ಸಾರಾಂಶ
ರಾಯಚೂರು: ಸಮ ಸಮಾಜದಿಂದ ಮಾತ್ರ ದೇಶ ನಿಜವಾದ ಅಭಿವೃದ್ಧಿ ಕಾಣಲು ಸಾಧ್ಯ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಅಭಿಪ್ರಾಯ ವ್ಯಕ್ತಪಡಿಸಿದರು.
ಸ್ಥಳೀಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಶನಿವಾರ ಮಾತನಾಡಿದರು.ಸಮಾಜದಲ್ಲಿ ಸಮಾನತೆ ಇದ್ದಾಗ ಮಾತ್ರ ಆ ದೇಶವು ಅಭಿವೃದ್ಧಿ ಹೊಂದಲು ಸಾಧ್ಯವಾಗಲಿದ್ದು, ಸಮಾಜಕ್ಕೆ ಅಭಿವೃದ್ಧಿ ಮತ್ತು ಸಮಾನತೆಯ ಕುರಿತು ಬಸವಣ್ಣನವರು ನೀಡಿದ ತತ್ವಾದರ್ಶಗಳನ್ನು ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.
ಸಮಾಜದಲ್ಲಿ ಮಹಿಳೆಯರ ಅಭಿವೃದ್ಧಿ, ಮಹಿಳೆಯರಿಗೆ ಸಮಾನತೆ ಒದಗಿಸಿ ಸಮ ಸಮಾಜ ನಿರ್ಮಾಣ ಮಾಡುವಲ್ಲಿ ಬಸವಣ್ಣನವರ ಕೊಡುಗೆ ಅಪಾರವಾದದ್ದು, ಅಂತಹ ಸಾಂಸ್ಕೃತಿಕ ನಾಯಕರ ತತ್ವ ಸಿದ್ಧಾಂತಗಳನ್ನು, ಅವರ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕಾಗಿದೆ ಎಂದು ಹೇಳಿದರು.ಗ್ರಾಮೀಣ ಶಾಸಕ ಹಾಗೂ ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರು ಮಾತನಾಡಿ, 12ನೇ ಶತಮಾನದಲ್ಲಿ ಪ್ರಜಾಪ್ರಭುತ್ವದ ವ್ಯವಸ್ಥೆ ಇಡೀ ವಿಶ್ವಕ್ಕೆ ತೋರಿಸಿಕೊಟ್ಟ ಬಸವಣ್ಣನವರು ಜಾತಿ ವ್ಯವಸ್ಥೆ, ಧರ್ಮ ವ್ಯವಸ್ಥೆ ಕುರಿತು ಜನರಲ್ಲಿದ್ದ ಕೆಟ್ಟ ವಿಚಾರಗಳನ್ನು ವಚನಗಳ ಮೂಲಕ ಹೋಗಲಾಡಿಸಿದ್ದಾರೆ ಎಂದರು.
ಬಸವಣ್ಣನವರು ಕಾಯಕವೇ ಕೈಲಾಸ ಎಂಬ ಸಂದೇಶ ಸಾರಿ ಕೆಲಸದಲ್ಲಿ ದೈವತ್ವ ಕಾಣುವಂತೆ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಸರ್ಕಾರ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.ನಿವೃತ್ತ ಪ್ರಾಂಶುಪಾಲ ಪರಮೇಶ್ವರಪ್ಪ ಸಾಲಿಮಠ ಅವರು ಉಪನ್ಯಾಸ ನೀಡಿ, ಬಸವಣ್ಣನವರು ಸಮಾಜದಲ್ಲಿರುವ ಕಂದಾಚಾರ, ಮೌಢ್ಯತೆ, ಅಂಧ ಶ್ರದ್ಧೆ ತೊಲಗಿಸುವ ನಿಟ್ಟಿನಲ್ಲಿ ಉತ್ತಮ ವಿಚಾರಧಾರೆಗಳನ್ನು ಸಮಾಜಕ್ಕೆ ನೀಡುವ ಮೂಲಕ ವಿಶ್ವಗುರುವಾಗಿ, ಇದೀಗ ಸಾಂಸ್ಕೃತಿಕ ನಾಯಕರಾಗಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮಕ್ಕೂ ಮೊದಲು ಸಾಂಸ್ಕೃತಿಕ ನಾಯಕ ಬಸವಣ್ಣನವರು ಎಂಬ ಭಾವಚಿತ್ರ ಅನಾವರಣಗೊಳಿಸಲಾಯಿತು. ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣನವರು ಎಂಬ ಭಾವಚಿತ್ರವನ್ನು ಅಳವಡಿಸಲು ಸೂಚಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಗದೀಶ ಗಂಗಣ್ಣನವರ, ಜಿಪಂ ಉಪ ಕಾರ್ಯದರ್ಶಿ ಶಶಿಕಾಂತ ಶಿವಪುರೆ, ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.