ಪ್ರಜಾಸೇವಾ ಆಂದೋಲನದಿಂದ ರೈತರು ಸರ್ಕಾರಿ ಕಚೇರಿಗೆ ಅಲೆದಾಟ ತಪ್ಪಿಸಿ ತಮ್ಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಹಲವು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜನರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದರೆ ಸಂಬಂಧಪಟ್ಟ ಇಲಾಖೆ ಮೂಲಕ ಸಮಸ್ಯೆಗೆ ಪರಿಹಾರ ದೊರೆಯಲಿದೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ಪಟ್ಟಣದ ಹಿರೋಡೆ ಕೆರೆಯ ನಾಲೆಗಳನ್ನು ಅಭಿವೃದ್ಧಿ ಪಡಿಸಿದರೆ ದೇವೇಗೌಡನಕೊಪ್ಪಲು, ಚಿಕ್ಕಾಡೆ, ಪಟ್ಟಸೋಮನಹಳ್ಳಿ ಸೇರಿದಂತೆ ಈ ಭಾಗದ ಸುಮಾರು 600 ಎಕರೆ ವಿಸ್ತೀರ್ಣದ ರೈತರ ಜಮೀನಿಗೆ ಅನುಕೂಲವಾಗಲಿದೆ ಎಂದು ಜಿಪಂ ಮಾಜಿ ಅಧ್ಯಕ್ಷ ಸಿ.ಬಸವೇಗೌಡ ಹೇಳಿದರು.

ತಾಲೂಕಿನ ಚಿಕ್ಕಾಡೆ ಗ್ರಾಮದಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ ಪ್ರಜಾಸೇವೆ ಆಂದೋಲನದಲ್ಲಿ ಮಾತನಾಡಿ, ನಾಲೆ ಅಭಿವೃದ್ಧಿ ಕಾಮಗಾರಿಗೆ ಭೂ ಸ್ವಾಧೀನ ಮಾಡಿಕೊಂಡ ರೈತರಿಗೆ 1.50 ಲಕ್ಷ ರು. ಪರಿಹಾರ ನೀಡಲಾಗಿದೆ. ಆದರೆ, ಕಾಮಗಾರಿ ಪೂರ್ಣಗೊಳ್ಳಲಿಲ್ಲ. ಕಾಮಗಾರಿ ಪೂರ್ಣಗೊಂಡರೆ ರೈತರ ನೂರಾರು ಎಕರೆ ಜಮೀನಿಗೆ ನೀರು ಉಣಿಸಬಹುದು. ಹೀಗಾಗಿ ಶಾಸಕರು ಕ್ರಮವಹಿಸಬೇಕು ಎಂದು ಸಲಹೆ ನೀಡಿದರು.

ತಹಸೀಲ್ದಾರ್ ಜಿ.ಆದರ್ಶ ಮಾತನಾಡಿ, ಪ್ರಜಾಸೇವೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಒಂದೇ ಸೂರನಡಿ ಜನರ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡಲಿದ್ದಾರೆ. ಜನರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದು ತಪ್ಪುತ್ತದೆ. ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ಪ್ರಜಾಸೇವಾ ಆಂದೋಲನದಿಂದ ರೈತರು ಸರ್ಕಾರಿ ಕಚೇರಿಗೆ ಅಲೆದಾಟ ತಪ್ಪಿಸಿ ತಮ್ಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಹಲವು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜನರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದರೆ ಸಂಬಂಧಪಟ್ಟ ಇಲಾಖೆ ಮೂಲಕ ಸಮಸ್ಯೆಗೆ ಪರಿಹಾರ ದೊರೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ಡಿ.ದೇವರಾಜು ಅರಸು ಅಭಿವೃದ್ಧಿ ನಿಗಮದಿಂದ ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಿಸಲಾಯಿತು. ನಂತರ ಸಾರ್ವಜನಿಕರಿಂದ ಹಲವು ಇಲಾಖೆಗೆ ಸಂಬಂಧಿಸಿದಂತೆ 44 ಅರ್ಜಿಗಳು ಸ್ವೀಕೃತವಾದವು.

ಗ್ರಾಪಂ ಪಿಡಿಒ ಪ್ರಮೋದ್, ಆಡಳಿತಾಧಿಕಾರಿ ಕಿರಣ್‌, ರಾಜಸ್ವ ನಿರೀಕ್ಷಕ ಮಹೇಂದ್ರ, ರೈತ ಸಂಘ ಮುಖಂಡ ಚಿಕ್ಕಾಡೆ ಹರೀಶ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಸಿ.ಎ.ಅರವಿಂದ್ ಇತರರು ಇದ್ದರು.