ಪಠ್ಯದ ಜೊತೆಗೆ ಕ್ರೀಡೆಯಲ್ಲಿಯೂ ಆಸಕ್ತಿ ಬೆಳೆಸಿಕೊಳ್ಳಿ

| Published : Jan 14 2025, 01:02 AM IST

ಸಾರಾಂಶ

ರಾಜ್ಯಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ವಿಜೇತರಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಹೊಂಗನೂರು ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ರಾಮಲಿಂಗಯ್ಯ ಹಾಗೂ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಭಾರತಿ ಬಬಲೇಶ್ವರ ಅಭಿನಂದಿಸಿದರು.

ಕನ್ನಡಪ್ರಭ ವಾರ್ತೆ ಚನ್ನಪಟ್ಟಣ

ರಾಜ್ಯಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ವಿಜೇತರಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಹೊಂಗನೂರು ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ರಾಮಲಿಂಗಯ್ಯ ಹಾಗೂ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಭಾರತಿ ಬಬಲೇಶ್ವರ ಅಭಿನಂದಿಸಿದರು.ಇತ್ತೀಚಿಗೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕು ಆದಿಚುಂಚನಗಿರಿಯಲ್ಲಿ ನಡೆದ ರಾಜ್ಯಮಟ್ಟದ ಹ್ಯಾಂಡ್ ಬಾಲ್ ಪಂದ್ಯಾವಳಿಯಲ್ಲಿ ರಾಮನಗರ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಹೊಂಗನೂರು ಸರ್ಕಾರಿ ಪ್ರೌಢಶಾಲೆಯ ತಂಡವು ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ. ಈ ಅಂಗವಾಗಿ ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ರಾಮಲಿಂಗಯ್ಯ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿ, ಕ್ರೀಡೆ ವ್ಯಕ್ತಿಯನ್ನು ದೈಹಿಕವಾಗಿ ಮಾತ್ರವಲ್ಲ ಮಾನಸಿಕವಾಗಿಯೂ ಬಲಾಡ್ಯನನ್ನಾಗಿಸುತ್ತದೆ. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆಯಲ್ಲಿಯೂ ಆಸಕ್ತಿ ಬೆಳೆಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ನಮ್ಮ ಹೊಂಗನೂರು ಪ್ರೌಢಶಾಲೆಯ ವಿದ್ಯಾರ್ಥಿಗಳು ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುವುದು ನಮ್ಮ ತಾಲೂಕಿಗೆ ಹೆಮ್ಮೆ ಪಡುವ ವಿಷಯವಾಗಿದೆ ಈ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದರು.ದೈಹಿಕ ಶಿಕ್ಷಣ ಪರಿವೀಕ್ಷಕರಾದ ಭಾರತಿ ಬಬಲೇಶ್ವರ ಮಾತನಾಡಿ, ಹೊಂಗನೂರು ಪ್ರೌಢಶಾಲೆಯ ವಿದ್ಯಾರ್ಥಿಗಳು ಮಾಡಿದ ಸಾಧನೆ ಇತರ ವಿದ್ಯಾರ್ಥಿಗಳಿಗೂ ಪ್ರೇರಣೆ ನೀಡುವಂಥದ್ದು. ರಾಷ್ಟ್ರಮಟ್ಟದಲ್ಲಿ ತಾಲೂಕನ್ನೂ, ಜಿಲ್ಲೆಯನ್ನೂ, ತಮ್ಮ ಹುಟ್ಟೂರನ್ನೂ ಪ್ರತಿನಿಧಿಸಿ ಸಾಧನೆ ಮಾಡುವುದರ ಮೂಲಕ ನಾವೆಲ್ಲರೂ ಹೆಮ್ಮೆಪಡುವಂತೆ ಮಾಡಿದ ಇಂತಹ ಸಾಧಕರು ಪ್ರತಿಯೊಬ್ಬರ ಜೀವನದ ಸ್ಪೂರ್ತಿ ಚಿಲುಮೆಗಳು, ಇಂತಹ ಸಾಧಕರನ್ನು ಅಭಿನಂದಿಸಿ ಪ್ರೋತ್ಸಾಹಿಸಿದರೆ ಅವರು ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.ಬಿಇಒ ಕಚೇರಿಯ ಶಿಕ್ಷಣ ಸಂಯೋಜಕರಾದ ರಾಜಲಕ್ಷ್ಮಿ, ಹೊಂಗನೂರು ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ವಿಜಯಕಾಂತ್, ಮುಖ್ಯಶಿಕ್ಷಕಿ ಬಾಲಸರಸ್ವತಿ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪದಾಧಿಕಾರಿಗಳಾದ ವೈ. ಕೆ.ಸುಧಾ, ನಾಗರಾಜು, ಸಂಗಯ್ಯ ಹಿರೇಮಠ, ದಿನೇಶ್, ಪ್ರಮೀಳಾ, ಆನಂದ್, ಕೃಷ್ಣಪ್ಪ, ಸಾಕಮ್ಮ, ಅಂಬೇಡ್ಕರ್ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ವೆಂಕಟೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಹೊಂಗನೂರು ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಕವನ, ಅರಸು, ಸ್ವಪ್ನ ಅರಸು, ಹಂಸಿತ, ಶೋಭಮ್ಮಣ್ಣಿ, ಬಿಂದು ಅರಸು, ಶರಣ್ಯ ರವರನ್ನು ಶಿಕ್ಷಣ ಇಲಾಖೆ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು.