ಕನ್ನಡವನ್ನು ಕೀಳರಿಮೆಯಿಂದ ನೋಡದೆ, ಆತ್ಮವಿಶ್ವಾಸ ಮತ್ತು ಹೆಮ್ಮೆಯಿಂದ ಮಾತನಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ನಮ್ಮ ಮಾತೃಭಾಷೆಯನ್ನು ಉಳಿಸಿ ಬೆಳೆಸುವ ಕೆಲಸ ಪ್ರತಿಯೊಬ್ಬರ ಮನೆಯಿಂದಲೇ ಆರಂಭವಾಗಬೇಕು. ಸಾಮೂಹಿಕ ಪ್ರಯತ್ನದ ಮೂಲಕ ಕನ್ನಡ ಭಾಷೆಯ ಗೌರವವನ್ನು ಹೆಚ್ಚಿಸಬೇಕು.

ಕನ್ನಡಪ್ರಭ ವಾರ್ತೆ ಹಲಗೂರು

ಕನ್ನಡ ಭಾಷೆ, ನಾಡು ಮತ್ತು ಸಂಸ್ಕೃತಿಯ ಉಳಿವು ಕೇವಲ ಸರ್ಕಾರ ಅಥವಾ ಸಂಘ-ಸಂಸ್ಥೆಗಳ ಜವಾಬ್ದಾರಿಯಲ್ಲ. ಪ್ರತಿಯೊಬ್ಬ ಕನ್ನಡಿಗನೂ ತನ್ನ ದೈನಂದಿನ ಬದುಕಿನಲ್ಲಿ ಕನ್ನಡವನ್ನು ಬಳಸಿ ಅಭಿಮಾನ ಬೆಳೆಸಿಕೊಂಡು ಭಾಷೆ ಬೆಳವಣಿಗೆಗೆ ಕೊಡುಗೆ ನೀಡಬೇಕು ಎಂದು ನಿವೃತ್ತ ಕನ್ನಡ ಪ್ರಾಧ್ಯಾಪಕ ಪ್ರೊ.ಎಚ್.ಎಸ್.ಮುದ್ದೇಗೌಡ ಕರೆ ನೀಡಿದರು.

ಹಲಗೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ಗುರುವಾರ ಆಯೋಜಿಸಿದ್ದ 71ನೇ ಕನ್ನಡ ರಾಜ್ಯೋತ್ಸವ ಹಾಗೂ ‘ನಾಡು-ನುಡಿ ಮತ್ತು ಚಿಂತನೆ’ ವಿಷಯ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇಂದಿನ ಆಧುನಿಕತೆಯ ಭರಾಟೆಯಲ್ಲಿ ಕನ್ನಡ ಭಾಷೆ ಬಳಕೆ ಕಡಿಮೆಯಾಗುತ್ತಿರುವುದು ಆತಂಕದ ಸಂಗತಿ. ಕನ್ನಡ ಮಾತನಾಡುವಾಗ ಅನಗತ್ಯವಾಗಿ ಇಂಗ್ಲಿಷ್ ಪದಗಳನ್ನು ಬೆರೆಸಿ ಮಾತನಾಡುವ ಪ್ರವೃತ್ತಿಯನ್ನು ಕೈಬಿಡಬೇಕು ಎಂದರು.

ಕನ್ನಡವನ್ನು ಕೀಳರಿಮೆಯಿಂದ ನೋಡದೆ, ಆತ್ಮವಿಶ್ವಾಸ ಮತ್ತು ಹೆಮ್ಮೆಯಿಂದ ಮಾತನಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ನಮ್ಮ ಮಾತೃಭಾಷೆಯನ್ನು ಉಳಿಸಿ ಬೆಳೆಸುವ ಕೆಲಸ ಪ್ರತಿಯೊಬ್ಬರ ಮನೆಯಿಂದಲೇ ಆರಂಭವಾಗಬೇಕು. ಸಾಮೂಹಿಕ ಪ್ರಯತ್ನದ ಮೂಲಕ ಕನ್ನಡ ಭಾಷೆಯ ಗೌರವವನ್ನು ಹೆಚ್ಚಿಸಬೇಕು ಎಂದು ಕರೆ ನೀಡಿದರು.

ಮಕ್ಕಳಿಗೆ ಬಾಲ್ಯದಿಂದಲೇ ಕನ್ನಡ ಭಾಷೆಯ ಮೇಲಿನ ಪ್ರೀತಿ ಮತ್ತು ಅಭಿಮಾನ ಬೆಳೆಸಬೇಕು. ಮನೆಯಲ್ಲಿ ಕನ್ನಡ ಮಾತನಾಡುವುದು, ಕನ್ನಡ ಪುಸ್ತಕಗಳನ್ನು ಓದುವುದು, ಸಾಹಿತ್ಯಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದು ಹಾಗೂ ಕನ್ನಡದ ಕವಿಗಳು, ಸಾಹಿತಿಗಳು ಮತ್ತು ಸಾಧಕರ ವಿಚಾರಗಳನ್ನು ತಿಳಿದುಕೊಳ್ಳುವುದು ಅಗತ್ಯವಾಗಿದೆ. ಕನ್ನಡ ಶಾಲೆಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಮುಂದಿನ ಪೀಳಿಗೆಗೂ ಭಾಷೆಯ ಶ್ರೀಮಂತ ಪರಂಪರೆಯನ್ನು ಪರಿಚಯಿಸಬೇಕು ಎಂದರು.

ಪ್ರಾಂಶುಪಾಲ ಎನ್.ಎಸ್.ಶಂಕರೇಗೌಡ ಮಾತನಾಡಿ, ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ನಾಡಿನ ಉದ್ದಗಲಕ್ಕೂ ಪಸರಿಸುವಲ್ಲಿ ಕವಿಗಳು, ಸಾಹಿತಿಗಳು ಹಾಗೂ ಸಾಹಿತ್ಯಾಸಕ್ತರ ಕೊಡುಗೆ ಅಪಾರವಾಗಿದೆ ಎಂದು ಶ್ಲಾಘಿಸಿದರು.

ಕನ್ನಡ ಭಾಷೆ ಬೆಳವಣಿಗೆಗೆ ವಿದ್ಯಾರ್ಥಿಗಳು ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಭಾಷೆ ಮೇಲಿನ ಅಭಿಮಾನ ಕೇವಲ ರಾಜ್ಯೋತ್ಸವದ ಆಚರಣೆಗೆ ಸೀಮಿತವಾಗದೆ ಪ್ರತಿದಿನದ ಬದುಕಿನ ಭಾಗವಾಗಬೇಕು ಎಂದು ಸಲಹೆ ನೀಡಿದರು.

ಇದೇ ವೇಳೆ ನಿವೃತ್ತ ಕನ್ನಡ ಪ್ರಾಧ್ಯಾಪಕ ಪ್ರೊ. ಎಚ್.ಎಸ್.ಮುದ್ದೇಗೌಡ ಅವರಿಗೆ ಕಾಲೇಜು ವತಿಯಿಂದ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಪ್ರೊ.ಸೀಮಾ ಕೌಸರ್, ತಾರಾ, ಜಯಲಕ್ಷ್ಮಿ, ಗುರುಪ್ರಸಾದ್, ಬಿ.ಸಿ.ರವಿ, ಕುಮಾರಸ್ವಾಮಿ, ಉಪನ್ಯಾಸಕರಾದ ಎಂ.ಎಚ್.ಮೂರ್ತಿ, ಕೆ.ಎಂ.ಭವ್ಯ, ಎಚ್.ಟಿ.ಸುಲೋಚನ ಸೇರಿದಂತೆ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು.