ಚಿಕ್ಕಮಗಳೂರುದತ್ತಜಯಂತಿ-2026 ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಿದ್ಧತೆಯನ್ನು ಚುರುಕುಗೊಳಿಸಿದ್ದು, ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ ಗಳು ಶ್ರೀ ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಹಾಗೂ ಪೀಠದ ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಧಿಕಾರಿಗಳಿಗೆ ಅಗತ್ಯ ಸಲಹೆ ಮತ್ತು ಸೂಚನೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುದತ್ತಜಯಂತಿ-2026 ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಿದ್ಧತೆಯನ್ನು ಚುರುಕುಗೊಳಿಸಿದ್ದು, ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ ಗಳು ಶ್ರೀ ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಹಾಗೂ ಪೀಠದ ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ದತ್ತಜಯಂತಿ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು, ದತ್ತಮಾಲಾಧಾರಿಗಳು ಹಾಗೂ ಸಾರ್ವಜನಿಕರು ಆಗಮಿಸುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಪೂರ್ವಸಿದ್ಧತೆ ಕುರಿತು ಅಧಿಕಾರಿಗಳು ಸ್ಥಳದಲ್ಲೇ ಪರಿಶೀಲನೆ ನಡೆಸಿ, ಸಂಬಂಧ ಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಅಗತ್ಯ ಸಲಹೆ ಮತ್ತು ಸೂಚನೆ ನೀಡಿದರು.ಪೀಠದ ಆವರಣ, ಪ್ರವೇಶ ಮತ್ತು ನಿರ್ಗಮನ ಮಾರ್ಗಗಳು, ವಾಹನಗಳ ಸಂಚಾರ ವ್ಯವಸ್ಥೆ, ಪಾರ್ಕಿಂಗ್ ಸ್ಥಳಗಳು, ಕುಡಿ ಯುವ ನೀರು, ಸ್ವಚ್ಛತೆ ಹಾಗೂ ಶೌಚಾಲಯ ವ್ಯವಸ್ಥೆಗಳ ಕುರಿತು ಪರಿಶೀಲಿಸಲಾಯಿತು. ಭಕ್ತರಿಗೆ ಯಾವುದೇ ರೀತಿ ತೊಂದರೆ ಯಾಗದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ಹಾಗೂ ಜನಸಂದಣಿ ನಿಯಂತ್ರಣಕ್ಕೆ ಸೂಕ್ತ ವ್ಯವಸ್ಥೆ ಮಾಡಲು ಸೂಚಿಸಲಾಯಿತು.ಜಿಲ್ಲಾ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮಾ ಭದ್ರತಾ ವ್ಯವಸ್ಥೆ ಮತ್ತು ಪೊಲೀಸ್ ಬಂದೋಬಸ್ತ್ ಕುರಿತು ಪರಿಶೀಲನೆ ನಡೆಸಿದರು. ಪೀಠಕ್ಕೆ ತೆರಳುವ ಮಾರ್ಗಗಳಲ್ಲಿ ವಾಹನ ದಟ್ಟಣೆ ಉಂಟಾಗದಂತೆ ಸಂಚಾರ ನಿಯಂತ್ರಣ ಕ್ರಮ ಗಳನ್ನು ರೂಪಿಸುವುದು, ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆ, ಜನಸಂದಣಿ ನಿರ್ವಹಣೆ ಹಾಗೂ ತುರ್ತು ಸಂದರ್ಭಗಳನ್ನು ಎದುರಿಸಲು ಅಗತ್ಯ ಮುನ್ನೆಚ್ಚರಿಕೆ ವಹಿಸುವ ಕುರಿತು ಚರ್ಚಿಸಲಾಯಿತು.ಚಿಕ್ಕಮಗಳೂರು ತಹಸೀಲ್ದಾರ್ ರೇಷ್ಮಾ ಶೆಟ್ಟಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸ್ಥಳ ಪರಿಶೀಲನೆಯಲ್ಲಿ ಭಾಗವಹಿಸಿದ್ದರು. ಆರೋಗ್ಯ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ನಗರಸಭೆ, ಅಗ್ನಿಶಾಮಕ ಹಾಗೂ ಇತರ ಸಂಬಂಧ ಪಟ್ಟ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ತಮಗೆ ವಹಿಸಿರುವ ಜವಾಬ್ದಾರಿ ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಸೂಚಿಸಲಾಯಿತು.ದತ್ತಜಯಂತಿ ಸಂದರ್ಭದಲ್ಲಿ ಭಕ್ತರಿಗೆ ಅಗತ್ಯ ಸೌಲಭ್ಯ ಒದಗಿಸುವ ಜತೆಗೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತ ಎಲ್ಲ ರೀತಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದೆ. ಕಾರ್ಯಕ್ರಮ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ವಿಲ್ಲದಂತೆ ಶಾಂತಿಯುತವಾಗಿ ಮತ್ತು ಸುಗಮವಾಗಿ ನಡೆಯಲು ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಕೊಳ್ಳುವಂತೆ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಸೂಚನೆ ನೀಡಿದರು.