ಸಾರಾಂಶ
ಗರ್ಭದಲ್ಲಿರುವ ಮಗುವಿನ ಬೆಳವಣಿಗೆ ಮತ್ತು ನ್ಯೂನ್ಯತೆ ತಿಳಿಯಲು ಅಭಿವೃದ್ಧಿಪಡಿಸಿದ ತಂತ್ರಜ್ಞಾನದ ದುರುಪಯೋಗ ಮಾಡಿಕೊಂಡು ಪ್ರಸವ ಪೂರ್ವದಲ್ಲಿಯೇ ಗರ್ಭದಲ್ಲಿರುವ ಮಗುವಿನ ಲಿಂಗ ಪತ್ತೆ ಹಚ್ಚುವುದು ಕಾನೂನು ರೀತಿ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ಶ್ರೀಧರ ಅವರು ತಿಳಿಸಿದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರಗರ್ಭದಲ್ಲಿರುವ ಮಗುವಿನ ಬೆಳವಣಿಗೆ ಮತ್ತು ನ್ಯೂನ್ಯತೆ ತಿಳಿಯಲು ಅಭಿವೃದ್ಧಿಪಡಿಸಿದ ತಂತ್ರಜ್ಞಾನದ ದುರುಪಯೋಗ ಮಾಡಿಕೊಂಡು ಪ್ರಸವ ಪೂರ್ವದಲ್ಲಿಯೇ ಗರ್ಭದಲ್ಲಿರುವ ಮಗುವಿನ ಲಿಂಗ ಪತ್ತೆ ಹಚ್ಚುವುದು ಕಾನೂನು ರೀತಿ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ಶ್ರೀಧರ ಅವರು ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಆಶ್ರಯದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಏರ್ಪಡಿಸಲಾಗಿದ್ದ ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ತಂತ್ರ ವಿಧಾನಗಳ (ಲಿಂಗ ಆಯ್ಕೆಯ ನಿಷೇಧ) ಕಾಯಿದೆ 1994ರ ಕುರಿತು ಅರಿವು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಲಿಂಗ ಪತ್ತೆ ತಂತ್ರಜ್ಞಾನವು ದುರ್ಬಳಕೆಯಾಗುತ್ತಿದ್ದು ಗರ್ಭಾವಸ್ಥೆಯಲ್ಲಿ ಶಿಶು ಹೆಣ್ಣು ಎಂದು ಕಂಡುಬಂದ ತಕ್ಷಣ ಅದನ್ನು ಗರ್ಭದಲ್ಲೇ ಹತ್ಯೆ ಮಾಡುವ ಪ್ರವೃತ್ತಿ ಸರಿಯಲ್ಲ. ಇದರ ಪರಿಣಾಮದಿಂದ ಪುರುಷರು ಮತ್ತು ಮಹಿಳೆಯರ ಅನುಪಾತದಲ್ಲಿ ವ್ಯತ್ಯಾಸಗಳುಂಟಾಗುತ್ತದೆ. ಗರ್ಭದಲ್ಲಿರುವ ಮಗುವಿನ ಬೆಳವಣಿಗೆ ಮತ್ತು ನ್ಯೂನ್ಯತೆ ತಿಳಿಯಲು ಅಭಿವೃದ್ಧಿಪಡಿಸಿದ ತಂತ್ರಜ್ಞಾನದ ದುರುಪಯೋಗ ಮಾಡಿಕೊಂಡು ಪ್ರಸವ ಪೂರ್ವದಲ್ಲಿಯೇ ಗರ್ಭದಲ್ಲಿರುವ ಮಗುವಿನ ಲಿಂಗ ಪತ್ತೆ ಹಚ್ಚುವುದು ಕಾನೂನು ರೀತಿ ಶಿಕ್ಷಾರ್ಹ ಅಪರಾಧವಾಗಿದೆ ಎಂದರು.ಮಹಿಳಾ ಸ್ವಯಂ ಸೇವಾ ಸಂಸ್ಥೆಗಳು, ಆರೋಗ್ಯ ಸಂಸ್ಥೆಗಳು, ಗ್ರಾಮ ಮಟ್ಟದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಆರೋಗ್ಯ ಕರ್ತೆಯರು, ಚುನಾಯಿತ ಮಹಿಳಾ ಪ್ರತಿನಿಧಿಗಳು ಸಂಘಟಿತರಾಗಿ ಕಾರ್ಯನಿರ್ವಹಿಸಿದರೆ ಸ್ತ್ರೀ ಭ್ರೂಣ ಹತ್ಯೆ ತಡೆಗಟ್ಟಲು ಸಾಧ್ಯ ಎಂದು ಅವರು ತಿಳಿಸಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ ಅವರು ಮಾತನಾಡಿ ಭ್ರೂಣಲಿಂಗ ಪತ್ತೆ ಹಾಗೂ ಹೆಣ್ಣು ಭ್ರೂಣ ಹತ್ಯೆ ತಡೆಯಲು ಸಾರ್ವಜನಿಕರಿಗೆ ತಿಳಿವಳಿಕೆ ನೀಡಲಾಗುತ್ತಿದೆ. ಪಿಸಿ ಮತ್ತು ಪಿಎನ್‌ಡಿಟಿ ಕಾಯ್ದೆ ಪ್ರಕಾರ ಮೊದಲ ಅಪರಾಧಕ್ಕೆ 3 ವರ್ಷ ಜೈಲು ಶಿಕ್ಷೆ ಜತೆಗೆ 50 ಸಾವಿರ ರು. ದಂಡ, ಎರಡನೇ ಅಪರಾಧಕ್ಕೆ 5 ವರ್ಷ ಜೈಲು ಶಿಕ್ಷೆ 1 ಲಕ್ಷ ರು. ದಂಡ ಹಾಗೂ ವೈದ್ಯಕೀಯ ವೃತ್ತಿಯಿಂದ ಅಮಾನತುಗೊಳಿಸಲು ಅವಕಾಶವಿದೆ. ಶಿಕ್ಷೆ ವೈದ್ಯರಿಗೆ ಮಾತ್ರ ಸೀಮಿತವಲ್ಲ. ಮಹಿಳೆಯ ಗಂಡ, ಅತ್ತೆ, ಮಾವ ಹಾಗೂ ಇವರ ಸಂಬಂಧಿಕರೂ ಭ್ರೂಣ ಲಿಂಗಪತ್ತೆ ಕ್ರಿಯೆಗೆ ಪ್ರೋತ್ಸಾಹಿಸಿದರೆ ಅಂತಹವರೂ ಶಿಕ್ಷೆಗೆ ಒಳಗಾಗಬೇಕಾಗುತ್ತದೆ ಎಂದರು.ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಅಂಕಪ್ಪರವರು ಪ್ರಾಸ್ತಾವಿಕವಾಗಿ ಮಾತನಾಡಿ ಭ್ರೂಣ ಲಿಂಗವನ್ನು ಪತ್ತೆ ಮಾಡಿ ಹತ್ಯೆಗೆ ಕಾರಣರಾದ ಕಾರಣ ಮಹಾರಾಷ್ಟ್ರದಲ್ಲಿ ಪಿಎನ್‌ಡಿಟಿ ಕಾಯ್ದೆ ೧೯೮೮ರಲ್ಲಿ ಮಹಾರಾಷ್ಟ್ರ ಪ್ರಸವಪೂರ್ವ ತಪಾಸಣಾ ತಂತ್ರಗಳ ಕಾಯ್ದೆ 1988ರ ಹೆಸರಿನಲ್ಲಿ ಲಿಂಗಪತ್ತೆ ಪರೀಕ್ಷೆಗಳನ್ನು ತಡೆಗಟ್ಟಲು ಕಾನೂನು ಚಲಾವಣೆಗೆ ಬಂತು. ನಂತರ ಇಡೀ ರಾಷ್ಟ್ರಕ್ಕೆ ಅನ್ವಯವಾಗುವಂತೆ 1994ರಲ್ಲಿ ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ತಂತ್ರ ವಿಧಾನಗಳ (ಲಿಂಗ ಆಯ್ಕೆಯ ನಿಷೇಧ) ಕಾಯಿದೆ ಜಾರಿಗೆ ಬಂದಿತು ಎಂದು ತಿಳಿಸಿದರು. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಸಮಾಜ ಹಾಗೂ ಇಲಾಖೆಗಳಿಗೆ ಕೊಂಡಿಯಾಗಿ ತಳ ಮಟ್ಟದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರಣ ಸಂಬಂಧಿಸಿದ ಮಾಹಿತಿಗಳನ್ನು ಇಲಾಖಾಧಿಕಾರಿಗಳ ಜೊತೆ ಸಂವಹನ ನಡೆಸಿ ಹೀನಕೃತ್ಯಗಳನ್ನು ತಡೆಗಟ್ಟಬಹುದಾಗಿದೆ ಎಂದು ಡಾ. ಅಂಕಪ್ಪ ತಿಳಿಸಿದರು. ಆರ್‌ಸಿಎಚ್ ಅಧಿಕಾರಿ ಡಾ. ಮಂಜುನಾಥ್, ಬಾಲ ನ್ಯಾಯ ಮಂಡಳಿ ಸದಸ್ಯರಾದ ಟಿ.ಜೆ ಸುರೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ಕಾರ್ಯಕ್ರಮಾಧಿಕಾರಿ ದಿನೇಶ್, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿ ನಾಯಕ್, ಜಿಲ್ಲಾ ಆಶಾ ಕೊ-ಆರ್ಡಿನೇಟರ್ ಪ್ರಸಾದ್, ಮೇಲ್ವಿಚಾರಕರಾದ ಆಶಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.