಲ್ಲಾ ವರ್ಗೀಸ್ ಅವರು ತಿಮರೋಡಿಯನ್ನು 2025ರ ಸೆ.18ರಿಂದ 2026ರ ಸೆ.17ರವರೆಗೆ ಒಂದು ವರ್ಷದ ಅವಧಿಗೆ ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು. ಆದರೆ, ಈ ಗಡಿಪಾರು ಆದೇಶ ರದ್ದುಗೊಳಿಸುವಂತೆ ಕೋರಿ ತಿಮರೋಡಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್, ಈ ಗಡಿಪಾರು ಆದೇಶವನ್ನು ರದ್ದುಗೊಳಿಸಿ, ಕಾನೂನು ಪ್ರಕಾರ ಹೊಸ ಪ್ರಕ್ರಿಯೆ ನಡೆಸಿ ಆದೇಶ ಮಾಡುವಂತೆ ಸೂಚಿಸಿತ್ತು. ಹೈಕೋರ್ಟ್‌ ಸೂಚನೆಯಂತೆ, ಪುತ್ತೂರು ಎಸಿ ಕೆಲವು ಕಾನೂನಾತ್ಮಕ ಪ್ರಕ್ರಿಯೆಗಳ ಅಡಿಯಲ್ಲಿ ತಿಮರೋಡಿ ಗಡಿಪಾರು ಪ್ರಕ್ರಿಯೆಯನ್ನು ಮತ್ತೆ ಆರಂಭಿಸಿ, ಡಿ.7ರಂದು ಗಡಿಪಾರು ನೋಟಿಸ್ ನೀಡಿದ್ದರು. ಅದಕ್ಕೆ ಆಕ್ಷೇಪಣೆ ಸಲ್ಲಿಸಿದ್ದ ತಿಮರೋಡಿ, ತಮ್ಮ ವಕೀಲರ ಮೂಲಕ ಉಪ ವಿಭಾಗಾಧಿಕಾರಿ ಎದುರು ವಾದ ಮಂಡಿಸಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ ನಂತರ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ತಿಮರೋಡಿ ಗಡೀಪಾರಿಗೆ ಸೂಕ್ತ ಕಾರಣಗಳನ್ನು ನೀಡಿ ವರದಿ ಸಲ್ಲಿಸಿದ್ದರು. ಈ ವರದಿ ಆಧರಿಸಿ, ತಿಮರೋಡಿ ವಿರುದ್ಧ ಎರಡನೇ ಬಾರಿಗೆ ಗಡಿಪಾರು ಆದೇಶವನ್ನು ಹೊರಡಿಸಲಾಗಿದೆ. ಈ ಹಿಂದೆ ದಾಖಲಾಗಿದ್ದ ಪ್ರಕರಣಗಳ ಜೊತೆಗೆ, ಹಾಲಿ ಇರುವ ಕೆಲವು ಪ್ರಕರಣಗಳನ್ನು ಸಹ ಗಡಿಪಾರು ಆದೇಶದಲ್ಲಿ ಉಲ್ಲೇಖಿಸಲಾಗಿದೆ.