ಸಾರಾಂಶ
ಗುರುವಾರ ನಗರದ ಜಗನ್ನಾಥ ಸಭಾಭವನದಲ್ಲಿ ಜಿಲ್ಲಾಡಳಿತ ವತಿಯಿಂದ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ ನೆರವೇರಿತು.
ಉಡುಪಿ: ಸಾಮಾಜಿಕ ನ್ಯಾಯದ ಹರಿಕಾರ ಡಿ. ದೇವರಾಜ ಅರಸು ಆಡಳಿತಾವಧಿಯಲ್ಲಿ ಬಡವರ ದೀನದಲಿತರ ಕಲ್ಯಾಣ ಯೋಜನೆಗಳು ಇಂದಿಗೂ ಮುಂದುವರಿದಿರುವುದು ಅವರ ದೂರದೃಷ್ಟಿಗೆ ಹಿಡಿದ ಕೈಗನ್ನಡಿ ಎಂದು ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಹೇಳಿದ್ದಾರೆ.
ಗುರುವಾರ ನಗರದ ಜಗನ್ನಾಥ ಸಭಾಭವನದಲ್ಲಿ ಜಿಲ್ಲಾಡಳಿತ ವತಿಯಿಂದ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಉಪಪೊಲೀಸ್ ಅಧೀಕ್ಷಕ ಡಿ.ಟಿ.ಪ್ರಭು ಅವರು ಅರಸು ಬಗ್ಗೆ ಉಪನ್ಯಾಸ ನೀಡಿ, ಅರಸು ಅವರು ಉಳುವವನೆ ಒಡೆಯ, 20 ಅಂಶಗಳ ಕಾರ್ಯಕ್ರಮ, ಮಲಹೊರುವ - ಜೀತ ಪದ್ಧತಿ ರದ್ದು, ಕಾಳಿನದಿ ಯೋಜನೆ ಸ್ಥಾಪನೆ ಮೂಲಕ ರೈತರಿಗೆ ಹಾಗೂ ಗ್ರಾಮೀಣ ಭಾಗದಿಂದ ನಗರ ಪ್ರದೇಶಕ್ಕೆ ಬರುವ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಿರ್ಮಾಣ, ಮೀಸಲಾತಿ ನಿಯಮಗಳ ಮೂಲಕ ಹಿಂದುಳಿದ ವರ್ಗಗಳಿಗೆ ನೀಡಿದ ಕೊಡುಗೆ ಅಪಾರ ಎಂದರು.ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಅಧ್ಯಕ್ಷತೆ ವಹಿಸಿದ್ದರು. 2024-25ನೇ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ.ಯಲ್ಲಿ ಅತಿಹೆಚ್ಚು ಅಂಕಗಳಿಸಿದ ಹಿಂ.ವರ್ಗಗಳ ಇಲಾಖೆಯ ಹಾಸ್ಟೆಲ್ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಪಂ ಉಪಕಾರ್ಯದರ್ಶಿ ಎಸ್.ಎಸ್. ಖಾದರಳ್ಳಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ., ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣ ಸ್ವಾಮಿ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಶಂಕರ್ ಮತ್ತಿತರರು ಇದ್ದರು.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹಾಕಪ್ಪ ಆರ್ ಲಮಾಣಿ ಸ್ವಾಗತಿಸಿದರು. ಉಡುಪಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶ್ರೀಕಾಂತ್ ಜಿ. ಗುನಗಾ ನಿರೂಪಿಸಿದರು. ಇಲಾಖೆಯ ಲೆಕ್ಕ ಅಧೀಕ್ಷಕಿ ಸುಗುಣ ಎ. ವಂದಿಸಿದರು.