ರಾಮನಗರ: ಜಿಲ್ಲಾ ಕೇಂದ್ರ ರಾಮನಗರ ಟೌನಿನ ಅಭಿವೃದ್ಧಿ ದೃಷ್ಟಿಯಿಂದ ವಿಸ್ತೃತವಾದ ಟೌನ್ ಮಾಸ್ಟರ್ ಪ್ಲಾನ್‌ಗೆ ರಾಜ್ಯ ಸರ್ಕಾರದಿಂದ ಶೀಘ್ರದಲ್ಲೇ ಅನುಮೋದನೆ ಪಡೆಯಲಾಗುವುದು ಎಂದು ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗೇಗೌಡ (ಪ್ರಾಣೇಶ್) ತಿಳಿಸಿದರು

ರಾಮನಗರ: ಜಿಲ್ಲಾ ಕೇಂದ್ರ ರಾಮನಗರ ಟೌನಿನ ಅಭಿವೃದ್ಧಿ ದೃಷ್ಟಿಯಿಂದ ವಿಸ್ತೃತವಾದ ಟೌನ್ ಮಾಸ್ಟರ್ ಪ್ಲಾನ್‌ಗೆ ರಾಜ್ಯ ಸರ್ಕಾರದಿಂದ ಶೀಘ್ರದಲ್ಲೇ ಅನುಮೋದನೆ ಪಡೆಯಲಾಗುವುದು ಎಂದು ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗೇಗೌಡ (ಪ್ರಾಣೇಶ್) ತಿಳಿಸಿದರು.

ರಾಮನಗರ ನಗರಾಭಿವೃದ್ಧಿ ಕಚೇರಿಯಲ್ಲಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಈಗಲೂ ಹಿಂದಿನ ಟೌನ್ ಮಾಸ್ಟರ್ ಪ್ಲಾನ್ ಚಾಲ್ತಿಯಲ್ಲಿದೆ. ಕೈಗಾರಿಕೆ, ವಸತಿ, ವಾಣಿಜ್ಯ, ಕೃಷಿ ಝೋನ್‌ಗಳನ್ನು ಹೊಸದಾಗಿ ಮಾಡಬೇಕಿದೆ. ಶೀಘ್ರದಲ್ಲಿಯೇ ಟೌನ್ ಮಾಸ್ಟರ್ ಪ್ಲಾನ್‌ಗೆ ಅನುಮೋದನೆ ಪಡೆಯಲಾಗುವುದು. ನಗರದ ಅಭಿವೃದ್ಧಿಗೆ ಸುತ್ತಮುತ್ತಲಿನ ಮೂರು ನಾಲ್ಕು ಗ್ರಾಮಗಳನ್ನು ನಗರ ವ್ಯಾಪ್ತಿಗೆ ಸೇರಿಸಿ ವಿಸ್ತರಣೆ ಮಾಡುವ ಅಗತ್ಯವಿದೆ. ಇದರಿಂದ ಯೋಜಿತ ರೀತಿಯಲ್ಲಿ ನಗರಾಭಿವೃದ್ಧಿ ಸಾಧ್ಯವಾಗಲಿದೆ ಎಂದು ಹೇಳಿದರು.

ಹಿಂದಿನ ಅಧ್ಯಕ್ಷ ಚೇತನ್ ಕುಮಾರ್ ಅವರು ಕೈಗೊಂಡಿದ್ದ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸುವುದರ ಜತೆಗೆ, ಸರ್ಕಾರದ ಮಟ್ಟದಲ್ಲಿ ಬಗೆಹರಿಸಬೇಕಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು. ಬಡಾವಣೆಗಳ ಸಮಸ್ಯೆಯನ್ನು ಬಗೆಹರಿಸಲಾಗಿದ್ದು, 116 ಎಕರೆಯಲ್ಲಿ ನೂತನ ಬಡಾವಣೆ ನಿರ್ಮಿಸಲಾಗುತ್ತಿದೆ. ಇಲ್ಲ ಕಡಿಮೆ ಬೆಲೆಯಲ್ಲಿ ಬಡವರು, ಮಧ್ಯಮ ವರ್ಗದವರಿಗೆ ಸುಸಜ್ಜಿತ ನಿವೇಶನಗಳನ್ನು ನೀಡಲು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಅನಧಿಕೃತ ಬಡಾವಣೆಗಳಿಗೆ ಅವಕಾಶ ನೀಡುವುದಿಲ್ಲ. ಜನರು ಕಚೇರಿಗಳಿಗೆ ಅಲೆದಾಡದೆ ತ್ವರಿತಗತಿಯಲ್ಲಿ ಕೆಲಸ ಕಾರ್ಯಗಳಾಗುವಂತೆ ವ್ಯವಸ್ಥೆ ಮಾಡುತ್ತಾರೆ. ರೂಡಾವನ್ನು ಜನಸ್ನೇಹಿ ಸಂಸ್ಥೆಯನ್ನಾಗಿ ರೂಪಿಸಲಾಗುವುದು ಎಂದರು.

