ಚನ್ನಪಟ್ಟಣ : ದೇವೇಗೌಡ್ರ ಕುಟುಂಬ 1 ಗುಂಟೆ ದಾನ ಮಾಡಿದ್ದಾರಾ? ಡಿಸಿಎಂ ಡಿ.ಕೆ. ಶಿವಕುಮಾರ್

| Published : Nov 09 2024, 01:14 AM IST / Updated: Nov 09 2024, 12:14 PM IST

ಸಾರಾಂಶ

 ಕನಕಪುರದ ಮೂರು ಕಡೆ ನಮ್ಮ ತಂದೆ ದೊಡ್ದಆಲಹಳ್ಳಿ ಕೆಂಪೇಗೌಡರ 25 ಎಕರೆ ಜಮೀನು ದಾನ ಮಾಡಿದ್ದೇವೆ. ದೇವೇಗೌಡರ ಕುಟುಂಬದವರು ಹಾಸನ, ರಾಮನಗರ, ಚನ್ನಪಟ್ಟಣದಲ್ಲಿ ಒಂದೇ ಒಂದು ಗುಂಟೆ ಜಾಗ ದಾನ ಮಾಡಿದ್ದಾರಾ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.

ಚನ್ನಪಟ್ಟಣ: ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸಬೇಕೆಂಬ ಉದ್ದೇಶದಿಂದ ಕನಕಪುರದ ಮೂರು ಕಡೆ ನಮ್ಮ ತಂದೆ ದೊಡ್ದಆಲಹಳ್ಳಿ ಕೆಂಪೇಗೌಡರ ೨೫ ಎಕರೆ ಜಮೀನು ದಾನ ಮಾಡಿದ್ದೇವೆ. ದೇವೇಗೌಡರ ಕುಟುಂಬದವರು ಹಾಸನ, ರಾಮನಗರ, ಚನ್ನಪಟ್ಟಣದಲ್ಲಿ ಒಂದೇ ಒಂದು ಗುಂಟೆ ಜಾಗ ದಾನ ಮಾಡಿದ್ದಾರಾ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.

ತಾಲೂಕಿನ ಚಕ್ಕೆರೆ, ಹೊನ್ನನಾಯಕನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹೇಳಿಕೆಗೆ ತಿರುಗೇಟು ನೀಡಿದ ಡಿಕೆಶಿ, ದೇವೇಗೌಡರು ಪ್ರಚಾರದ ವೇಳೆ ಡಿ.ಕೆ.ಸಹೋದರರು ಜಮೀನು ಕಬ್ಜ ಮಾಡಿಕೊಂಡಿದ್ದು, ಶಾಲೆ ಕಟ್ಟಲು ಜಾಗ ನೀಡುತ್ತಿಲ್ಲ. ಜಾಗ ಕೇಳಿದರೆ ದುಡ್ಡು, ದುಡ್ಡು ಅಂತಾರೆ ಎಂದು ಆರೋಪ ಮಾಡಿದ್ದಾರೆ. ಕನಕಪುರದಲ್ಲಿ ಶಾಲೆಗಳ ನಿರ್ಮಾಣಕ್ಕೆ ನಾವು ಮೂರು ಕಡೆ ನಮ್ಮ ತಂದೆಗೆ ಸೇರಿದ ೨೫ ಎಕರೆ ಜಾಗವನ್ನು ದಾನ ಮಾಡಿದ್ದೇವೆ. ಯಾರು ಬೇಕಾದರೂ ಹೋಗಿ ನೋಡಬಹುದು ಎಂದು ಹೇಳಿದರು.

ಕುಮಾರಸ್ವಾಮಿ ಹಾಗೂ ದೇವೇಗೌಡರೇ ನೀವು ಎಲ್ಲಾದರೂ ಒಂದು ಎಕರೆ ಜಾಗ ದಾನ ಮಾಡಿದ್ದೀರಾ? ನಾನು ನಿಮ್ಮ ಹಾಗೂ ನಿಮ್ಮ ಜಮೀನಿನ ವಿಚಾರಗಳನ್ನು ಈಗ ಮಾತನಾಡಲು ಹೋಗುವುದಿಲ್ಲ. ಚುನಾವಣೆಗಾಗಿ ನಿಮ್ಮನ್ನು ಟೀಕಿಸುವುದಿಲ್ಲ. ನಿಮ್ಮ ವಯಸ್ಸಿಗೆ ನಾನು ಗೌರವ ನೀಡುತ್ತೇನೆ. ಬಡವರಿಗೆ ಆಗಿರುವ ಮೋಸದ ಬಗ್ಗೆ ಧ್ವನಿ ಎತ್ತಲು ನಾನು ಈ ಪ್ರಶ್ನೆ ಕೇಳಬೇಕಾಗಿದೆ. ಹಾಸನ, ರಾಮನಗರ, ಚನ್ನಪಟ್ಟಣದಲ್ಲಿ ನೀವು ಹಾಗೂ ನಿಮ್ಮ ಕುಟುಂಬದವರು ಒಂದು ಗುಂಟೆ ಜಮೀನನ್ನು ನೀಡಿದ್ದೀರಾ ಎಂದು ಪ್ರಶ್ನಿಸಿದರು.

