ಹತಾಶ ಕಾಂಗ್ರೆಸ್ಸಿಗೆ 50 ಸೀಟೂ ಬರಲ್ಲ: ಕಾಗೇರಿ

| Published : Apr 19 2024, 01:05 AM IST

ಸಾರಾಂಶ

ದೇಶದಲ್ಲಿ ಕಾಂಗ್ರೆಸ್ ಅಂತೂ ಇಂತೂ 250 ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ಇದರಲ್ಲಿ 50 ಸ್ಥಾನ ಗೆಲ್ಲುವುದು ಸಹ ಕಷ್ಟವಿದೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಭಟ್ಕಳ: ದೇಶ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಹತಾಶ ಸ್ಥಿತಿಯಲ್ಲಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಸ್ಪರ್ಧಿಸಲು ಸಮರ್ಥ ಅಭ್ಯರ್ಥಿಗಳೇ ಸಿಗುತ್ತಿಲ್ಲ. ಇನ್ನು ಆ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದಾದರೂ ಹೇಗೆ? ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಲೇವಡಿ ಮಾಡಿದ್ದಾರೆ.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ಅಂತೂ ಇಂತೂ 250 ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ಇದರಲ್ಲಿ 50 ಸ್ಥಾನ ಗೆಲ್ಲುವುದು ಸಹ ಕಷ್ಟವಿದೆ. ಆದರೂ ಕಾಂಗ್ರೆಸ್ ತಾನು ಅಧಿಕಾರಕ್ಕೆ ಬರುತ್ತೇನೆಂದು ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ. ಸೋನಿಯಾ, ರಾಹುಲ್ ಗಾಂಧಿ ನಾಯಕತ್ವವನ್ನು ಯಾರೂ ಒಪ್ಪುತ್ತಿಲ್ಲ. ಕಾಂಗ್ರೆಸ್ಸಿನ ಪ್ರಣಾಳಿಕೆಗೆ ನೈತಿಕತೆ ಇಲ್ಲವಾಗಿದೆ. ರಾಜ್ಯದಲ್ಲಿ ಘೋಷಣೆ ಮಾಡಿದ ಗ್ಯಾರಂಟಿ ಯೋಜನೆಗಳು ಹಳ್ಳ ಹಿಡಿದಿದ್ದು, ಯೋಜನೆ ಸಮರ್ಪಕವಾಗಿ ಜನರಿಗೆ ತಲುಪಿಲ್ಲ ಎಂದರು.

ಮಾಜಿ ಸಚಿವ ಶಿವಾನಂದ ನಾಯ್ಕ, ಲೋಕಸಭೆ ಚುನಾವಣೆಯ ಜಿಲ್ಲಾ ಸಂಚಾಲಕ ಗೋವಿಂದ ನಾಯ್ಕ, ಮಾಜಿ ಶಾಸಕ ಸುನೀಲ ನಾಯ್ಕ, ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಈಶ್ವರ ನಾಯ್ಕ, ಬಿಜೆಪಿ ಮಂಡಲಾಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶಿವಾನಿ ಶಾಂತರಾಮ, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ಸುಬ್ರಾಯ ದೇವಡಿಗ, ಶ್ರೀಕಾಂತ ನಾಯ್ಕ, ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ, ಖೇದಾರ ಕೊಲ್ಲೆ ಮುಂತಾದವರಿದ್ದರು.