ಮುಖ್ಯಮಂತ್ರಿಗಳು ನಮ್ಮ ಜಿಲ್ಲೆಯವರೇ ಆಗಿರುವ ಕಾರಣ ಅಗತ್ಯ ಸಹಕಾರ ಪಡೆದು ಜಿಲ್ಲಾ ಕೇಂದ್ರ ರಾಮನಗರ ನಗರಾಭಿವೃದ್ದಿಗೆ ಶ್ರಮಿಸುತ್ತೇನೆ. ಜಿಲ್ಲೆಯ ಅಭಿವೃದ್ಧಿಗಾಗಿ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಅವರ ಮಾರ್ಗದರ್ಶನ ಹಾಗೂ ವಿಶ್ವಾಸದಿಂದ ನನಗೆ ಈ ಸ್ಥಾನ ದೊರೆತಿದ್ದು, ಅವರ ನಂಬಿಕೆಗೆ‌ ದಕ್ಕೆಯಾಗದಂತೆ ಕಾರ್ಯನಿರ್ವಹಿಸುತ್ತೇನೆ ಎಂದು ತಿಳಿಸಿದರು.

1987ರಲ್ಲಿ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಜೀವನ ಆರಂಭಿಸಿದ್ದೇನೆ. ಯುವ ಕಾಂಗ್ರೆಸ್ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ನಮ್ಮ ಜಿಲ್ಲೆಯವರೇ ಮುಖ್ಯಮಂತ್ರಿಯಾಗಬೇಕು ಎಂಬ ಆಶಯದಿಂದ 2023ರಲ್ಲಿ ಕಾಂಗ್ರೆಸ್ ಸೇರ್ಪಡೆಯಾದೆ. ಶಾಸಕ ಎಚ್.ಎ.ಇಕ್ಬಾಲ್ ಹುಸೇನ್ ಅವರ ಗೆಲುವಿಗೂ ಶ್ರಮಿಸಿದ್ದೆ. ಮುಂದಿನ ಚುನಾವಣೆಯಲ್ಲಿಯೂ ಡಿ.ಕೆ. ಶಿವಕುಮಾರ್ ಅವರನ್ನು ಗೆಲ್ಲಿಸಿ ಮತ್ತೊಮ್ಮೆ ಮುಖ್ಯಮಂತ್ರಿ ಮಾಡಬೇಕು ಎಂಬ ಆಶಯ ನನ್ನದು ಎಂದು ಪ್ರಾಣೇಶ್ ಹೇಳಿದರು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಪ್ರಾಣೇಶ್ ಅವರಿಗೆ ನಗರಸಭೆ ಮಾಜಿ ಅಧ್ಯಕ್ಷ ಶೇಷಾದ್ರಿ, ಜಿಬಿಡಿಎ ಅಧ್ಯಕ್ಷ ಎಲ್.ಚಂದ್ರಶೇಖರ್, ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಎಚ್.ರಾಜು, ಜಿಪಂ ಮಾಜಿ ಅಧ್ಯಕ್ಷ ಎಚ್.ಸಿ‌.ರಾಜು, ತಾಪಂ ಮಾಜಿ ಅಧ್ಯಕ್ಷ ಭದ್ರಯ್ಯ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಂ.ರೇವಣ್ಣ, ಮಾಯಾಗಾನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ವೆಂಕಟೇಶ್ ಮೂರ್ತಿ ಅಭಿನಂದಿಸಿದರು.

23ಕೆಆರ್ ಎಂಎನ್ 5.ಜೆಪಿಜಿ

ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗೇಗೌಡ (ಪ್ರಾಣೇಶ್) ಸುದ್ದಿಗಾರರೊಂದಿಗೆ ಮಾತನಾಡಿದರು.