ಸಾರಾಂಶ
ಗದಗ: ದಿನದಿಂದ ದಿನಕ್ಕೆ ಡೆಂಘೀ ಹರಡುವಿಕೆ ಪ್ರಮಾಣ ಅಧಿಕವಾಗುತ್ತಿದ್ದು, ಡೆಂಘೀ ಸೊಳ್ಳೆ ಉತ್ಪತ್ತಿ ತಾಣ ನಿರ್ಮೂಲನೆ ಮಾಡುವ ಮೂಲಕ ಡೆಂಘೀ ನಿಯಂತ್ರಣಕ್ಕೆ ಮುಂದಾಗುವಂತೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಅವರು ನಗರದ ಶ್ರೀತ್ರಿಕೂಟೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಶಹರ ಲಾರ್ವಾ ಸಮೀಕ್ಷಾ ಅಭಿಯಾನಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದರು.ಲಾರ್ವಾ ಸಮೀಕ್ಷಾ ಕಾರ್ಯ ಮಾಡುವ ವಿಧಾನ ತಮ್ಮೆಲ್ಲರಿಗೂ ಈಗಾಗಲೇ ಗೊತ್ತಿದೆ. ಪ್ರಸಕ್ತ ವರ್ಷದಲ್ಲಿ ಡೆಂಘೀ ಕಾಯಿಲೆ ಅಧಿಕವಾಗಿದ್ದು, ಲಾರ್ವಾ ಸಮೀಕ್ಷೆ ಕಾರ್ಯ ಸರಿಯಾಗಿ ನಿರ್ವಹಿಸಬೇಕು. ಅಲ್ಲದೇ ಲಾರ್ವಾ ಸಮೀಕ್ಷೆ ವೇಳೆ ಮನೆ ಮನೆ ತೆರಳಿ ಕುಟುಂಬದ ಸದಸ್ಯರಿಗೆ ಸೊಳ್ಳೆಗಳ ಉತ್ಪತ್ತಿ ತಾಣ ಬಗ್ಗೆ ಮಾಹಿತಿ ನೀಡಿ ಅವುಗಳನ್ನು ಸಂಪೂರ್ಣ ನಾಶಪಡಿಸುವ ವಿಧಾನ ತಿಳಿಸಿಕೊಡಬೇಕು ಎಂದರು.
ಯಾವುದೇ ಜ್ವರವಿದ್ದರೂ ಮೊದಲು ರಕ್ತ ಪರೀಕ್ಷೆ ಮಾಡಿಸಬೇಕು. ಆರೋಗ್ಯ ಸಿಬ್ಬಂದಿ ನಿಮ್ಮ ಮನೆಯ ಹತ್ತಿರ ಬಂದಾಗ ಜ್ವರ ಪೀಡಿತರು ರಕ್ತ ಲೇಪನ ಸಂಗ್ರಹಿಸಲು ಸಹಕರಿಸಬೇಕು. ಸೊಳ್ಳೆಗಳ ನಾಶಕ್ಕೆ ಕೀಟನಾಶಕ ಸಿಂಪಡಿಸಲು ಬರುವ ಆರೋಗ್ಯ ಸಿಬ್ಬಂದಿಗೆ ನೆರವಾಗಿ ಎಲ್ಲ ಕೋಣೆಗಳಿಗೂ ಕೀಟನಾಶಕ ಸಿಂಪಡಿಸಲು ಅವಕಾಶ ನೀಡಬೇಕು. ಕೀಟನಾಶಕ ಸಿಂಪಡಿಸಿದ ನಂತರ 6 ವಾರಗಳವರೆಗೆ ಸುಣ್ಣ ಬಣ್ಣ ಗೋಡೆಗಳಿಗೆ ಬಳಿಯಬಾರದು. ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಚರಂಡಿ ನಾಲೆಗಳಲ್ಲಿ ಕಸಕಡ್ಡಿ ಎಸೆಯದೇ ನೀರಿನ ಸರಾಗವಾದ ಹರಿಯುವಿಕೆಗೆ ತಡೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.ಜಿಪಂ ಸಿಇಒ ಭರತ್.ಎಸ್ ಮಾತನಾಡಿ, ಈಡಿಸ್ ಸೊಳ್ಳೆಗಳು ಮನೆಯಲ್ಲಿರುವ ನೀರು ಶೇಖರಣೆಯ ತೊಟ್ಟಿಗಳು, ಬ್ಯಾರಲ್ , ಡ್ರಮ್ , ಹೂವಿನ ಕುಂಡ ಮುಂತಾದವುಗಳಲ್ಲದೇ ಮನೆ ಸುತ್ತ ಮುತ್ತ ಬಯಲಲ್ಲಿ ಬಿಸಾಡಿದ ಪಿಂಗಾಣಿ ವಸ್ತುಗಳು, ಪ್ಲಾಸ್ಟಿಕ್ ಕಪ್ಪುಗಳು, ಟೈರ್‌ಗಳು, ಎಳೆನೀರಿನಿಂದ ಚಿಪ್ಪು ಮತ್ತು ಇತರೆ ವಸ್ತುಗಳಲ್ಲಿ ನೀರು ಸಂಗ್ರಹವಾದಾಗ ಉತ್ಪತ್ತಿಯಾಗುತ್ತವೆ. ಅವುಗಳ ಸಂಪೂರ್ಣ ಸರ್ವನಾಶ ಮಾಡುವ ಮೂಲಕ ಡೆಂಘೀ ನಿಯಂತ್ರಣಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ವೆಂಕಟೇಶ ರಾಠೋಡ ಮಾತನಾಡಿ, ಜಿಲ್ಲೆಯಲ್ಲಿ 2024ರ ಜು. 