ಮಾರ್ಚ್‌ 6ರಿಂದ ದೇವರಾಯನದುರ್ಗ ಲಕ್ಷ್ಮೀ ನರಸಿಂಹಸ್ವಾಮಿ ಜಾತ್ರೆ

| Published : Feb 14 2025, 12:30 AM IST

ಸಾರಾಂಶ

ದೇವರಾಯನದುರ್ಗ ಜಾತ್ರೆ ಅಂಗವಾಗಿ ಮಾರ್ಚ್ 13ರಂದು ಜರುಗಲಿರುವ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿಯ ಬ್ರಹ್ಮ ರಥೋತ್ಸವ

ಕನ್ನಡಪ್ರಭ ವಾರ್ತೆ ತುಮಕೂರು

ತಾಲೂಕಿನ ದೇವರಾಯನದುರ್ಗ ಗ್ರಾಮದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಜಾತ್ರೆಯು ಮಾರ್ಚ್ 6 ರಿಂದ 18ರವರೆಗೆ ಜರುಗಲಿದ್ದು, ಜಾತ್ರಾ ಸಂದರ್ಭದಲ್ಲಿ ಭಕ್ತಾದಿಗಳಿಗೆ ಯಾವುದೇ ರೀತಿಯಲ್ಲಿ ಅನಾನುಕೂಲವಾಗದಂತೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲು ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ದೇವರಾಯನದುರ್ಗ ಜಾತ್ರೆ ಅಂಗವಾಗಿ ಮಾರ್ಚ್ 13ರಂದು ಜರುಗಲಿರುವ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವುದರಿಂದ ಸೂಕ್ತ ಪಾರ್ಕಿಂಗ್, ಬಂದೋಬಸ್ತ್, ಬ್ಯಾರಿಕೇಡಿಂಗ್, ಏಕಮುಖ ಸಂಚಾರ ವ್ಯವಸ್ಥೆ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಜಾತ್ರಾ ದಿನಗಳಂದು ಭಕ್ತಾದಿಗಳಿಗೆ ಪ್ರಸಾದ ವಿತರಿಸುವ ಮುನ್ನ ಗುಣಮಟ್ಟವನ್ನು ಪರೀಕ್ಷಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬ್ರಹ್ಮ ರಥೋತ್ಸವ ದಿನದಂದು ಸ್ವಾಮಿಯನ್ನು ಹೊತ್ತು ಸಾಗುವ ರಥವನ್ನು ಪರಿಶೀಲಿಸಿ ದೃಢೀಕರಣ ಪತ್ರ ನೀಡಬೇಕೆಂದು ಲೋಕೋಪಯೋಗಿ ಇಲಾಖೆಗೆ ನಿರ್ದೇಶನ ನೀಡಿದರು.

ಊರ್ಡಿಗೆರೆಯಿಂದ ದೇವರಾಯನದುರ್ಗಕ್ಕೆ ಹೋಗುವ ರಸ್ತೆ ಬದಿಯಲ್ಲಿರುವ ಗಿಡ-ಗಂಟೆಗಳನ್ನು ತೆರವುಗೊಳಿಸಬೇಕು. ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ರಸ್ತೆ ದುರಸ್ತಿ ಕಾಮಗಾರಿಗಳನ್ನು ಕೈಗೊಂಡಿದ್ದಲ್ಲಿ ಫೆಬ್ರವರಿ ಮಾಹೆಯ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಜಾತ್ರೆ ಸಮಯದಲ್ಲಿ ನಿರಂತರವಾಗಿ 3 ಫೇಸ್ ವಿದ್ಯುತ್ ಸರಬರಾಜು ಮಾಡಬೇಕು. ಮಹಾನವಮಿ ಮಂಟಪದ ಬಳಿಯಿರುವ 23ಕೆವಿ ವಿದ್ಯುತ್ ಪರಿವರ್ತಕವನ್ನು ಬದಲಿಸಿ ಹೊಸದಾಗಿ 63 ಕೆವಿ ವಿದ್ಯುತ್ ಪರಿವರ್ತಕವನ್ನು ಅಳವಡಿಸಬೇಕು. ಇದರಿಂದ ದೇವರಾಯನದುರ್ಗ ಗ್ರಾಮ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಅನುಕೂಲವಾಗುತ್ತದೆ ಎಂದರಲ್ಲದೆ, ವಿದ್ಯುತ್ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಬೆಸ್ಕಾಂ ಇಲಾಖೆಗೆ ಸೂಚನೆ ನೀಡಿದರು.

ಜಾತ್ರೆ ಸಂದರ್ಭದಲ್ಲಿ ದೇವರಾಯನದುರ್ಗ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಬಂಟಿಂಗ್ಸ್/ ಫ್ಲೆಕ್ಸ್ಗಳನ್ನು ಅಳವಡಿಸುವಂತಿಲ್ಲ. ಜಿಲ್ಲಾ ಖಜಾನೆಯಿಂದ ದೇವಾಲಯಕ್ಕೆ ಆಭರಣಗಳನ್ನು ತೆಗೆದುಕೊಂಡು ಬರುವಾಗ ಹಾಗೂ ಹೋಗುವಾಗ ಸೂಕ್ತ ರಕ್ಷಣೆಗಾಗಿ ಗನ್ ಮ್ಯಾನ್ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ತಿಳಿಸಿದರು.

ಜಾತ್ರಾ ಸಮಯದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ತಾತ್ಕಾಲಿಕ ಆಸ್ಪತ್ರೆಯನ್ನು ತೆರೆದು ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳಬೇಕು. ತುರ್ತು ಚಿಕಿತ್ಸಾ ವಾಹನದೊಂದಿಗೆ ಅಗತ್ಯ ಔಷಧಿ, ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜಿಸಬೇಕೆಂದು ಆರೋಗ್ಯ ಇಲಾಖೆಗೆ ನಿರ್ದೇಶನ ನೀಡಿದರು. ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಮಾತನಾಡಿ, ಭಕ್ತಾದಿಗಳ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡಬೇಕು. ಬ್ರಹ್ಮರಥೋತ್ಸವ ದಿನದಂದು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಭಕ್ತಾದಿಗಳ ಅನುಕೂಲಕ್ಕಾಗಿ ಕುಡಿಯುವ ನೀರು, ಮೊಬೈಲ್ ಶೌಚಾಲಯ, ಮತ್ತಿತರ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಭಕ್ತ ಸಮೂಹ ಸ್ನಾನ ಮಾಡುವ ದೇವಾಲಯದ ಕಲ್ಯಾಣಿಯನ್ನು ಸ್ವಚ್ಛಗೊಳಿಸಬೇಕು. ಮುಂಜಾಗ್ರತಾ ಕ್ರಮವಾಗಿ ಕಲ್ಯಾಣಿ ಬಳಿ ಈಜು ಪರಿಣಿತರನ್ನು ನಿಯೋಜಿಸಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ದೇವರಾಯನದುರ್ಗ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ್ ಕುಮಾರ್ ಎಸ್.ಟಿ., ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ಮೋಹನ್ ಕುಮಾರ್, ತಹಸೀಲ್ದಾರ್ ಪಿ.ಎಸ್. ರಾಜೇಶ್ವರಿ, ದೇವಾಲಯದ ಅರ್ಚಕರು, ಮತ್ತಿತರರು ಹಾಜರಿದ್ದರು.ಫೋಟೋ: ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಜಾತ್ರೆ ಪೂರ್ವಭಾವಿ ಸಭೆ ನಡೆಸಿದರು.