ಗುಲಾಬಿ ನೀಡಿ ಸ್ವಾಗತಿಸಿದ ಜಿಲ್ಲಾಧಿಕಾರಿ ವೆಂಕಟೇಶ್

| Published : Mar 22 2025, 02:03 AM IST

ಗುಲಾಬಿ ನೀಡಿ ಸ್ವಾಗತಿಸಿದ ಜಿಲ್ಲಾಧಿಕಾರಿ ವೆಂಕಟೇಶ್
Share this Article
  • FB
  • TW
  • Linkdin
  • Email

ಸಾರಾಂಶ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಆಗಮಿಸಿದ ವಿದ್ಯಾರ್ಥಿಗಳಿಗೆ ಚಿತ್ರದುರ್ಗದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೇಂದ್ರದಲ್ಲಿ ಜಿಲ್ಲಾಧಿಕಾರಿ ವೆಂಕಟೇಶ್ ಗುಲಾಬಿ ನೀಡಿ ಸ್ವಾಗತಿಸಿ ಶುಭ ಹಾರೈಸಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಬಿರು ಬೇಸಗೆಯ ನಡುವೆ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ ಶುಕ್ರವಾರ ಜಿಲ್ಲೆಯಾದ್ಯಂತ ಆರಂಭಗೊಂಡಿದ್ದು, ಜಿಲ್ಲಾಧಿಕಾರಿ ಟಿ.ವೆಂಕಟೇಶ್ ವಿನೂತನ ಶೈಲಿಯಲ್ಲಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.

ಚಿತ್ರದುರ್ಗ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ) ವಿಭಾಗದಲ್ಲಿ ಸ್ಥಾಪಿಸಿರುವ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ಆಗಮಿಸಿದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಗುಲಾಬಿ ಹೂವು ಹಾಗೂ ಸಿಹಿ ನೀಡಿ ಸ್ವಾಗತಿಸಿ, ಶುಭ ಹಾರೈಸಿದರು.

ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು, ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿ ಜೀವನದ ಒಂದು ಪ್ರಮುಖ ಘಟ್ಟವಾಗಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಮಾರ್ಚ್ 21 ರಿಂದ ಪ್ರಾರಂಭವಾಗಿದ್ದು, ಏಪ್ರಿಲ್ 4 ರವರೆಗೆ ನಡೆಯಲಿದೆ. ಪರೀಕ್ಷೆಯನ್ನು ಹಬ್ಬದಂತೆ ಆಚರಣೆ ಮಾಡಬೇಕು. ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಯಾವುದೇ ಭಯಭೀತಿ ಇಲ್ಲದೇ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಲಾಗುತ್ತಿದೆ ಎಂದರು.

ಈ ಬಾರಿ ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಕಳೆದ 6 ತಿಂಗಳಿಂದಲೂ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಹಲವು ಪ್ರಯತ್ನಗಳನ್ನು ನಡೆಸಲಾಗಿದೆ. ವಿದ್ಯಾರ್ಥಿಗಳು ಉತ್ಸಾಹ ಮತ್ತು ಆತ್ಮ ವಿಶ್ವಾಸದಿಂದ ಪರೀಕ್ಷೆ ಬರೆಯಬೇಕು. ಬಿರು ಬೇಸಗೆಯ ಎದುರಿಸಲು ಕುಡಿವ ನೀರು ಗಾಳಿ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಪರೀಕ್ಷಾ ಕೇಂದ್ರದಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿ, ಸಂತೋಷದಿಂದ ವಿದ್ಯಾರ್ಥಿಗಳನ್ನು ಸ್ವಾಗತಿಸಿ, ಶುಭ ಹಾರೈಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.

ಈ ವೇಳೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಸೇರಿದಂತೆ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ಇದ್ದರು.

943 ವಿದ್ಯಾರ್ಥಿಗಳು ಗೈರು

ಶುಕ್ರವಾರ ಆರಂಭಗೊಂಡ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ-1ರ ಮೊದಲ ದಿನದ ಕನ್ನಡ ವಿಷಯದ ಪರೀಕ್ಷೆಗೆ ಒಟ್ಟು 22,229 ವಿದ್ಯಾರ್ಥಿಗಳು ಹಾಜರಾಗಿದ್ದು, 943 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಜಿಲ್ಲೆಯಲ್ಲಿ ಕನ್ನಡ ವಿಷಯದ ಪರೀಕ್ಷೆಗೆ 23,172 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ ಚಳ್ಳಕೆರೆ ತಾಲೂಕಿನಲ್ಲಿ 4,911 ವಿದ್ಯಾರ್ಥಿಗಳು, ಚಿತ್ರದುರ್ಗ-6,276, ಹಿರಿಯೂರು-3,389, ಹೊಳಲ್ಕೆರೆ-2,596, ಹೊಸದುರ್ಗ-2,865 ಹಾಗೂ ಮೊಳಕಾಲ್ಮುರು-2,192 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 22,229 ವಿದ್ಯಾರ್ಥಿಗಳು ಹಾಜರಾಗಿ, 943 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಜಿಲ್ಲೆಯ 82 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ಸುಗಮವಾಗಿ ನಡೆಯಿತು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ತಿಳಿಸಿದ್ದಾರೆ.