ಜಾಗ ನೀಡಲು ಸಿದ್ಧ: ನಾನು ಚನ್ನಪಟ್ಟಣದಲ್ಲಿ ಉದ್ಯೋಗ ಮೇಳ ನಡೆಸಿದ ಬಳಿಕ ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಉದ್ಯೋಗ ಮೇಳ ನಡೆಸಿದರು. ಅದೇ ಕೆಲಸವನ್ನು ರಾಮನಗರ ಹಾಗೂ ಚನ್ನಪಟ್ಟಣ ಕ್ಷೇತ್ರದಲ್ಲಿ ಯಾಕೆ ಮಾಡಲಿಲ್ಲ? ನಾವು ಕೈಗಾರಿಕೆ ಸ್ಥಾಪಿಸಲು ಡಿ.ಕೆ. ಶಿವಕುಮಾರ್ ಜಮೀನು ನೀಡುತ್ತಿಲ್ಲ ಎಂದು ಸುಳ್ಳು ಆರೋಪ ಮಾಡಿದ್ದಾರೆ. ಅವರು ಕೇಂದ್ರದ ಮಂತ್ರಿಯಾಗಿ ಕೇವಲ ಆರು ತಿಂಗಳಾಗಿದೆ. ಅವರು ಯಾವತ್ತೂ ಇಂತಹ ಕಡೆ ಕಾರ್ಖಾನೆ, ಕೈಗಾರಿಕೆ ಮಾಡುತ್ತೇವೆ ಎಂದು ಹೇಳಿಲ್ಲ. ಒಂದು ವೇಳೆ ಅವರು ಕೈಗಾರಿಕೆ, ಕಾರ್ಖಾನೆ ಮಾಡಲು ಅನುಮತಿ ನೀಡಿದರೆ, ಜಿಲ್ಲೆಯಲ್ಲಿ ನಾವು ಜಮೀನು ನೀಡಲು ಸಿದ್ಧರಿದ್ದೇವೆ ಎಂದು ಘೋಷಿಸಿದರು.

ಕುಮಾರಸ್ವಾಮಿ ಕ್ಷೇತ್ರಕ್ಕೆ ಏನು ಮಾಡಿದ್ದಾರೆ?

ಯೋಗೇಶ್ವರ್ ಬಿಸಿಲಮ್ಮ ದೇವಾಲಯ ಮಹದೇಶ್ವರ ದೇವಾಲಯದ ಅಭಿವೃದ್ಧಿ ಮಾಡಿದ್ದಾರೆ. ಅದೇ ಕುಮಾರಸ್ವಾಮಿ ರಾಮನಗರ, ಚನ್ನಪಟ್ಟಣ ಕ್ಷೇತ್ರದಲ್ಲಿ ಒಂದು ದೇವಾಲಯ ಅಭಿವೃದ್ಧಿ ಮಾಡಿದ್ದಾರಾ? ಒಂದೇ ಒಂದು ಶುದ್ಧ ಕುಡಿಯುವ ನೀರಿನ ಘಟಕ ನೀಡಿದ್ದಾರಾ? ಇಲ್ಲವಾದರೆ, ಮತ್ತೆ ಯಾಕೆ ನೀವು ಮತ ಕೇಳುತ್ತಿದ್ದೀರಿ? ಎಂದು ಪ್ರಶ್ನಿಸಿದರು.

ನಿಮಗೆ ಹಣವೇ ಮುಖ್ಯವಾ? ಚುನಾವಣೆಗೆ ನೀವು ಸಾಕಷ್ಟು ಹಣ ಖರ್ಚು ಮಾಡಬಹುದು. ಆದರೆ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಬಡವರು ಬದುಕು ಕಟ್ಟಿಕೊಳ್ಳಲು ದಾರಿದೀಪವಾಗಿದೆ. ಸುಳ್ಳು ಹೇಳುವುದಕ್ಕೂ ಒಂದು ಇತಿಮಿತಿ ಇರಬೇಕು. ಅವರು ಈ ಕ್ಷೇತ್ರದಲ್ಲಿ ಆರು ವರ್ಷ ಶಾಸಕರಾಗಿದ್ದಾಗ, ಮುಖ್ಯಮಂತ್ರಿಯಾಗಿದ್ದಾಗ ನಿಮ್ಮ ಊರಿಗೆ ಎಂದಾದರೂ ಬಂದಿದ್ದಾರಾ? ಎಂದು ಪ್ರಶ್ನಿಸಿದರು.

ಎಚ್‌ಡಿಕೆ ಸಹಾಯ ಮಾಡಲಿಲ್ಲ:

ಕುಮಾರಸ್ವಾಮಿ ಹಾಗು ಪತ್ನಿ ರಾಮನಗರ ಹಾಗೂ ಚನ್ನಪಟ್ಟಣದಲ್ಲಿ ಶಾಸಕರಾಗಿದ್ದವರು. ನೀವು ಕೋವಿಡ್ ಸಮಯದಲ್ಲಿ ಜನರಿಗೆ ನೆರವಾಗಿದ್ದೀರಾ? ಡಿ.ಕೆ.ಸುರೇಶ್ ಜನರಿಗೆ ನೆರವಾಗಲಿಲ್ಲವೇ? ಅನಾಥ ಶವಗಳಿಗೆ ಅಂತ್ಯಸಂಸ್ಕಾರ ಮಾಡಲಿಲ್ಲವೇ? ಇಂತಹ ಕೆಲಸ ನೀವು ಏಕೆ ಮಾಡಲಿಲ್ಲ. ಮನೆಯಲ್ಲಿ ಅವಿತು ಕುಳಿತ್ತಿದ್ರಿ. ಯಾರಿಗೂ ಸಹಾಯ ಮಾಡಲಿಲ್ಲ. ಕಷ್ಟಕ್ಕೆ ಆಗಲಿಲ್ಲವಾದರೆ ಮತ್ತೆ ಯಾವಾಗ ಜನರ ಜೊತೆ ನಿಲ್ಲುತ್ತೀರಾ ಎಂದು ಪ್ರಶ್ನಿಸಿದರು.

ಕಾರ್ಯಕರ್ತರ ಪರಿಸ್ಥಿತಿ ಏನು:

ನನ್ನ ಮೊಮ್ಮಗನ ಪಟ್ಟಾಭಿಷೇಕ ಮಾಡುವವರೆಗೂ ನಾನು ಬದುಕಿರುತ್ತೇನೆ ಎಂದು ದೇವೇಗೌಡರು ಹೇಳಿದ್ದಾರೆ. ಬಹಳ ಸಂತೋಷ, ಆದರೆ ನಿಮಗಾಗಿ ದುಡಿದ ಕಾರ್ಯಕರ್ತರ ಪರಿಸ್ಥಿತಿ ಏನಾಗಬೇಕು. ಕುಮಾರಸ್ವಾಮಿ ಕ್ಷೇತ್ರದ ಒಬ್ಬ ಕಾರ್ಯಕರ್ತನಿಗೆ ಅಧಿಕಾರ ಕೊಟ್ಟಿದ್ದಾರಾ ಎಂದು ಡಿಕೆ ಶಿವಕುಮಾರ್‌ ಪ್ರಶ್ನಿಸಿದರು.

ಸಭೆಯಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ. ಸುಧಾಕರ್, ಮಂಕಾಳವೈದ್ಯ, ಸಂಸದ ಶ್ರೇಯಸ್ ಪಟೇಲ್, ಶಾಸಕರಾದ ಶ್ರೀನಿವಾಸ್, ಕದಲೂರು ಉದಯ್, ರಂಗನಾಥ್ ಅನೇಕ ನಾಯಕರು ಹಾಜರಿದ್ದರು. 

ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪ್ರಚಾರ ಸಭೆಯನ್ನು ಡಿ.ಕೆ. ಶಿವಕುಮಾರ್ ಉದ್ಘಾಟಿಸಿದರು. ಕಾಂಗ್ರೆಸ್‌ ಅಭ್ಯರ್ಥಿ ಯೋಗೇಶ್ವರ್‌, ಕಾಂಗ್ರೆಸ್‌ ಸ್ಥಳೀಯ ನಾಯಕರು ಹಾಜರಿದ್ದರು.