ಹೊಸಕೋಟೆ: ಮಹಿಳೆಯರ ಸುರಕ್ಷತೆ ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಅಲ್ಲದೆ ಅತ್ಯಾಚಾರಿಗಳನ್ನು ಬೆಂಬಲಿಸುವ ಪ್ರಲ್ಹಾದ್ ಜೋಷಿಯನ್ನು ಹಾಗೂ ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮಹಿಳಾ ವಿದ್ಯಾರ್ಥಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾಡಾಡಿದ ಸಂಸದೆ ಕಂಗನಾ ರಾಣಾವತ್ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಿ.ಸಿ.ಲಕ್ಷ್ಮಿ ಮಾತನಾಡಿ, ಮಹಿಳೆಯರ ಗೌರವ ಮತ್ತು ಸುರಕ್ಷತೆ ವಿಚಾರದಲ್ಲಿ ಕೇಂದ್ರ ಸರ್ಕಾರದ ಧೋರಣೆ ಖಂಡನೀಯ. ಮಹಿಳೆಯರ ಬಗ್ಗೆ ಕಾಳಜಿ ತೋರದವರಿಗೆ ಶಿಕ್ಷಣ ಸಚಿವರ ಸ್ಥಾನದಲ್ಲಿ ಮುಂದುವರಿಯಲು ನೈತಿಕತೆ ಇಲ್ಲ ಎಂದು ಟೀಕಿಸಿದರು.

ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಿಂದ ದೇಶದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಈ ಬೆಳವಣಿಗೆಗೆ ಕೇಂದ್ರ ಸರ್ಕಾರದ ವೈಫಲ್ಯವೇ ಕಾರಣವಾಗಿದ್ದು, ಶಿಕ್ಷಣ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸ ಕುಸಿದಿದೆ. ಇದರ ನಡುವೆ ನೀಟ್ ಅಕ್ರಮದ ವಿರುದ್ದ ಪ್ರತಿಭಟನೆ ಮಾಡುವ ಮಹಿಳಾ ಹೋರಾಟಗಾರರ ಬಗ್ಗೆ ನಟಿ ಕಂಗನಾ ರಣಾವತ್ ಅವಹೇಳನಕಾರಿ ಹೇಳಿಕೆ ನೀಡಿರುವುದು ಸರಿಯಲ್ಲ. ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ದೇಶಾದ್ಯಂತ ಕಾಂಗ್ರೆಸ್ ಹೋರಾಟ ನಡೆಸುತ್ತಿದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿಯೂ ನಿರಂತರ ಪ್ರತಿಭಟನೆ ನಡೆಯುತ್ತಿದೆ. ಸಚಿವ ಸ್ಥಾನಕ್ಕೆ ಪ್ರಹ್ಲಾದ್ ಜೋಶಿ ಹಾಗೂ ಸಂಸದೆ ಸ್ಥಾನಕ್ಕೆ ಕಂಗನಾ ರಣಾವತ್ ರಾಜೀನಾಮೆ ನೀಡುವವರೆಗೆ ಹಾಗೂ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವವರೆಗೆ ಹೋರಾಟವನ್ನು ಹಿಂಪಡೆಯುವುದಿಲ್ಲ ಎಂದು ಎಚ್ಚರಿಸಿ, ತಹಸೀಲ್ದಾರ್ ಶೀಥಲ್ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಟಿಎಪಿಸಿಎಂಎಸ್ ನಿರ್ದೇಶಕಿ ಪಾರ್ವತಮ್ಮ, ಟೌನ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಹೇಮಲತಾ, ಅನಗೊಂಡನಹಳ್ಳಿ–ಜಡಿಗೆನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಲತಾರೆಡ್ಡಿ, ಮಾಜಿ ಪುರಸಭೆ ಅಧ್ಯಕ್ಷೆ ಶೀಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯೆ ರಮಾ ನಾಗೇಶ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯೆ ಆರತಿ, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಪ್ರತಿಭಾ, ಮಹಿಳಾ ಕಾಂಗ್ರೆಸ್ ಸದಸ್ಯರಾದ ಲಕ್ಷ್ಮೀ, ಪದ್ಮ, ವಿನುತ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಫೋಟೋ: 31 ಹೆಚ್‌ಎಸ್ ಕೆ 1


ಹೊಸಕೋಟೆಯ ತಾಲೂಕು ಕಚೇರಿ ಎದುರು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಂಸದೆ ಕಂಗನಾ ರಣಾವತ್ ರಾಜೀನಾಮೆಗೆ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಡಿಸಿ ಲಕ್ಷ್ಮೀ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.