ಸಾರಾಂಶ
ಬೆಂಗಳೂರು : ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುವ ಮೊದಲು ಕುಟುಂಬ ಸಮೇತರಾಗಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಶುಕ್ರವಾರ ನಗರದ ತಿರುಮಲಗಿರಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಯಿತು. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಕೇಂದ್ರ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಹಾಗೂ ಪುತ್ರ ಸಹ ಪೂಜೆಯಲ್ಲಿ ಭಾಗಿಯಾಗಿದ್ದರು.
ಪೂಜೆ ಸಲ್ಲಿಸಿದ ಬಳಿಕ ಎಚ್.ಡಿ.ದೇವೇಗೌಡ ಮಾತನಾಡಿ, ನಮ್ಮ ಇಡೀ ವಂಶ ಭಗವಂತನಲ್ಲಿ ನಂಬಿಕೆ ಇಟ್ಟುಕೊಂಡಿದ್ದೇವೆ. ಮೊಮ್ಮಗ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸುವ ಮೊದಲು ಪೂಜಾ ಕೈಂಕರ್ಯಗಳನ್ನು ಸಲ್ಲಿಸಿ, ಭಗವಂತನ ಆರ್ಶಿವಾದ ಪಡೆದಿದ್ದೇವೆ ಎಂದು ಹೇಳಿದರು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ಕಾರ್ಯಕರ್ತರ ಒತ್ತಾಯದ ಮೇರೆಗೆ ನಿಖಿಲ್ ಕುಮಾರಸ್ವಾಮಿಯನ್ನು ಚನ್ನಪಟ್ಟಣದಿಂದ ಕಣಕ್ಕಿಳಿಸಲಾಗಿದೆ. ರಾಮನಗರ ಹಾಗೂ ಮಂಡ್ಯದಲ್ಲಿ ಕುತಂತ್ರ ಮಾಡಿ ನಿಖಿಲ್ ಕುಮಾರಸ್ವಾಮಿಯನ್ನು ಸೋಲಿಸಲಾಯಿತು. ಈ ಬಾರಿ ಕುತಂತ್ರ ಎಲ್ಲ ನಡೆಯಲ್ಲ, ಚನ್ನಪಟ್ಟಣ ಮತದಾರರು ಕುತಂತ್ರಕ್ಕೆ ಬಲಿಯಾಗಲ್ಲ, ನಿಖಿಲ್ ಅವರನ್ನು ಗೆಲ್ಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಚನ್ನಪಟ್ಟಣ ಮಾತ್ರವಲ್ಲ ಸಂಡೂರು, ಶಿಗ್ಗಾವಿಯಲ್ಲಿಯೂ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಗೆಲ್ಲುತ್ತಾರೆ. ಪ್ರಚಾರಕ್ಕೆ ಹೈಕಮಾಂಡ್ ನಾಯಕರು ಬರೋದು ಅನುಮಾನ. ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆಗಳು ಪ್ರಮುಖವಾಗಿವೆ. ಹೀಗಾಗಿ ಅಲ್ಲಿ ಹೆಚ್ಚು ಸಮಯ ಕಳೆಯುತ್ತಾರೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಅಭಿವೃದ್ಧಿಯಾಗುತ್ತಿದೆ. ನರೇಂದ್ರ ಮೋದಿ ದೇಶಕ್ಕೆ ಸೌಹಾರ್ದತೆಯನ್ನು ತಂದಿದ್ದಾರೆ. ಇದು ನಮಗೂ ಸಹಾಯ ಮಾಡುತ್ತದೆ ಎಂದು ಹೇಳಿದರು.
ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ, ದೇವರಲ್ಲಿ ಒಳ್ಳೆಯ ಪ್ರಾರ್ಥನೆ ಮಾಡಿದ್ದು, ತಾತ ದೇವೇಗೌಡರು, ತಂದೆ ಕುಮಾರಸ್ವಾಮಿ. ಪತ್ನಿ ರೇವತಿ ಜೊತೆಗೂಡಿ ಪೂಜೆ ನೆರವೇರಿಸಿದ್ದೇನೆ. ಎನ್‌ಡಿಎ ಮೈತ್ರಿಕೂಟಕ್ಕೆ ತೊಂದರೆಯಾಗದಂತೆ ನಾವು ಗೆಲ್ಲುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಅವರ ವಿಶ್ವಾಸ ಉಳಿಸುವ ಕೆಲಸ ಮಾಡುತ್ತೇನೆ ಎಂದರು.
ನನ್ನ ಪರವಾಗಿ ಎರಡು ಪಕ್ಷದ ಕಾರ್ಯಕರ್ತರು ಅತೀ ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ. ನನಗೆ ಸಂಪೂರ್ಣ ವಿಶ್ವಾಸ ಇದ್ದು, ಚನ್ನಪಟ್ಟಣದಲ್ಲಿ ಕೆಲಸ ಮಾಡಲು ಜನರು ಅವಕಾಶ ನೀಡುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಬಗ್ಗೆ ಮಾತನಾಡಲ್ಲ. ಮುಂದಿನ ತಿಂಗಳು ಮತದಾರ ಪ್ರಭುಗಳು ನನಗೆ ಆಶೀರ್ವಾದ ಮಾಡುತ್ತಾರೆ ಎಂದು ತಿಳಿಸಿದರು.
)
;Resize=(128,128))
;Resize=(128,128))
;Resize=(128,128))
;Resize=(128,128))