19ರ ವರೆಗೆ 1750 ಪ್ರಕರಣವನ್ನು ಸಂಶಯಾಸ್ಪದವೆಂದು ಗುರುತಿಸಿ 1373 ಜನರ ರಕ್ತದ ಮಾದರಿ ಪರೀಕ್ಷಿಸಲಾಗಿದೆ. ಆ ಪೈಕಿ 117 ಜನರಿಗೆ ಡೆಂಘೀ ಜ್ವರ ಇದ್ದುದು ಖಚಿತಪಟ್ಟಿದೆ. 21 ಜನರು ಜಿಮ್ಸ್‌ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅದರಲ್ಲಿ 4 ಜನರು ಐಸಿಯು ದಲ್ಲಿದ್ದಾರೆ. 12 ಜನರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್.ನೀಲಗುಂದ ಮಾತನಾಡಿ, ಮನೆಯಲ್ಲಿರುವ ನೀರು ಸಂಗ್ರಹಣಾ ಪಾತ್ರೆ ಮತ್ತು ಡ್ರಂಗಳನ್ನು ಸರಿಯಾದ ಮುಚ್ಚಳದಿಂದ ಮುಚ್ಚಿರಿ ಹಾಗೂ ದೊಡ್ಡ ತೊಟ್ಟಿಗಳನ್ನು ವಾರಕ್ಕೊಮ್ಮೆ ಸಂಪೂರ್ಣವಾಗಿ ಖಾಲಿ ಮಾಡಿ, ಸರಿಯಾಗಿ ಮುಚ್ಚಿರಿ ಅಥವಾ ಸೊಳ್ಳೆ ನಿಯಂತ್ರಣ ಜಾಲರಿ ಅಳವಡಿಸಬೇಕು. ಮನೆಯ ಎಲ್ಲ ಕಿಟಕಿ ಬಾಗಿಲುಗಳಿಗೆ ಕೀಟ ತಡೆಗಟ್ಟುವ ಜಾಲರಿ ಅಳವಡಿಸಿಕೊಳ್ಳಬೇಕು. ಮಲಗುವಾಗ ಸೊಳ್ಳೆ ಪರದೆ ಉಪಯೋಗಿಸಬೇಕು. ನೀರಿನ ಬಾವಿ, ಕಾರಂಜಿಗಳು, ಕಟ್ಟಡ ನಿರ್ಮಾಣಕ್ಕಾಗಿ ಸಂಗ್ರಹಿಸಿದ ನೀರು ಶೇಖರಣೆ, ಕೆರೆ, ಕುಂಟೆ ಹೊಂಡ, ಗದ್ದೆ ಜೌಗು ಪ್ರದೇಶದಲ್ಲಿ ಸೊಳ್ಳೆ ಮರಿ ತಿನ್ನುವ ಗ್ಯಾಂಬೂಸಿಯಾ ಮತ್ತು ಗಪ್ಪಿಯೆಂಬ ಲಾರ್ವಾಹಾರಿ ಮೀನುಗಳನ್ನು ಬಿಟ್ಟು ಸೊಳ್ಳೆಗಳ ಉತ್ಪತ್ತಿ ನಿಯಂತ್ರಿಸಬೇಕು ಎಂದು ಹೇಳಿದರು.
ಈ ವೇಳೆ ನಗರಸಭೆ ಸದಸ್ಯ ಸುಧೀರ ಕಾಟಿಗೇರ, ಉಪವಿಭಾಗಾಧಿಕಾರಿ ಡಾ.ವೆಂಕಟೇಶ ನಾಯ್ಕ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ್, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ಮೀನಾಕ್ಷಿ, ಡಾ. ವೈ.ಕೆ.ಭಜಂತ್ರಿ, ಡಾ. ಮಹೇಶ ಕೊಪ್ಪಳ, ಕೀಟ ಶಾಸ್ತ್ರಜ್ಞ ಅನ್ನಪೂರ್ಣ ಶೆಟ್ಟರ್ ಸೇರಿದಂತೆ ಜಿಲ್ಲಾ ಸರ್ವೇಕ್ಷಣಾ ಘಟಕದ ಸಿಬ್ಬಂದಿಗಳು, ತಾಲೂಕಿನ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆರೋಗ್ಯ ನಿರೀಕ್ಷಣಾಧಿಕಾರಿಗಳು, ವೈದ್ಯಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಇದ್ದರು.