ಸಾಸ್ವಿಹಳ್ಳಿ ಗ್ರಾಮಕ್ಕೆ ಸ್ಮಶಾನ ಭೂಮಿ ಮಂಜೂರಿಯಾಗಿದ್ದು, ಸ್ಮಶಾನಕ್ಕೆ ಹೋಗುವ ದಾರಿಯಲ್ಲಿ ನೀರು ನಿಂತು ತೊಂದರೆಯಾಗುತ್ತಿದೆ. ಈ ರಸ್ತೆ ಎತ್ತರಗೊಳಿಸಿ, ಬ್ರಿಡ್ಜ್ ನಿರ್ಮಿಸಬೇಕು ಅಥವಾ ಸಾಧ್ಯವಾದರೆ ಸ್ಮಶಾನಕ್ಕೆ ಬೇರೆ ಜಾಗ ಗುರುತಿಸುವಂತೆ ಗ್ರಾಮಸ್ಥರು ಮನವಿ ಮಾಡಿದರು.

ಅಣ್ಣಿಗೇರಿ:

ಜಿಲ್ಲಾಧಿಕಾರಿ ಸ್ನೇಹಲ್ ಆರ್. ಬುಧವಾರ ತಹಸೀಲ್ದಾರ್ ಕಚೇರಿಗೆ ಭೇಟಿ ನೀಡಿ, ಕಂದಾಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಂದ ಇಲಾಖಾ ಕಾರ್ಯಕ್ರಮಗಳ ಪ್ರಗತಿ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಸಾಸ್ವಿಹಳ್ಳಿ ಗ್ರಾಮಕ್ಕೆ ಸ್ಮಶಾನ ಭೂಮಿ ಮಂಜೂರಿಯಾಗಿದ್ದು, ಸ್ಮಶಾನಕ್ಕೆ ಹೋಗುವ ದಾರಿಯಲ್ಲಿ ನೀರು ನಿಂತು ತೊಂದರೆಯಾಗುತ್ತಿದೆ. ಈ ರಸ್ತೆ ಎತ್ತರಗೊಳಿಸಿ, ಬ್ರಿಡ್ಜ್ ನಿರ್ಮಿಸಬೇಕು ಅಥವಾ ಸಾಧ್ಯವಾದರೆ ಸ್ಮಶಾನಕ್ಕೆ ಬೇರೆ ಜಾಗ ಗುರುತಿಸುವಂತೆ ಗ್ರಾಮಸ್ಥರು ಮನವಿ ಮಾಡಿದರು.

ಈ ಕುರಿತು ತಕ್ಷಣ ಸ್ಥಳ ಪರಿಶೀಲನೆ ನಡೆಸಿ, ರಸ್ತೆ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿಪಡಿಸಲು ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಅಣ್ಣಿಗೇರಿ ಪಟ್ಟಣದ ನಿವಾಸಿಗಳು ಪಟ್ಟಣದ ರಸ್ತೆ, ಒಳಚರಂಡಿ ಹಾಗೂ ಉದ್ಯಾನವನ ಉನ್ನತೀಕರಿಸಬೇಕೆಂದು ಅರ್ಜಿ ಸಲ್ಲಿಸಿದರು. ರೈತ ಮುಖಂಡರು ಬೆಳೆ ಪರಿಹಾರ, ಬೆಳೆ ವಿಮೆ, ಗ್ರಾಮೀಣ ರಸ್ತೆ ದುರಸ್ತಿ ಹಾಗೂ ಬೆಂಬಲ ಬೆಲೆ ಯೋಜನೆಯಡಿ ತೆರೆದಿರುವ ಖರೀದಿ ಕೇಂದ್ರಗಳ ಕಾರ್ಯನಿರ್ವಹಣೆ ಬಗ್ಗೆ ಮನವಿ ಸಲ್ಲಿಸಿ, ಸೂಕ್ತ ಕ್ರಮಕೈಗೊಳ್ಳಲು ವಿನಂತಿಸಿದರು.

ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡುವುದು ಮುಖ್ಯವಾಗಿದೆ. ಗ್ರಾಪಂ ಹಾಗೂ ಪಟ್ಟಣಗಳಲ್ಲಿ ನಿಯಮಿತವಾಗಿ ಸ್ವಚ್ಛತಾ ಅಭಿಯಾನ ನಡೆಸಬೇಕು. ಒಳಚರಂಡಿ ವ್ಯವಸ್ಥೆ, ಕಸದ ವಿಲೇವಾರಿ ಮತ್ತು ಕುಡಿಯುವ ನೀರಿನ ಸ್ವಚ್ಛತೆ ಬಗ್ಗೆ ವಿಶೇಷ ಗಮನ ಹರಿಸಬೇಕು ಎಂದು ತಾಪಂ ಇಒ ಹಾಗೂ ಪುರಸಭೆ ಮುಖ್ಯಾಧಿಕಾರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ತಹಸೀಲ್ದಾರ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಂದ ತೆರಿಗೆ ವಸೂಲಾತಿ ಪ್ರಗತಿ, ಬಾಕಿ ಪ್ರಕರಣ ಮತ್ತು ಆನ್‍ಲೈನ್ ಸೇವೆಗಳ ಕುರಿತು ಮಾಹಿತಿ ಪಡೆದ ಜಿಲ್ಲಾಧಿಕಾರಿ, ತೆರಿಗೆ ಸಂಗ್ರಹಣೆಯಲ್ಲಿ ಪಾರದರ್ಶಕತೆ ಮತ್ತು ವೇಗ ಹೆಚ್ಚಿಸಲು ತಿಳಿಸಿದರು.

ಈ ವೇಳೆ ಪ್ರೊಬೆಷನರ್ ಐಎಎಸ್ ಅಧಿಕಾರಿ ರಿತಿಕಾ ವರ್ಮಾ, ತಹಸೀಲ್ದಾರ್‌ ಎಂ.ಜಿ. ದಾಸಪ್ಪನವರ, ತಾಪಂ ಇಒ ಇ.ಆರ್. ಬಡೇಖಾನ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಪ್ರಿಯದರ್ಶಿನಿ ಹಿರೇಮಠ, ಪುರಸಭೆ ಮುಖ್ಯಾಧಿಕಾರಿ ವೈ.ಜಿ. ಗದ್ದಿಗೌಡರ, ಕಂದಾಯ ನಿರೀಕ್ಷಕ ರೀಷಿ ಸಾರಂಗಿ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಇದ್ದರು.