ವಸತಿರಹಿತ ಕುಟುಂಬಗಳಿಗೆ ಹಕ್ಕುಪತ್ರ ವಿತರಣಾ ಕಾರ‍್ಯಕ್ರಮ ಉದ್ಘಾಟಿಸಿ ಡಾ.ಜಿ.ಪರಮೇಶ್ವರ ಹೇಳಿಕೆ
ಕನ್ನಡಪ್ರಭ ವಾರ್ತೆ ತುಮಕೂರುರಾಜ್ಯದಲ್ಲಿ ಶಾಂತಿ, ಅಭಿವೃದ್ಧಿ ಹಾಗೂ ಯುವಕರಿಗೆ ಉದ್ಯೋಗಾವಕಾಶ ಇದು ಉಳಿದ ಎರಡು ವರ್ಷಗಳಲ್ಲಿ ನಮ್ಮ ಆದ್ಯತೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.
ಜಿಲ್ಲಾಡಳಿತ, ತುಮಕೂರು ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರ ಅಭಿವೃದ್ಧಿ ಕೋಶ ವತಿಯಿಂದ ಭಾನುವಾರ ಟೌನ್‌ಹಾಲ್ ವೃತ್ತದ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಮುಂಭಾಗ ಜಿಲ್ಲೆ ವಿವಿಧೆಡೆ ಅಲೆಮಾರಿ, ಅರೆ ಅಲೆಮಾರಿ ಸಮುದಾಯ ವಸತಿರಹಿತ ಕುಟುಂಬಗಳಿಗೆ ಹಕ್ಕುಪತ್ರ ವಿತರಣಾ ಕಾರ‍್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಪ್ರಸ್ತುತ ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ನೇತೃತ್ವದ ಸರ್ಕಾರ ಬಂದಿದೆ. ಈ ಸರ್ಕಾರದ ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಮಾಡುವುದು, ರಾಜ್ಯದ ಸರ್ವಾಂಗೀಣ ಅಭಿವೃದ್ಧಿ, ಯುವಕರಿಗೆ ಉದ್ಯೋಗಾವಕಾಶ ಕಲ್ಪಸಿಕೊಡುವುದಾಗಿದೆ ಎಂದು ಅವರು ತಿಳಿಸಿದರು.
ಸಮಾಜದ ಎಲ್ಲ ಜನರ ರೀತಿ ಅಲೆಮಾರಿ ಸಮುದಾಯದ ಕುಟುಂಬವೂ ಮುಖ್ಯವಾಹಿನಿಗೆ ಬರಬೇಕೆಂಬ ಉದ್ದೇಶದಿಂದ ಅಲೆಮಾರಿ ಸಮುದಾಯದ ಕುಟುಂಬಗಳಿಗೆ 209 ಹಕ್ಕುಪತ್ರಗಳನ್ನು ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಅವರಿಗೆ ರಾಜೀವ್‌ಗಾಂಧಿ ವಸತಿ ಯೋಜನೆ ಮೂಲಕ ಮನೆಗಳನ್ನು ಕಟ್ಟಿಸಿಕೊಡಲು ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.
ಅಲೆಮಾರಿ ಸಮುದಾಯ ತಮ್ಮ ಮಕ್ಕಳನ್ನು ಉತ್ತಮ ವಿದ್ಯಾವಂತರನ್ನಾಗಿ ಮಾಡುವ ಮೂಲಕ ಮುಖ್ಯವಾಹಿನಿಗೆ ತರಬೇಕು ಎಂದ ಅವರು, ಇಂತಹ ಕೆಲಸಗಳಿಗೆ ಸರ್ಕಾರ ಹೊಸ ರೂಪ ಕೊಟ್ಟಿದೆ ಎಂದರು.
ತುಮಕೂರು ಮಹಾನಗರ ಪಾಲಿಕೆಯ ಈ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ತಮ್ಮ ಸ್ವಂತ ಖರ್ಚಿನಿಂದ ನಿರ್ಮಿಸಲಾಗಿದೆ. ಅಂತೆಯೇ ಕಾಂಪೌಂಡ್ ಗೋಡೆಗೆ ಶಿಲಾನ್ಯಾಸ ಮಾಡಲಾದ ಡಾ.ಬಾಬು ಜಗಜೀವನ್‌ರಾಮ್ ಭವನದ ಮುಂಭಾಗ ತಮ್ಮ ಸ್ವಂತ ಖರ್ಚಿನಿಂದ ಜಗಜೀವನ್‌ರಾಮ್ ಪ್ರತಿಮೆ ನಿರ್ಮಿಸಲಾಗುವುದು ಎಂದರು.ಶಾಸಕರಾದ ಸುರೇಶ್‌ಗೌಡ, ಜ್ಯೋತಿ ಗಣೇಶ್ ಮಾತನಾಡಿದರು. ಕಾರ‍್ಯಕ್ರಮದಲ್ಲಿ ಬೆಂಗಳೂರು ನಗರ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ನಿಕೇತ್‌ರಾಜ್ ಎಂ, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿ.ಪಂ.ಮುಖ್ಯಕಾರ‍್ಯ ನಿರ್ವಾಹಕ ಅಧಿಕಾರಿ ಬಿ.ವಿ.ಅಶ್ವಿಜ, ಜಿಲ್ಲಾ ಪೊಲೀಸ್ ಅಧೀಕ್ಷಕ ಅಶೋಕ್, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಜಿ.ಪಂ.ಉಪ ಕಾರ‍್ಯದರ್ಶಿ ಸಂಜೀವಪ್ಪ ಇತರರು ಇದ್ದರು.
