ವಿಜ್ಞಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಸೇರಿದಂತೆ ವಿವಿಧ ವಿಭಾಗಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ವಹಿಸುವುದರಿಂದ ಭವಿಷ್ಯ ಉಜ್ವಲವಾಗುತ್ತದೆ. ಶಿಕ್ಷಕರು ಕ್ರಿಯಾತ್ಮಕ ಚಟುವಟಿಕೆಗಳನ್ನು ವಿದ್ಯಾರ್ಥಿಗಳಿಗೆ ನೀಡಬೇಕು. ಪ್ರೌಢಶಾಲಾ ಹಂತದಿಂದಲೇ ಪಠ್ಯೇತರ ಚಟುವಟಿಕೆ ಪ್ರೋತ್ಸಾಹಿಸಿ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ವಿಜ್ಞಾನ ಮತ್ತು ತಂತ್ರಜ್ಞಾನ ಜೀವನದ ಒಂದು ಭಾಗವಾಗಿದ್ದು, ವಿದ್ಯಾರ್ಥಿಗಳು ತಂತ್ರಜ್ಞಾನ ಸದುಪಯೋಗ ಪಡಿಸಿಕೊಂಡು ಸಮಾಜಕ್ಕೆ ಉಪಯೋಗವಾಗುವ ಕೊಡುಗೆಗಳನ್ನು ನೀಡಬೇಕು ಎಂದು ಆದಿಚುಂಚನಗಿರಿ ಶಾಖಾ ಮಠದ ಕಾರ್ಯದರ್ಶಿ ಮಂಗಳನಾಥ ಸ್ವಾಮೀಜಿ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ನಗರ ಹೊರವಲಯದ ಅಗಲಗುರ್ಕಿಯ ಬಿಜಿಎಸ್ ಸೈನ್ಸ್ ಅಕಾಡೆಮಿ ಜ್ಞಾನಗಂಗೋತ್ರಿ ಕ್ಯಾಂಪಸ್‌ನಲ್ಲಿ ಆಯೋಜಿಸಿದ್ದ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ 28 ನೇ ರಾಜ್ಯಮಟ್ಟದ ವಿಜ್ಞಾನೋತ್ಸವ-2025ರ ಸಮಾರೋಪ ಸಮಾರಂಭದಲ್ಲಿ ಆರ್ಶೀವಚನ ನೀಡಿದರು.

ಪಠ್ಯೇತರ ಚಟುವಟಿಕೆ ಅಗತ್ಯ

ವಿಜ್ಞಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಸೇರಿದಂತೆ ವಿವಿಧ ವಿಭಾಗಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ವಹಿಸುವುದರಿಂದ ಭವಿಷ್ಯ ಉಜ್ವಲವಾಗುತ್ತದೆ. ಶಿಕ್ಷಕರು ಕ್ರಿಯಾತ್ಮಕ ಚಟುವಟಿಕೆಗಳನ್ನು ವಿದ್ಯಾರ್ಥಿಗಳಿಗೆ ನೀಡಬೇಕು. ಪ್ರೌಢಶಾಲಾ ಹಂತದಿಂದಲೇ ಅವರನ್ನು ಪ್ರಾಜೆಕ್ಟ್ ಸೇರಿದಂತೆ ವಿವಿಧ ಬಗೆಯ ಪಠ್ಯೇತರ ಚಟುವಟಿಕೆಗಳಿಗೂ ಸಿದ್ಧಗೊಳಿಸಬೇಕು’ ಎಂದರು. ಬಿಜಿಎಸ್ ಶಿಕ್ಷಣ ಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿ ಡಾ.ಎನ್. ಶಿವರಾಮರೆಡ್ಡಿ ಮಾತನಾಡಿ, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು. ಬಾಲ್ಯದಿಂದಲೇ ಸಂಶೋಧನಾ ಮನೋಭಾವ ಬೆಳೆಸಿಕೊಳ್ಳುವುದರಿಂದ ಉತ್ತಮ ಸಾಧನೆ ಮಾಡಬಹುದು. ಹೊಸ ಹೊಸ ವಿಚಾರಗಳನ್ನು ಸಂಶೋಧಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಚಿಂತನೆ ನಡೆಸಬೇಕು’ ಎಂದರು.ವಿಜ್ಞಾನ ವಿಷಯ ಕಷ್ಟವಲ್ಲ

