ಅರ್ಹರಿಗೆ ಕಾರ್ಮಿಕರ ಸೌಲಭ್ಯಗಳು ದೊರಕಬೇಕು-ಶಾಸಕ ಮಾನೆ

| Published : Feb 11 2025, 12:45 AM IST

ಸಾರಾಂಶ

ಕಾರ್ಮಿಕ ವರ್ಗಕ್ಕೆ ನ್ಯಾಯುತವಾಗಿ ಸಿಗಬೇಕಿರುವ ಸೌಲಭ್ಯಗಳು ಅರ್ಹರಿಗೆ ದೊರಕಬೇಕು. ಮಧ್ಯವರ್ತಿಗಳ ಹಾವಳಿಯಿಂದ ಯಾವುದೇ ಸಂದರ್ಭದಲ್ಲಿಯೂ ಅರ್ಹ ಕಾರ್ಮಿಕರಿಗೆ ಅನ್ಯಾಯವಾಗದಂತೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಸೂಚಿಸಿದರು.

ಹಾನಗಲ್ಲ: ಕಾರ್ಮಿಕ ವರ್ಗಕ್ಕೆ ನ್ಯಾಯುತವಾಗಿ ಸಿಗಬೇಕಿರುವ ಸೌಲಭ್ಯಗಳು ಅರ್ಹರಿಗೆ ದೊರಕಬೇಕು. ಮಧ್ಯವರ್ತಿಗಳ ಹಾವಳಿಯಿಂದ ಯಾವುದೇ ಸಂದರ್ಭದಲ್ಲಿಯೂ ಅರ್ಹ ಕಾರ್ಮಿಕರಿಗೆ ಅನ್ಯಾಯವಾಗದಂತೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಸೂಚಿಸಿದರು.

ಸೋಮವಾರ ಇಲ್ಲಿನ ಗುರುಭವನದಲ್ಲಿ ನಡೆದ ಸಮಾರಂಭದಲ್ಲಿ ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ೧೯ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಿಸಿ ಅವರು ಮಾತನಾಡಿದರು.

ಅರ್ಹರಿಗೆ ಯೋಜನೆ, ಸೌಲಭ್ಯಗಳು ಸಿಕ್ಕಾಗ ಮಾತ್ರ ಸರ್ಕಾರದ ಉದ್ದೇಶ ಸಾಕಾರಗೊಳ್ಳಲಿದೆ. ಕಾರ್ಮಿಕರ ಕಲ್ಯಾಣಕ್ಕೆ ಸರ್ಕಾರ ಬದ್ಧವಿದೆ. ಈ ನಿಟ್ಟಿನಲ್ಲಿ ಬೇರೆ, ಬೇರೆ ಯೋಜನೆ, ಕಾರ್ಯಕ್ರಮಗಳ ಮೂಲಕ ಕಾರ್ಮಿಕರ ಕುಟುಂಬಗಳಿಗೆ ಶಕ್ತಿ ತುಂಬುವ ಕೆಲಸ ಮಾಡಲಾಗುತ್ತಿದೆ. ತಾಲೂಕಿನಲ್ಲಿ ಅರ್ಹ ಕಾರ್ಮಿಕ ಫಲಾನುಭವಿಗಳಿಗೆ ಶೀಘ್ರದಲ್ಲಿ ರೋಡ್ ಕನ್ಸಸ್ಟ್ರಕ್ಷನ್ ಕಿಟ್, ಟೈಲ್ಸ್ ಕಿಟ್, ಗೌಂಡಿ ಕಿಟ್, ವೆಲ್ಡಿಂಗ್ ಕಿಟ್ ವಿತರಿಸುವ ಮೂಲಕ ಉತ್ತೇಜಿಸಲಾಗುವುದು ಎಂದು ತಿಳಿಸಿದ ಅವರು ತಂತ್ರಜ್ಞಾನ ಅತ್ಯಂತ ವೇಗವಾಗಿ ಬೆಳವಣಿಗೆ ಕಾಣುತ್ತಿರುವ ಈ ಸಂದರ್ಭದಲ್ಲಿ ಕಂಪ್ಯೂಟರ್ ಜ್ಞಾನ ಅತ್ಯಗತ್ಯವಾಗಿದೆ. ಕಂಪ್ಯೂಟರ್ ಶಿಕ್ಷಣ ಇಲ್ಲದವರನ್ನು ಅನಕ್ಷರಸ್ಥರು ಎಂದು ಹೇಳುವ ಕಾಲವಿದು. ಪ್ರತಿಯೊಬ್ಬರೂ ಸಹ ಪ್ರಾಥಮಿಕ ಕಂಪ್ಯೂಟರ್ ಶಿಕ್ಷಣ ಪಡೆದರೆ ಬದುಕನ್ನು ಕಟ್ಟಿಕೊಳ್ಳುವುದು ಸುಲಭವಾಗಲಿದೆ. ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟ್ಯಾಪ್‌ನಿಂದ ಭವಿಷ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸಹ ಅನುಕೂಲವಾಗಲಿದ್ದು, ಸೌಲಭ್ಯ ಸದ್ಬಳಕೆ ಮಾಡಿಕೊಂಡು ಶೈಕ್ಷಣಿಕ ಸಾಧನೆಯ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ಮಾಡಿದರು. ಕಾರ್ಮಿಕ ಇಲಾಖೆಯ ನಿರೀಕ್ಷಣಾಧಿಕಾರಿ ಮೀನಾಕ್ಷಿ ಸಿಂದಿಹಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಕಲಿಕಾ ಹಂತದಲ್ಲಿಯೇ ಕಂಪ್ಯೂಟರ್ ಶಿಕ್ಷಣ ಹಾಗೂ ತಾಂತ್ರಿಕ ಕೌಶಲ್ಯ ಬೆಳೆಸಿಕೊಂಡರೆ ಭವಿಷ್ಯದಲ್ಲಿ ಸಾಕಷ್ಟು ಉದ್ಯೋಗಾವಕಾಶಗಳು ಸಿಗಲಿವೆ. ಈ ನಿಟ್ಟಿನಲ್ಲಿ ಇಲಾಖೆಯಿಂದ ಕಾರ್ಮಿಕರ ಮಕ್ಕಳಿಗಾಗಿ ಸಾಕಷ್ಟು ಯೋಜನೆಗಳನ್ನು ರೂಪಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಅಗತ್ಯ ತರಬೇತಿ ಸಹ ನೀಡಲಾಗುತ್ತಿದೆ ಎಂದು ತಿಳಿಸಿದರು. ಪುರಸಭೆ ಮಾಜಿ ಅಧ್ಯಕ್ಷ ನಾಗಪ್ಪ ಸವದತ್ತಿ, ನಿವೃತ್ತ ಶಿಕ್ಷಕ ಕೆ.ಎಲ್. ದೇಶಪಾಂಡೆ, ಕಾರ್ಮಿಕ ಇಲಾಖೆಯ ಸಿಬ್ಬಂದಿಗಳಾದ ಲಲಿತಾ ಗಾಂಜಿಯವರ, ಮಂಜುನಾಥ ಬಾರ್ಕಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.