ಕನ್ನಡಪ್ರಭ ವಾರ್ತೆ ಅರಸೀಕೆರೆ
ಶಿಕ್ಷಣವು ಕೇವಲ ಪದವಿ ಪಡೆಯುವುದಕ್ಕೆ ಸೀಮಿತವಾಗದೆ ವ್ಯಕ್ತಿತ್ವ ನಿರ್ಮಾಣಕ್ಕೂ ದಾರಿಯಾಗಬೇಕು. ವಿದ್ಯಾರ್ಥಿಗಳು ಸಮಾಜಕ್ಕೆ ಕೊಡುಗೆ ನೀಡುವ ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕೆಂದು ಎಂದು ಹಾಸನ ಲೋಕಸಭಾ ಸದಸ್ಯ ಶ್ರೇಯಸ್ ಎಂ.ಪಟೇಲ್ ಹೇಳಿದರು.ನಗರದ ವೆಂಕಟೇಶ್ವರ ಕಲಾಭವನದಲ್ಲಿ ರಾಯಲ್ ಇನ್‌ಸ್ಟಿಟ್ಯೂಟ್ ಆಫ್ ಕಾಮರ್ಸ್ ಕಾಲೇಜು ವತಿಯಿಂದ ಆಯೋಜಿಸಿದ್ದ ‘ಗ್ರಾಜುಯೇಶನ್ ಡೇ’ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಇಂದಿನ ಯುವಜನತೆ ಸ್ಪರ್ಧಾತ್ಮಕ ಯುಗದಲ್ಲಿ ಬದುಕುತ್ತಿರುವುದರಿಂದ ಪದವಿಯ ಜೊತೆಗೆ ಕೌಶಲ್ಯಾಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡಬೇಕು. ಯುಪಿಎಸ್‌ಸಿ, ಕೆಪಿಎಸ್‌ಸಿ, ಬ್ಯಾಂಕಿಂಗ್, ಚಾರ್ಟರ್ಡ್ ಅಕೌಂಟೆನ್ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಈಗಿನಿಂದಲೇ ಸಿದ್ಧತೆ ನಡೆಸಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲೂ ಅಪಾರ ಪ್ರತಿಭೆ ಇದ್ದು, ಸರಿಯಾದ ಮಾರ್ಗದರ್ಶನ ಮತ್ತು ಪರಿಶ್ರಮದ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯವಿದೆ ಎಂದು ಹೇಳಿದರು. ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿಯನ್ನು ಅರಿತು ಶಿಕ್ಷಣವನ್ನು ಸಮಾಜಮುಖಿ ಕಾರ್ಯಗಳಿಗೆ ಬಳಸಬೇಕು. ಪೋಷಕರ ತ್ಯಾಗ ಮತ್ತು ಶಿಕ್ಷಕರ ಮಾರ್ಗದರ್ಶನವನ್ನು ಗೌರವಿಸುವ ಮನೋಭಾವ ಬೆಳೆಸಿಕೊಳ್ಳುವುದು ಅಗತ್ಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೆಪಿಸಿಸಿ ಸದಸ್ಯ ಹಾಗೂ ಮುಖಂಡ ಶಶಿಧರ್ ಮಾತನಾಡಿ, ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರಗಳಲ್ಲಿ ದಿನದಿಂದ ದಿನಕ್ಕೆ ಹೊಸ ಅವಕಾಶಗಳು ಸೃಷ್ಟಿಯಾಗುತ್ತಿವೆ. ವಿಶೇಷವಾಗಿ ಸಿಎ, ಫೈನಾನ್ಸ್, ಬ್ಯಾಂಕಿಂಗ್ ಹಾಗೂ ಉದ್ಯಮ ನಿರ್ವಹಣಾ ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ ಯುವಕರಿಗೆ ಉತ್ತಮ ಭವಿಷ್ಯವಿದೆ ಎಂದು ಹೇಳಿದರು. ಯಶಸ್ಸು ಪಡೆಯಲು ಶಿಸ್ತು, ಸಮಯಪಾಲನೆ ಮತ್ತು ನಿರಂತರ ಪರಿಶ್ರಮ ಅತ್ಯವಶ್ಯಕ. ವಿದ್ಯಾರ್ಥಿಗಳು ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ದೂರವಿದ್ದು ತಮ್ಮ ಗುರಿಯತ್ತ ಗಮನಹರಿಸಬೇಕು. ಪೋಷಕರು ಮಕ್ಕಳ ಶಿಕ್ಷಣಕ್ಕಾಗಿ ಅಪಾರ ತ್ಯಾಗ ಮಾಡುತ್ತಿರುವುದನ್ನು ಅರಿತು ಸಮಾಜದಲ್ಲಿ ಉತ್ತಮ ಸ್ಥಾನ ಗಳಿಸುವ ಮೂಲಕ ಅವರ ಕನಸುಗಳನ್ನು ನನಸಾಗಿಸಬೇಕೆಂದು ಕರೆ ನೀಡಿದರು.ಸಮಾರಂಭದಲ್ಲಿ ಕರವೇ ಜಿಲ್ಲಾ ಉಪಾಧ್ಯಕ್ಷ ಹೇಮಂತ್ ಕುಮಾರ್, ಕಾಲೇಜಿನ ಕಾರ್ಯದರ್ಶಿ ಉಷಾ ಬೋಪಯ್ಯ, ಪ್ರಾಂಶುಪಾಲ ಕೆ.ಎಸ್. ಮಂಜುನಾಥ್, ಯುವ ಮುಖಂಡ ನವೀನ್ ಸೇರಿದಂತೆ ಉಪನ್ಯಾಸಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಕಾರ್ಯಕ್ರಮದ ಅಂಗವಾಗಿ ಅಂತಿಮ ವರ್ಷದ ಬಿ.ಕಾಂ ಮತ್ತು ಬಿ.ಬಿ.ಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.