ವಿಜ್ಞಾನದ ವಿಷಯ ಕಷ್ಟ ಎಂಬ ಮನೋಭಾವ ವಿದ್ಯಾರ್ಥಿಗಳಲ್ಲಿದೆ. ಆದರೆ, ಈ ಭಾವನೆಯಿಂದ ಹೊರಬರಲು ವಿಜ್ಞಾನ ಮೇಳ ಆಯೋಜಿಸಲಾಗಿದೆ. ವಿದ್ಯಾರ್ಥಿಗಳೇ ಸಿದ್ಧಪಡಿಸಿರುವ ವಿಜ್ಞಾನ ಪ್ರಾಯೋಗಿಕ ಮಾದರಿಗಳನ್ನು ತಯಾರಿಸಿದ್ದು ಹೊಸ ಸಂಶೋಧನೆಗೆ ನಾಂದಿ ಹಾಡಲು ವಿಜ್ಞಾನ ಮೇಳ ಸಹಕಾರಿಯಾಗಲಿದೆ. ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ವಿದ್ಯಾರ್ಥಿಗಳು ಹೆಚ್ಚು ಗಮನ ಹರಿಸುವುದರಿಂದ ಕ್ರಿಯಾಶೀಲತೆ ಹೆಚ್ಚುತ್ತದೆ’ ಎಂದರು. ಬಿಜಿಎಸ್ ಪಿ. ಯು ಕಾಲೇಜಿನ ಡೀನ್ ಡಾ.ಮಧುಸೂಧನ್ ಮಾತನಾಡಿ,ಮಕ್ಕಳು ಭಯಮುಕ್ತ ವಾತಾವರಣ ಸೃಷ್ಟಿಸಿಕೊಂಡು ವಿಜ್ಞಾನದ ಪರಿಕಲ್ಪನೆಗಳನ್ನು ಸರಿಯಾಗಿ ಅರ್ಥೈಸಿಕೊಳ್ಳಲು ವಿಜ್ಞಾನ ಪ್ರದರ್ಶನ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಯಾವುದೇ ಹೊಸ ವಿಷಯ ಕುರಿತು ಪ್ರಶ್ನಿಸುವ ಮನೋಭಾವನೆ ಮೈಗೂಡಿಸಿಕೊಳ್ಳಬೇಕು. ಮೂಲ ವಿಜ್ಞಾನಕ್ಕೆ ಹೆಚ್ಚು ಒತ್ತು ನೀಡಿ ಭವಿಷ್ಯದಲ್ಲಿ ವಿಜ್ಞಾನಿಗಳಾಗಿ ಹೊರಹೊಮ್ಮಬೇಕು ಎಂದರು.

ತಂತ್ರಜ್ಞಾನ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಿ

ವಸ್ತುಪ್ರದರ್ಶನಗಳು ಮೂಢನಂಬಿಕೆ ನಿವಾರಣೆ, ವೈಜ್ಞಾನಿಕ ಚಿಂತನೆ, ಸಂಶೋಧನಾ ಮನೋವೃತ್ತಿ ಅಭಿವೃದ್ಧಿಗೆ ದಾರಿಯಾಗುತ್ತವೆ. ವಿದ್ಯಾರ್ಥಿಗಳು ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗದೇ ತಂತ್ರಜ್ಞಾನ ಮತ್ತು ಪಠ್ಯೇತರ ಚಟುವಟಿಕೆಗಳಲ್ಲೂಆಸಕ್ತಿ ಬೆಳೆಸಬೇಕು ಎಂದು ಸಲಹೆ ನೀಡಿದರು. ಈ ವೇಳೆ ರಾಜ್ಯದ ಎಲ್ಲಡೆಯಿಂದ ಆಗಮಿಸಿದ್ದ ಶ್ರೀ ಆದಿ ಚುಂಚನಗಿರಿ ಶಿಕ್ಷಣ ಸಂಸ್ಥೆಗಳಿಂದ ಆಗಮಿಸಿ, ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ, ಪ್ರಶಸ್ತಿ ಪತ್ರ ಮತ್ತು ಪದಕಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಬಿಜಿಎಸ್ ಪಿ.ಯು ಕಾಲೇಜಿನ ಪ್ರಾಂಶುಪಾಲ ಹೆಚ್.ಬಿ. ರಮೇಶ್ , ಬಿಜಿಎಸ್ ಇಂಗ್ಲೀಷ್ ಸ್ಕೂಲ್ ಪ್ರಾಂಶುಪಾಲ ಡಿ.ಸಿ.ಮೋಹನ್ ಕುಮಾರ್ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ ಶಾಲಾ ಕಾಲೇಜುಗಳ ಬೋಧಕ-ಬೋಧಕೇತರ ಸಿಬ್ಭಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.