ಚುನಾವಣಾ ಪೂರ್ವಸಿದ್ಧತೆ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಸಮರ್ಪಕವಾಗಿ ಕೈಗೊಳ್ಳುವ ಉದ್ದೇಶದಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಗುರುವಾರ ಹಾನಗಲ್ಲ ತಾಲೂಕಿನ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಾವೇರಿ: ಚುನಾವಣಾ ಪೂರ್ವಸಿದ್ಧತೆ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಸಮರ್ಪಕವಾಗಿ ಕೈಗೊಳ್ಳುವ ಉದ್ದೇಶದಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಗುರುವಾರ ಹಾನಗಲ್ಲ ತಾಲೂಕಿನ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದೇ ಸಂದರ್ಭದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026ರ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ಬಾಕಿ ಇರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಸೂಚಿಸಿದರು.

ಮತಗಟ್ಟೆಗಳಿಗೆ ಭೇಟಿ: ಹಾನಗಲ್ಲ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಗುಣಮಟ್ಟ ಮತ್ತು ನಿಖರತೆಯನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾಧಿಕಾರಿಗಳು ಮತಗಟ್ಟೆಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕೊಪ್ಪರಸಿಕೊಪ್ಪ ಗ್ರಾಮದ ಮತಗಟ್ಟೆ, ಶಿಗಿಹಳ್ಳಿ ಗ್ರಾಮದ ಮತಗಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮತದಾರರ ಪಟ್ಟಿಯಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡುವ ಸಂಬಂಧ ಸ್ವೀಕೃತವಾಗಿರುವ ನಮೂನೆ-8ರ ಅರ್ಜಿಗಳ ನೈಜತೆಯನ್ನು ಸ್ಥಳದಲ್ಲಿಯೇ ಪರಿಶೀಲಿಸಿ, ಅರ್ಜಿಗಳ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಮತದಾರರ ಪಟ್ಟಿಯಲ್ಲಿನ ವಿವರಗಳ ನಿಖರತೆಯನ್ನು ಖಚಿತಪಡಿಸಿಕೊಳ್ಳಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಹಾನಗಲ್ಲ ವಿಧಾನಸಭಾ ಮತಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಹಾನಗಲ್ಲ ತಹಶೀಲ್ದಾರರು ಹಾಗೂ ಗ್ರೇಡ್-2 ಹೆಚ್ಚುವರಿ ಸಹಾಯಕ ಮತದಾರರ ನೋಂದಣಾಧಿಕಾರಿಗಳು ಉಪಸ್ಥಿತರಿದ್ದರು.

ಬಿಎಲ್‌ಒಗಳ ಪ್ರಗತಿ ಪರಿಶೀಲನಾ ಸಭೆ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026ರ ಕಾರ್ಯವನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಹಾನಗಲ್ಲ ತಹಸೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಸಭೆಯಲ್ಲಿ ಹಾನಗಲ್ಲ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಪ್ರಗತಿ, ಕ್ಷೇತ್ರಮಟ್ಟದ ಪರಿಶೀಲನೆ ಹಾಗೂ ಬಾಕಿ ಇರುವ ಅರ್ಜಿಗಳ ವಿಲೇವಾರಿ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ಮತದಾರರ ಪಟ್ಟಿಗೆ ಹೊಸ ಮತದಾರರ ಹೆಸರು ಸೇರ್ಪಡೆ, ಹೆಸರುಗಳನ್ನು ತೆಗೆದುಹಾಕುವುದು ಹಾಗೂ ಮತದಾರರ ವಿವರಗಳಲ್ಲಿ ತಿದ್ದುಪಡಿ ಮಾಡುವ ಸಂಬಂಧ ಸ್ವೀಕೃತವಾಗಿರುವ ನಮೂನೆ-6, 7 ಮತ್ತು 8ರ ಅರ್ಜಿಗಳ ಸ್ಥಿತಿಗತಿಗಳನ್ನು ಪರಿಶೀಲಿಸಲಾಯಿತು.

ಕ್ಷೇತ್ರಮಟ್ಟದಲ್ಲಿ ಪರಿಶೀಲನೆ ನಡೆಸಿ ಅರ್ಜಿಗಳ ನೈಜತೆಯನ್ನು ದೃಢಪಡಿಸುವ ಕಾರ್ಯವನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಬಿಎಲ್‌ಒಗಳ ಲಾಗಿನ್‌ನಲ್ಲಿ ಬಾಕಿ ಉಳಿದಿರುವ ನಮೂನೆ-6, 7 ಮತ್ತು 8ರ ಅರ್ಜಿಗಳನ್ನು ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಂಡು ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಮತದಾರರ ಛಾಯಾಚಿತ್ರಗಳ ಗುಣಮಟ್ಟದ ಪರಿಶೀಲನೆಗೂ ಆದ್ಯತೆ ನೀಡಬೇಕು. ಮತದಾರರ ಪಟ್ಟಿಯಲ್ಲಿನ ವಿವರಗಳು ಹಾಗೂ ಛಾಯಾಚಿತ್ರಗಳು ನಿಖರವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಯಾವುದೇ ಅರ್ಜಿಗಳು ಅನಗತ್ಯವಾಗಿ ಬಾಕಿ ಉಳಿಯದಂತೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಬಿಎಲ್‌ಒಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ನಿಖರತೆಯನ್ನು ಕಾಪಾಡಿಕೊಳ್ಳುವುದರ ಜೊತೆಗೆ, ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬವಾಗದಂತೆ ಕ್ರಮ ವಹಿಸಬೇಕು. ಕ್ಷೇತ್ರಮಟ್ಟದಲ್ಲಿ ಎದುರಾಗುವ ಸಮಸ್ಯೆಗಳನ್ನು ಗುರುತಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವ ಮೂಲಕ ಪರಿಷ್ಕರಣೆ ಕಾರ್ಯವನ್ನು ಸಮರ್ಪಕವಾಗಿ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಸಭೆಯಲ್ಲಿ ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಹಾನಗಲ್ಲ ತಹಶೀಲ್ದಾರರು, ಹೆಚ್ಚುವರಿ ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪುರಸಭೆಯ ಮುಖ್ಯಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.