ಬಸವಣ್ಣನವರ ಭಾವನೆಗಳಿಗೆ ಧಕ್ಕೆ ತರುವಂತಹ ಬರಹಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಸವಣ್ಣನವರ ಭಾವಚಿತ್ರ ಹಾಗೂ ಅವರ ತತ್ವಾದರ್ಶಗಳನ್ನು ಸ್ಮರಿಸುತ್ತಾ, ಸಮಾಜದ ಗೌರವ ಮತ್ತು ಧಾರ್ಮಿಕ ಭಾವನೆಗಳನ್ನು ಕಾಪಾಡುವಂತೆ ಸರ್ಕಾರಕ್ಕೆ ಒತ್ತಾಯ.
ಕನ್ನಡಪ್ರಭ ವಾರ್ತೆ ನಂಜನಗೂಡು
ಮಹಾಮಾನವತಾವಾದಿ, ವಿಶ್ವಗುರು ಬಸವಣ್ಣನವರ ಕುರಿತು ರಚಿಸಿರುವ ಕೃತಿಯಲ್ಲಿ ಹಾಗೂ ಲಿಂಗಾಯತ ಸಮಾಜವನ್ನು ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ ಎಂದು ಆರೋಪಿಸಿ, ಕೃತಿಕಾರ ರವಿ ಹಂಜ್ ಹಾಗೂ ಪ್ರಕಾಶಕ, ಪತ್ರಕರ್ತ ವಿಶ್ವೇಶ್ವರ ಭಟ್ ಅವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ವೀರಶೈವ ಲಿಂಗಾಯತ ಸಮಾಜ ಹಾಗೂ ವಿವಿಧ ಬಸವ ಸಂಘಟನೆಗಳ ವತಿಯಿಂದ ಮಂಗಳವಾರ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.ಪಟ್ಟಣದ ವಿವಿಧ ಭಾಗಗಳಿಂದ ಆಗಮಿಸಿದ್ದ ವೀರಶೈವ ಲಿಂಗಾಯತ ಸಮಾಜದ ಮುಖಂಡರು, ಬಸವಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡು, ಬಸವಣ್ಣನವರ ಭಾವನೆಗಳಿಗೆ ಧಕ್ಕೆ ತರುವಂತಹ ಬರಹಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಸವಣ್ಣನವರ ಭಾವಚಿತ್ರ ಹಾಗೂ ಅವರ ತತ್ವಾದರ್ಶಗಳನ್ನು ಸ್ಮರಿಸುತ್ತಾ, ಸಮಾಜದ ಗೌರವ ಮತ್ತು ಧಾರ್ಮಿಕ ಭಾವನೆಗಳನ್ನು ಕಾಪಾಡುವಂತೆ ಸರ್ಕಾರವನ್ನು ಒತ್ತಾಯಿಸಿದರು.
ಪ್ರತಿಭಟನಾಕಾರರು ಮಾತನಾಡಿ, 12ನೇ ಶತಮಾನದಲ್ಲಿಯೇ ಕಾಯಕವೇ ಕೈಲಾಸ, ದಾಸೋಹವೇ ಧರ್ಮ ಎಂಬ ಉದಾತ್ತ ತತ್ವಗಳನ್ನು ಜಗತ್ತಿಗೆ ಸಾರಿದ ಬಸವಣ್ಣನವರು ಜಾತಿ, ಧರ್ಮ, ವರ್ಗಗಳ ಭೇದವಿಲ್ಲದೆ ಸಕಲ ಜನರಿಗೂ ಒಳಿತನ್ನೇ ಬಯಸಿದ ಮಹಾನ್ ಮಾನವತಾವಾದಿಯಾಗಿದ್ದಾರೆ. ಅನುಭವ ಮಂಟಪದ ಮೂಲಕ ಸಮಾನತೆ, ಸಾಮಾಜಿಕ ನ್ಯಾಯ, ಮಹಿಳಾ ಸ್ವಾತಂತ್ರ್ಯ ಹಾಗೂ ಮಾನವೀಯ ಮೌಲ್ಯಗಳಿಗೆ ಮಹತ್ವ ನೀಡಿದ ಬಸವಣ್ಣನವರ ವಿಚಾರಧಾರೆಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ ಎಂದರು.ಇಂತಹ ಮಹಾನ್ ದಾರ್ಶನಿಕರ ಕುರಿತು ಅವಹೇಳನಕಾರಿಯಾಗಿ ಬರೆಯುವುದು ಹಾಗೂ ಲಿಂಗಾಯತ ಸಮಾಜವನ್ನು ಕೆಟ್ಟದಾಗಿ ಬಿಂಬಿಸುವುದು ಖಂಡನೀಯ. ಬಸವಣ್ಣನವರ ತತ್ವಗಳನ್ನು ಗೌರವಿಸುವ ಕೋಟ್ಯಂತರ ಅನುಯಾಯಿಗಳ ಭಾವನೆಗಳಿಗೆ ಇಂತಹ ಬರಹಗಳಿಂದ ನೋವುಂಟಾಗಿದೆ. ಸಮಾಜದ ಇತಿಹಾಸ, ಧಾರ್ಮಿಕ ನಂಬಿಕೆ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಗೌರವಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲೂ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು. ಕೃತಿಕಾರ ರವಿ ಹಂಜ್ ಹಾಗೂ ಪ್ರಕಾಶಕ, ಪತ್ರಕರ್ತ ವಿಶ್ವೇಶ್ವರ ಭಟ್ ವಿರುದ್ಧ ಸೂಕ್ತ ತನಿಖೆ ನಡೆಸಿ, ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಬೇಕು. ಅವರನ್ನು ರಾಜ್ಯದಿಂದ ಗಡಿಪಾರು ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿದರು. ಇಂತಹ ಕೃತ್ಯಗಳಿಗೆ ಬೆಂಬಲ ನೀಡುವವರ ವಿರುದ್ಧವೂ ಕಾನೂನಿನ ಚೌಕಟ್ಟಿನಲ್ಲಿ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಕುರಟ್ಟಿ ಮಠದ ನಾಗರಾಜ್ ಬುದ್ಧಿಯವರು, ಮಾದಪ್ಪ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರು ಭಾಗವಹಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿದರು.
ಮಹಾದೇವಪ್ಪ, ಕೆ.ಜಿ. ಮಹೇಶ್, ವಕೀಲ ಶಿವಬಸವ, ಉಮೇಶ್, ರಾಜು, ಎಂ. ಮಹದೇವಪ್ಪ, ಮಂಗಳ, ಸೋಮಶೇಖರ್, ಕೋಮಲ, ಎಚ್.ಪಿ. ಮಹದೇವಸ್ವಾಮಿ, ಶಿವನಾಗಪ್ಪ, ಕೀರ್ತಿ, ಗುರುಮಲ್ಲಪ್ಪ, ಆನಂದ್, ಪರಶಿವಮೂರ್ತಿ, ರಾಜು, ಮಾದಪ್ಪ, ಸಮಾಜದ ಮಕ್ಕಳ ಮನೆ ಸೋಮಶೇಖರ್ ಸೇರಿದಂತೆ ವೀರಶೈವ ಲಿಂಗಾಯತ ಸಮಾಜದ ಮುಖಂಡರು, ವಿವಿಧ ಬಸವ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಬಂಧುಗಳು ಭಾಗವಹಿಸಿದ್ದರು.ನಂತರ ಗ್ರೇಡ್ 2 ತಹಸೀಲ್ದಾರ್ ನಂದಕಿಶೋರ್ ಅವರಿಗೆ ಮನವಿ ಸಲ್ಲಿಸಲಾಯಿತು.